ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರ್ಚ್‌ನಲ್ಲಿ ಕರ್ನಾಟಕವೇ ನಂಬರ್‌ ಒನ್

ಸ್ವಸಹಾಯ ಗುಂಪುಗಳ ದಿನಾಚರಣೆಯಲ್ಲಿ ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ ಹೇಳಿಕೆ
Last Updated 11 ನವೆಂಬರ್ 2020, 15:15 IST
ಅಕ್ಷರ ಗಾತ್ರ

ಬೀದರ್‌: ‘ಬರುವ ಮಾರ್ಚ್‌ ವೇಳೆಗೆ ಸಹಕಾರ ಕ್ಷೇತ್ರದಲ್ಲಿ ಕರ್ನಾಟಕವನ್ನು ರಾಷ್ಟ್ರದ ನಂಬರ್‌ ಒನ್‌ ರಾಜ್ಯವನ್ನಾಗಿ ಮಾಡಲಾಗುವುದು’ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ ಹೇಳಿದರು.

ಇಲ್ಲಿಯ ಡಾ.ಚನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗ ಮಂದಿರದಲ್ಲಿ ಬುಧವಾರ ಡಿಸಿಸಿ ಬ್ಯಾಂಕ್‌ ವತಿಯಿಂದ ಆಯೋಜಿಸಿದ್ದ ‘ಆರ್ಥಿಕ ಸ್ಪಂದನ’ ಹಾಗೂ ಸ್ವಸಹಾಯ ಗುಂಪುಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ರಾಷ್ಟ್ರಮಟ್ಟದಲ್ಲಿ ಸಹಕಾರ ಕ್ಷೇತ್ರದಲ್ಲಿ ಗುಜರಾತ ಹಾಗೂ ಮಹಾರಾಷ್ಟ್ರ ಕ್ರಮವಾಗಿ ಪ್ರಥಮ, ದ್ವಿತೀಯ ಸ್ಥಾನದಲ್ಲಿವೆ. ತೃತೀಯ ಸ್ಥಾನದಲ್ಲಿರುವ ಕರ್ನಾಟಕವನ್ನು ಮೊದಲ ಸ್ಥಾನಕ್ಕೆ ತರಲಾಗುವುದು’ ಎಂದು ಭರವಸೆ ನೀಡಿದರು.

‘ಗ್ರಾಹಕರ ಹಿತ ಹಾಗೂ ಠೇವಣಿದಾರರ ವಿಶ್ವಾಸವನ್ನು ಗಮನದಲ್ಲಿರಿಸಿಕೊಂಡು ಸಹಕಾರ ಕಾನೂನುಗಳಿಗೆ ಕೆಲವೊಂದು ಬದಲಾವಣೆ ಮಾಡುವ ಚಿಂತನೆ ನಡೆದಿದೆ. ಈ ದಿಸೆಯಲ್ಲಿ ಸಹಕಾರ ಕಾನೂನನ್ನು ಇನ್ನಷ್ಟು ಬಿಗಿಗೊಳಿಸಲಾಗು ವುದು’ ಎಂದು ಹೇಳಿದರು.

‘ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದ ಅನುದಾನವನ್ನು ನಾಲ್ಕು ವಿಭಾಗಗಳಿಗೆ ಹಂಚಿಕೆ ಮಾಡಲಾಗಿದೆ. ಬೆಂಗಳೂರು, ಮೈಸೂರು ಹಾಗೂ ಇಂದು ಕಲಬುರ್ಗಿ ವಿಭಾಗದಲ್ಲಿ ಆರ್ಥಿಕ ಸ್ಪಂದನ ಕಾರ್ಯಕ್ರಮದ ಉದ್ಘಾಟನೆ ಮಾಡಲಾಗಿದೆ. ನ.13ರಂದು ಬೆಳಗಾವಿ ವಿಭಾಗದಲ್ಲಿ ಉದ್ಘಾಟನೆ ಮಾಡಲಾಗುವುದು’ ಎಂದು ತಿಳಿಸಿದರು.

‘ಸ್ವಸಹಾಯ ಸಂಘಗಳಿಗೆ ನೇರವಾಗಿ ಸಾಲ ಸೌಲಭ್ಯ ಒದಗಿಸಲು ಈ ಕಾರ್ಯಕ್ರಮ ರೂಪಿಸಲಾಗಿದೆ. ಹೀಗಾಗಿ ಹಿರಿಯ ಅಧಿಕಾರಿಗಳೂ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಪರಿಣಾಮಕಾರಿ ಅನುಷ್ಠಾನಕ್ಕೆ ವಿಶೇಷ ಆಸಕ್ತಿ ವಹಿಸಿದ್ದಾರೆ’ ಎಂದು ಹೇಳಿದರು.

ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಮಾತನಾಡಿ, ‘ವಿಶ್ವದ 80 ದೇಶಗಳ ಅಧಿಕಾರಿಗಳು ಬೀದರ್‌ ಜಿಲ್ಲೆಗೆ ಬಂದು ಸ್ವಸಹಾಯ ಗುಂಪುಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೆಲವು ರಾಷ್ಟ್ರಗಳ ಪ್ರತಿನಿಧಿಗಳು ತರಬೇತಿಯನ್ನೂ ಪಡೆದುಕೊಂಡು ಹೋಗಿದ್ದಾರೆ’ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಹಿಳಾ ಸ್ವಸಹಾಯ ಸಂಘಗಳಿಗೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ಜಿಲ್ಲಾ ಸಹಕಾರ ಹಾಲು ಒಕ್ಕೂಟ, ಪಟ್ಟಣ ಸಹಕಾರ ಬ್ಯಾಂಕ್, ಪತ್ತಿನ ಸಹಕಾರ ಸಂಘಗಳ ಮೂಲಕ ಸಾಲ ವಿತರಿಸಲಾಯಿತು.

ಶಾಸಕ ರಹೀಂ ಖಾನ್‌ ಅಧ್ಯಕ್ಷತೆ ವಹಿಸಿದ್ದರು. ಸಂಸದ ಭಗವಂತ ಖೂಬಾ, ವಿಧಾನ ಪರಿಷತ್‌ ಸದಸ್ಯ ಅರವಿಂದಕುಮಾರ ಅರಳಿ, ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ, ಸಹಕಾರ ಸಂಘಗಳ ನಿಬಂಧಕ ಎಸ್‌.ಜಿಯಾವುಲ್ಲಾ, ಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಭೀಮರಾವ್ ಪಾಟೀಲ, ಮಹಾತ್ಮ ಗಾಂಧಿ ಸಹಕಾ ಸಕ್ಕರೆ ಕಾರ್ಖಾನೆಯ ಅಮರ ಖಂಡ್ರೆ, ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಡಿ.ಕೆ.ಸಿದ್ರಾಮ್, ರಾಜ್ಯ ಸಹಕಾರ ಮಹಿಳಾ ಮಂಡಳದ ಅಧ್ಯಕ್ಷೆ ಶಕುಂತಲಾ ಬೆಲ್ದಾಳೆ ಹಾಗೂ ಡಾ.ಗುರುಪಾದಪ್ಪ ನಾಗಮಾರಪಳ್ಳಿ ಮಲ್ಟಿ ಸೂಪರ್‌ ಸ್ಪೆಷಾಲಿಟಿ ಕೋ–ಆಪರೇಟಿವ್‌ ಹಾಸ್ಪಿಟಲ್ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT