ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಮಟ್ಟದ ಪಶು ಮೇಳ ಯಶಸ್ವಿಗೊಳಿಸಿ

ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್‌ ಮನವಿ
Last Updated 5 ಫೆಬ್ರುವರಿ 2020, 15:35 IST
ಅಕ್ಷರ ಗಾತ್ರ

ಜನವಾಡ: ‘ಬೀದರ್ ತಾಲ್ಲೂಕಿನ ಕಮಠಾಣ ಸಮೀಪದ ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಫೆ.7ರಿಂದ ನಡೆಯಲಿರುವ ಮೂರು ದಿನಗಳ ರಾಜ್ಯಮಟ್ಟದ ಪಶುಮೇಳವನ್ನು ಯಶಸ್ವಿಗೊಳಿಸಲು ಎಲ್ಲ ಅಧಿಕಾರಿಗಳು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ತಿಳಿಸಿದರು.

ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಬುಧವಾರ ರಾಜ್ಯಮಟ್ಟದ ಪಶುಮೇಳದ ಅಂತಿಮ ಹಂತದ ಸಿದ್ಧತಾ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿ ಮೊದಲ ಬಾರಿಗೆ ರಾಜ್ಯಮಟ್ಟದ ಪಶುಮೇಳ ನಡೆಯುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಮೇಳಕ್ಕೆ ಬರುವ ಪ್ರತಿಯೊಬ್ಬರು ಜೀವನುದುದ್ದಕ್ಕೂ ಸ್ಮರಿಸುವ ರೀತಿಯಲ್ಲಿ ವ್ಯವಸ್ಥೆ ಮಾಡಬೇಕು. ಮೇಳದಲ್ಲಿ ಯಾವುದೇ ರೀತಿಯ ತೊಡಕುಗಳು ಬಾರದಂತೆ ಎಚ್ಚರಿಕೆ ವಹಿಸಬೇಕು’ ಎಂದು ಸೂಚಿಸಿದರು.

‘ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಶಾಲಾ ಮಕ್ಕಳಿಂದ ಜಾಥಾ ನಡೆಸಿ ಮಶುಮೇಳ ಬಗೆಗೆ ಜನರಲ್ಲಿ ಜಾಗೃತಿ ಮೂಡಿಸಬೇಕು’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ಪಶು ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸುವಂತೆ ನೋಡಿಕೊಳ್ಳಬೇಕು. ಮೂರು ದಿನಗಳವರೆಗೆ ಕೇಂದ್ರ ಬಸ್ ನಿಲ್ದಾಣದಿಂದ ವಿಶ್ವವಿದ್ಯಾಲಯದವರೆಗೆ ಸಾರ್ವಜನಿಕರು ಸುಲಭವಾಗಿ ಬಂದು ಹೋಗಲು ಅನುಕೂಲವಾಗುವಂತೆ ಉಚಿತ ಬಸ್‍ಗಳ ವ್ಯವಸ್ಥೆ ಮಾಡಬೇಕು’ ಎಂದು ಹೇಳಿದರು.

‘ಮೇಳದ ಪ್ರಧಾನ ವೇದಿಕೆಯಲ್ಲಿ ನಡೆಯಲಿರುವ ಕಾರ್ಯಕ್ರಮ ಸಿದ್ಥತೆ ಪೂರ್ಣಗೊಂಡಿದೆ. ಮೇಳಕ್ಕೆ ಬರುವ ಜಾನುವಾರುಗಳಿಗೆ ಒಣ ಮೇವು, ಹಸಿ ಮೇವಿನ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಊಟೋಪಚಾರದ ತಯಾರಿ ಪೂರ್ಣಗೊಂಡಿವೆ’ ಎಂದು ಪಶುಪಾಲನೆ ಮತ್ತು ಪಶು ವೈದ್ಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ.ಗೋವಿಂದ ತಿಳಿಸಿದರು.

ವಾಸ್ತವ್ಯ ವ್ಯವಸ್ಥೆ, ಜಾನುವಾರುಗಳಿಗೆ ಮೇವು ಪೂರೈಕೆ, ಊಟೋಪಚಾರ, ಪ್ರದರ್ಶನ ಮಳಿಗೆಗಳ ನಿರ್ವಹಣೆ, ಜಾನುವಾರು ಪ್ರದರ್ಶನ, ಬಹುಮಾನ ವಿತರಣೆ, ಹಾಲು ಕರೆಯುವ ಸ್ಪರ್ಧೆ, ನೀರು ಮತ್ತು ವಿದ್ಯುತ್‌ ಸೌಕರ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳ ಮಾಹಿತಿ ಪಡೆದರು.

ಪಶು ಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಆಯುಕ್ತ ಎಸ್.ಆರ್.ನಟೇಶ್, ನಿರ್ದೇಶಕ ಡಾ.ಎಂ.ಟಿ. ಮಂಜುನಾಥ, ಜಿಲ್ಲಾಧಿಕಾರಿ ಡಾ.ಎಚ್.ಆರ್.ಮಹಾದೇವ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯರ್ನಿಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ವಿದ್ಯಾನಂದ.ಸಿ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಬಾವಗೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT