ಬೀದರ್: ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳ

ಬೀದರ್: ಅನುದಾನ ರಹಿತ ಶಾಲೆಗಳಲ್ಲಿನ ಆರ್‌ಟಿಇ ಸೀಟ್ ರದ್ದತಿ ಹಾಗೂ ಲಾಕ್‌ಡೌನ್‌ನಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ನಂತರ ಅನೇಕ ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳಿಸುತ್ತಿದ್ದಾರೆ. ಹೀಗಾಗಿ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆಯ ಅಂಕಿ ಅಂಶಗಳ ಪ್ರಕಾರ ಜುಲೈ ವೇಳೆಗೆ ಶೇಕಡ 90ರಷ್ಟು ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳಲ್ಲಿ ಪ್ರವೇಶ ಪಡೆದುಕೊಂಡಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಅನುದಾನ ರಹಿತ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ದಿನದಿಂದ ದಿನಕ್ಕೆ ಕ್ಷೀಣಿಸುತ್ತ ನಡೆದಿದೆ. ನಗರದ ಶಾಲೆಗಳಲ್ಲಿ ನಿರೀಕ್ಷಿತ ಬದಲಾವಣೆ ಕಂಡು ಬಂದಿಲ್ಲ.
ಸರ್ಕಾರಿ ಶಾಲೆಗಳಿಗೆ ಮಕ್ಕಳು ಬಾರದಿದ್ದರೆ ತಮ್ಮ ಹುದ್ದೆಗಳಿಗೆ ಕುತ್ತು ಬರಲಿದೆ ಎನ್ನುವುದನ್ನು ಸೂಕ್ಷ್ಮವಾಗಿಯೇ ಅರಿತ ಅನೇಕ ಶಿಕ್ಷಕರು ಜೂನ್ ಹಾಗೂ ಜುಲೈನಲ್ಲಿ ಮನೆ ಮನೆಗೆ ತೆರಳಿ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ಕಲ್ಪಿಸಿಕೊಡುವ ಕುರಿತು ಪಾಲಕರಿಗೆ ಮನವರಿಕೆ ಮಾಡಿದ್ದಾರೆ. ಅಂತೆಯೇ ಆರಂಭದಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ದಾಖಲಾತಿ ಪಡೆದುಕೊಂಡಿದ್ದಾರೆ.
ಖಾಸಗಿ ಶಾಲೆಗಳು ತೆರೆಯದಿದ್ದರೂ ಸರ್ಕಾರಿ ಶಾಲೆಗಳ ಶಿಕ್ಷಕರು ವಟಾರಗಳಲ್ಲೇ ಮಕ್ಕಳಿಗೆ ಪಾಠ ಬೋಧನೆ ಮಾಡುತ್ತಿದ್ದಾರೆ. ಪಾಲಕರು ಪ್ರತ್ಯಕ್ಷವಾಗಿಯೇ ನೋಡಿದ್ದರಿಂದ ಹಾಗೂ ಸರ್ಕಾರಿ ಶಾಲೆಗಳಲ್ಲಿ ಅನೇಕ ಸೌಲಭ್ಯಗಳು ದೊರೆಯುತ್ತಿರುವುದರಿಂದ ಸಹಜವಾಗಿಯೇ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳಿಸುತ್ತಿದ್ದಾರೆ.
‘ಲಾಕ್‌ಡೌನ್ ಇದ್ದರೂ ಶೈಕ್ಷಣಿಕ ವರ್ಷದ ಆರಂಭದಲ್ಲಿ ಪಾಲಕರ ಮನೆಗೆ ತೆರಳಿ ಮನವರಿಕೆ ಮಾಡಿದ್ದೇವೆ. ಹೀಗಾಗಿ ನಮ್ಮ ಶಾಲೆಯಲ್ಲಿ ಅನೇಕ ಮಕ್ಕಳು ದಾಖಲಾತಿ ಪಡೆದುಕೊಂಡಿದ್ದಾರೆ’ ಎಂದು ಭಾಲ್ಕಿ ತಾಲ್ಲೂಕಿನ ಜ್ಯಾಂತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಎಂ.ಎಸ್.ಮನೋಹರ ಹೇಳುತ್ತಾರೆ.
ಜಿಲ್ಲೆಯಲ್ಲಿ ಒಂದನೆಯ ತರಗತಿಗೆ ಸರ್ಕಾರಿ ಶಾಲೆಗಳಲ್ಲಿ 7,083, ಅನುದಾನಿತ ಶಾಲೆಗಳಲ್ಲಿ 2,121 ಹಾಗೂ ಅನುದಾನ ರಹಿತ ಶಾಲೆಗಳಲ್ಲಿ 3,312 ಮಕ್ಕಳು ಪ್ರವೇಶ ಪಡೆದುಕೊಂಡಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ 10,722, ಅನುದಾನಿತ ಶಾಲೆಗಳಲ್ಲಿ 47,747 ಹಾಗೂ ಖಾಸಗಿ ಶಾಲೆಗಳಲ್ಲಿ 10,747 ಮಕ್ಕಳು ಪ್ರವೇಶ ಪಡೆದುಕೊಂಡಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ಶೇಕಡ 84.56 ರಷ್ಟು, ಅನುದಾನಿತ ಶಾಲೆಗಳಲ್ಲಿ ಶೇಕಡ 76.62 ರಷ್ಟು ಹಾಗೂ ಖಾಸಗಿ ಶಾಲೆಗಳಲ್ಲಿ ಶೇಕಡ 72.79 ರಷ್ಟು ಮಕ್ಕಳು ಪ್ರವೇಶ ಪಡೆದುಕೊಂಡಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ ಎಚ್.ಸಿ. ಹೇಳುತ್ತಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.