ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಡಿಯುವ ನೀರಿನ ಕಾಮಗಾರಿಗಳಲ್ಲಿ ಅವ್ಯವಹಾರ; ಸಮಗ್ರ ತನಿಖೆಗೆ ಕರವೇ ಆಗ್ರಹ

ಕುಡಿಯುವ ನೀರಿನ ಕಾಮಗಾರಿಗಳಲ್ಲಿ ಅವ್ಯವಹಾರ ಆರೋಪ
Last Updated 17 ಜೂನ್ 2021, 15:22 IST
ಅಕ್ಷರ ಗಾತ್ರ

ಬೀದರ್: ಔರಾದ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಸಮಗ್ರ ತನಿಖೆ ನಡೆಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ.

ಕ್ಷೇತ್ರ ವ್ಯಾಪ್ತಿಯಲ್ಲಿ 2018-19, 2019-20 ಹಾಗೂ 2020-21ನೇ ಸಾಲಿನಲ್ಲಿ ನಡೆದ ಕುಡಿಯುವ ನೀರಿಗೆ ಸಂಬಂಧಿಸಿದ ಕಾಮಗಾರಿಗಳಲ್ಲಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ನಡೆದಿದೆ ಎಂದು ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಮುಧೋಳ ಆರೋಪಿಸಿದ್ದಾರೆ.

ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರಿನ ಸೌಕರ್ಯ ಕಲ್ಪಿಸಲು ಸರ್ಕಾರ ನೂರಾರು ಕೋಟಿ ರೂಪಾಯಿ ಕಾದಿರಿಸುತ್ತಿದೆ. ಆದರೆ, ಔರಾದ್ ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಕಳಪೆ ಕಾಮಗಾರಿಗಳಿಂದಾಗಿ ಅನುದಾನ ಖರ್ಚಾದರೂ ಸರ್ಕಾರದ ಉದ್ದೇಶ ಈಡೇರುತ್ತಿಲ್ಲ ಎಂದು ಆಪಾದಿಸಿದ್ದಾರೆ.

ಕ್ಷೇತ್ರದಲ್ಲಿ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ ವತಿಯಿಂದ ಕೊಳವೆ ಬಾವಿ ಕೊರೆಯುವುದು, ನೀರಿನ ಟ್ಯಾಂಕ್ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳು ನಡೆಯುತ್ತಿವೆ. ಆದರೆ, ಅನೇಕ ಕಾಮಗಾರಿಗಳಲ್ಲಿ ನಿಯಮ ಗಾಳಿಗೆ ತೂರಲಾಗಿದೆ ಎಂದು ಆರೋಪಿಸಿದ್ದಾರೆ.

ಕೆಲ ಕಡೆ ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರಿಸದ ಖಾಸಗಿ ವ್ಯಕ್ತಿಗಳ ಜಾಗದಲ್ಲಿ ಕೊಳವೆಬಾವಿ ಕೊರೆಯಲಾಗಿದೆ. ನೀರಿನ ಟ್ಯಾಂಕ್‍ಗಳನ್ನು ನಿರ್ಮಿಸಲಾಗಿದೆ ಎಂದು ದೂರಿದ್ದಾರೆ.

ಕ್ರಿಯಾಯೋಜನೆಗೆ ಮಂಜೂರಾತಿ ದೊರಕದಿದ್ದರೂ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಅಂದಾಜು ಪಟ್ಟಿಯನ್ನೂ ಸಿದ್ಧಪಡಿಸದೆ ಗುತ್ತಿಗೆದಾರರು ಮನಬಂದಂತೆ ಕಾಮಗಾರಿ ಕೈಗೊಳ್ಳುತ್ತಿದ್ದಾರೆ. ಅಧಿಕಾರಿಗಳು ಹಣ ಕೊಳ್ಳೆ ಹೊಡೆಯಲು ಗುತ್ತಿಗೆದಾರರಿಗೆ ಸಹಕರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಬೀದರ್ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಶಿವಾಜಿ ಡೋಣೆ ಅವರನ್ನು ಭೇಟಿಯಾಗಿ ದಾಖಲೆ ಸಮೇತ ದೂರು ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೂಡಲೇ ಕಾಮಗಾರಿಗಳ ಸಮಗ್ರ ತನಿಖೆಗೆ ಆದೇಶಿಸಬೇಕು. ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಔರಾದ್ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸೈಯದ್ ಫಜಲ್ ಮಹಮ್ಮದ್, ಕೆಳ ಹಂತದ ಅಧಿಕಾರಿಗಳು ಹಾಗೂ ಇತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ಸಲ್ಲಿಸುವುದು ಅನಿವಾರ್ಯವಾಗಲಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT