ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್ | ಖಟಕಚಿಂಚೋಳಿಯಲ್ಲಿ ರಸ್ತೆಯೇ ಚರಂಡಿ!

ನಿಯಮಿತವಾಗಿ ನಡೆಯದ ತ್ಯಾಜ್ಯ ವಿಲೇವಾರಿ: ಸಾಂಕ್ರಾಮಿಕ ರೋಗ ಭೀತಿಯಲ್ಲಿ ಗ್ರಾಮಸ್ಥರು
Last Updated 17 ಅಕ್ಟೋಬರ್ 2022, 19:30 IST
ಅಕ್ಷರ ಗಾತ್ರ

ಖಟಕಚಿಂಚೋಳಿ: ಇಲ್ಲಿಯ ವಾರ್ಡ್‌ಗಳಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಹೊಲಸು ನೀರು ರಸ್ತೆ ಮೇಲೆ ಹರಿಯುತ್ತಿದೆ. ಇದರಿಂದ ನಿವಾಸಿಗಳಿಗೆ ಸಾಂಕ್ರಾಮಿಕ ರೋಗ ಭೀತಿ ಎದುರಾಗಿದೆ.

ಚರಂಡಿಯಲ್ಲಿ ಪ್ಲಾಸ್ಟಿಕ್, ಕಸ–ಕಡ್ಡಿ ತುಂಬಿರುವುದರಿಂದ ನೀರು ಸರಾಗವಾಗಿ ಹರಿದು ಹೋಗುತ್ತಿಲ್ಲ. ಸ್ವಲ್ಪ ಮಳೆ ಬಿದ್ದರೆ ಸಾಕು ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತದೆ. ಇದರಿಂದ ಪಾದಚಾರಿಗಳು ಹಾಗೂ ಶಾಲಾ ಮಕ್ಕಳಿಗೆ ತೊಂದರೆಯಾಗುತ್ತಿದೆ.

ರಸ್ತೆ ಬದಿಯಲ್ಲಿ ಹೊಲಸು ಸಂಗ್ರಹವಾಗಿರುವುದರಿಂದ ಅದು ಸೊಳ್ಳೆ, ಕ್ರಿಮಿ ಕೀಟಗಳ ಉತ್ಪತ್ತಿಯ ಕೇಂದ್ರವಾಗಿ ಮಾರ್ಪಟ್ಟಿದೆ. ಅಲ್ಲದೇ ಸೊಳ್ಳೆ ಕಡಿತದಿಂದ ಆಸ್ಪತ್ರೆಗೆ ಸೇರುವಂತಾಗಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಾರೆ.

ಗ್ರಾಮದ ಪ್ರತಿಯೊಂದು ವಾರ್ಡ್‌ಗಳಲ್ಲಿ ವೈಜ್ಞಾನಿಕವಾದ ಚರಂಡಿ ನಿರ್ಮಿಸಿ ಗ್ರಾಮದಿಂದ ಕೊಳಚೆ ನೀರು ಹೊರ ಹೋಗಲು ವ್ಯವಸ್ಥೆ ಮಾಡಬೇಕು ಎಂಬ ನಿವಾಸಿಗಳ ಮನವಿಗೆ ಯಾರೂ ಸ್ಪಂದಿಸಿಲ್ಲ. ಪಂಚಾಯಿತಿ ಅಧಿಕಾರಿಗಳು ಇದಕ್ಕೂ ನಮಗೂ ಸಂಬಂಧವಿಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ ಎಂದು ನಿವಾಸಿ ಸಂಗಮೇಶ ಅಸಮಾಧಾನ ವ್ಯಕ್ತಪಡಿಸುತ್ತಾರೆ.

‘ರಸ್ತೆ ಬದಿಯಲ್ಲಿ ಸಂಗ್ರಹವಾದ ತ್ಯಾಜ್ಯವನ್ನು ಪಂಚಾಯಿತಿಯವರು ನಿಯಮಿತವಾಗಿ ವಿಲೇವಾರಿ ಮಾಡುತ್ತಿಲ್ಲ. ಇದರಿಂದ ಎಲ್ಲ ಕಸ, ಕಡ್ಡಿ
ಚರಂಡಿ ಸೇರುತ್ತಿದೆ. ಸಾರ್ವಜನಿಕರು ಇಂಥ ದುರ್ನಾತದ ನಡುವೆ ಜೀವನ ಸಾಗಿಸುತ್ತಿದ್ದಾರೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಗ್ರಾಮದ ಸ್ವಚ್ಛತೆ ಕಡೆಗೆ ಗಮನಹರಿಸಬೇಕಿದೆ’ ಎಂದು ಸಾಮಾಜಿಕ ಕಾರ್ಯಕರ್ತ ಉಮೇಶ ಹೇಳುತ್ತಾರೆ.

ಗ್ರಾಮದಲ್ಲಿ ಎರಡು ಶುದ್ಧ ಕುಡಿಯುವ ನೀರಿನ ಘಟಕಗಳಿವೆ. ಆದರೆ ಒಂದು ಕೆಟ್ಟು ನಿಂತು ಸುಮಾರು ಆರು ತಿಂಗಳು ಕಳೆದಿವೆ. ಆ ಕಡೆ ಯಾರೂ ಗಮನ ಹರಿಸುತ್ತಿಲ್ಲ. ಇದರಿಂದ ಕೆಲವರಿಗೆ ಶುದ್ಧ ಕುಡಿಯುವ ನೀರು ಸಿಗುತ್ತಿಲ್ಲ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸುತ್ತಾರೆ.

ಗ್ರಾಮದ ಮನೆಗಳಿಂದ ಬರುವ ತ್ಯಾಜ್ಯ, ಕೊಳಚೆ ನೀರು ಸರಾಗವಾಗಿ ಹರಿದು ಹೊರ ಹೋಗಲು ಚರಂಡಿ ನಿರ್ಮಿಸಿ, ಸೂಕ್ತವಾದ ರಸ್ತೆ ನಿರ್ಮಿಸು ವುದು ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಬೇಕು ಎನ್ನುವುದು ಗ್ರಾಮಸ್ಥರ ಆಗ್ರಹವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT