ಬುಧವಾರ, ಮಾರ್ಚ್ 3, 2021
30 °C
ಕನ್ನಡ ಬಳಸದಿದ್ದರೆ ನಾಮಫಲಕಗಳಿಗೆ ಮಸಿ: ಎಚ್ಚರಿಕೆ

ಬ್ಯಾಂಕ್‍ಗಳಲ್ಲಿ ಕನ್ನಡ ಬಳಕೆ ಅಭಿಯಾನಕ್ಕೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಬ್ಯಾಂಕ್‍ಗಳಲ್ಲಿ ಕನ್ನಡ ಬಳಕೆ ಅಭಿಯಾನಕ್ಕೆ ಕನ್ನಡ ಅನುಷ್ಠಾನ ಸಮಿತಿ ಸದಸ್ಯ ವಿಜಯಕುಮಾರ ಸೋನಾರೆ ನಗರದ ಕುಂಬಾರವಾಡದ ಭಾರತೀಯ ಸ್ಟೇಟ್ ಬ್ಯಾಂಕ್ ಎದುರು ಕನ್ನಡ ನಾಮಫಲಕ ಪ್ರದರ್ಶಿಸಿ ಚಾಲನೆ ನೀಡಿದರು.

ಜನವರಿ 4 ರ ಒಳಗೆ ಜಿಲ್ಲೆಯ ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಇರುವ ಅಂಗಡಿ ಮುಂಗಟ್ಟುಗಳ ಮೇಲೆ ಕನ್ನಡದಲ್ಲಿ ನಾಮಫಲಕ ಬರೆಸಬೇಕು. ಇಲ್ಲವಾದಲ್ಲಿ ನಾಮಫಲಕಗಳಿಗೆ ಮಸಿ ಬಳಿಯಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜನವರಿ 5 ರಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅವರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅವರೊಂದಿಗೆ ಕನ್ನಡ ನಾಮಫಲಕ ಅಳವಡಿಕೆ ಕುರಿತು ಅಂಗಡಿಗಳ ಮಾಲೀಕರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ತಿಳಿಸಿದರು.

ಬ್ಯಾಂಕ್ ಸಿಬ್ಬಂದಿಗೆ ರಜೆ ದಿನಗಳಲ್ಲಿ ಕನ್ನಡ ಕಲಿಸಲು ಪರಿಷತ್ತಿನಿಂದ ಕನ್ನಡ ಕಲಿಕಾ ಕೇಂದ್ರ ಶುರು ಮಾಡಲಾಗುವುದು ಎಂದು ಹೇಳಿದರು.

ಜಿಲ್ಲೆಯ ಎಲ್ಲ ಬ್ಯಾಂಕ್‍ಗಳಲ್ಲಿ ಕನ್ನಡದಲ್ಲೇ ವ್ಯವಹಾರ ಮಾಡಲು ಆಯಾ ಬ್ಯಾಂಕ್ ಅಧಿಕಾರಿಗಳಿಗೆ ಸುತ್ತೋಲೆ ಕಳುಹಿಸಲಾಗುವುದು ಎಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕ ಬಾಳಪ್ಪ ಕಮತಗಿ ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ, ಕನ್ನಡ ಅನುಷ್ಠಾನ ಸಮಿತಿ ಸದಸ್ಯರಾದ ಎಂ.ಪಿ. ಮುದಾಳೆ, ಬಸವರಾಜ ಜೋಜನಾ, ಜೈಕರವೇ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀಮಂತ ಸಪಾಟೆ, ಕನ್ನಡ ಸಾಹಿತ್ಯ ಪರಿಷತ್ ನಗರ ಘಟಕದ ಅಧ್ಯಕ್ಷ ಸುನೀಲ್ ಭಾವಿಕಟ್ಟಿ, ಕರ್ನಾಟಕ ಸ್ವಾಭಿಮಾನಿ ವೇದಿಕೆಯ ಅಧ್ಯಕ್ಷ ಸಂತೋಷ ಏಣಕೂರು, ಶಶಿ ಹೊಸಳ್ಳಿ, ಸುಧಾಕರ ಎಲ್ಲಾನೋರ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.