ಖಟಕಚಿಂಚೋಳಿ: ಕಳೆದ ಕೆಲ ದಿನಗಳಿಂದ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಜಿಲ್ಲೆಯ ಜನರ ಕುಡಿಯುವ ನೀರಿನ ಮೂಲವಾದ ಕಾರಂಜಾ ಜಲಾಶಯ ತುಂಬಿ ಹರಿಯುತ್ತಿದೆ. ಇದರಿಂದ ಎಲ್ಲರ ಆತಂಕ ದೂರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹರ್ಷವ್ಯಕ್ತಪಡಿಸಿದರು.
ಭಾಲ್ಕಿ ತಾಲ್ಲೂಕಿನ ಬ್ಯಾಲಹಳ್ಳಿ(ಕೆ) ಗ್ರಾಮದಲ್ಲಿರುವ ಕಾರಂಜಾ ಜಲಾಶಯಕ್ಕೆ ಕರ್ನಾಟಕ ನೀರಾವರಿ ನಿಗಮದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಾಗಿನ ಅರ್ಪಿಸಿ ಅವರು ಮಾತನಾಡಿದರು.
‘ಬಾಗಿನ ಅರ್ಪಣೆ ನಮ್ಮ ಪೂರ್ವಜರಿಂದ ನಡೆದು ಬಂದ ಪದ್ಧತಿ. ಹೀಗೆ ಮಾಡುವುದರಿಂದ ಜಲದೇವತೆ ಪ್ರಸನ್ನಳಾಗುವಳು ಎನ್ನುವ ನಂಬಿಕೆ ಇದೆ. ಆದ್ದರಿಂದ ಗಣೇಶ ಚತುರ್ಥಿಯ ಶುಭದಿನದಂದು ಈ ಬಾಗಿನ ಅರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಹೇಳಿದರು.
‘ಜಲಾಶಯದ ಹಿನ್ನೀರಿನಲ್ಲಿ ರೈತರ ಭೂಮಿ ಹೋಗಿದೆ. ಪ್ರತಿವರ್ಷ ಹಿನ್ನೀರಿನಿಂದ ರೈತರ ಜಮೀನುಗಳು ನೀರಿನಲ್ಲಿ ಮುಳುಗಡೆಯಾಗುತ್ತಿವೆ. ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಶ್ರಮಿಸಲಾಗುವುದು. ಇನ್ನೊಂದು ಸಲ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ತಿಳಿಸಿದರು.
ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಮಾತನಾಡಿ, ‘ಕಾರಂಜಾ ಜಲಾಶಯಕ್ಕೆ ಬಾಗಿನ ಅರ್ಪಿಸುವುದು ಬಹುದಿನಗಳ ಕನಸಾಗಿತ್ತು. ಅದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ಅಮೃತ ಹಸ್ತದಿಂದ ನೆರವೇರಿದೆ’ ಎಂದು ಸಂತಸ ವ್ಯಕ್ತಪಡಿಸಿದರು.
ಸಚಿವ ರಹೀಂಖಾನ್, ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ, ವಿಧಾನ ಪರಿಷತ್ ಸದಸ್ಯ ಎಂ.ಜಿ.ಮೂಳೆ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ ನಾರಾಯಣರಾವ್, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಬ್ಯಾಲಹಳ್ಳಿ (ಕೆ) ಗ್ರಾಮ ಪಂಚಾಯಿತಿ ಅಧ್ಯಕ್ಷ ಅಶೋಕ ಜಾಧವ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿ ಸಿಇಒ ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಕಲಬುರಗಿ ವಲಯ ಕ.ನೀ.ನಿ.ನಿ.ಎಂಜಿನಿಯರ್ ಸೂರ್ಯಕಾಂತ ಮಾಲೆ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಕಾರಂಜಾ ಯೋಜನೆ ಕಾರ್ಯನಿರ್ವಾಹಕ ಎಂಜಿನಿಯರ್ ಅಬ್ದುಲ್ ಖುದ್ದುಸ್ ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ರೈತರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.