ಶುಕ್ರವಾರ, ಡಿಸೆಂಬರ್ 13, 2019
17 °C

ಕಾನೂನು ಗೌರವಿಸಿ: ಪ್ರೇಮಾವತಿ ಮನಗೂಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಬೀದರ್‌: ‘ಯಾರು ಕಾನೂನನ್ನು ಗೌರವಿಸುತ್ತಾರೋ ಕಾನೂನು ಅವರನ್ನು ರಕ್ಷಿಸುತ್ತದೆ. ಕಾನೂನು ಅರಿವು ಜೀವನದಲ್ಲಿ ನೆರವಿಗೆ ಬರುತ್ತದೆ’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಪ್ರೇಮಾವತಿ ಮನಗೂಳಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಸಾಯಿ ಶಿಕ್ಷಣ ಟ್ರಸ್ಟ್ ಆಶ್ರಯದಲ್ಲಿ ಸೋಮವಾರ ಇಲ್ಲಿಯ ಶಿವನಗರದ ಸಿದ್ಧಿವಿನಾಯಕ ಪದವಿ ಪೂರ್ವ ಕಾಲೇಜಿನಲ್ಲಿ ಮಾನವ ಹಕ್ಕುಗಳ ದಿನಾಚರಣೆ ಪ್ರಯುಕ್ತ ಕಾನೂನು ಅರಿವು–ನೆರವು ಹಾಗೂ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಸಂವಿಧಾನ ನಮಗೆ ಹಲವು ಹಕ್ಕುಗಳನ್ನು ನೀಡಿದೆ. ನಮ್ಮ ಹಕ್ಕು ಮತ್ತು ಕರ್ತವ್ಯಕ್ಕೆ ಚ್ಯುತಿ ಬಂದಾಗ ನ್ಯಾಯಕೋರಿ ಮಾನವ ಹಕ್ಕುಗಳ ಆಯೋಗದಲ್ಲಿ ಪ್ರಕರಣ ದಾಖಲಿಸಬಹುದಾಗಿದೆ’ ಎಂದು ತಿಳಿಸಿದರು.

ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ಕವಿತಾ ಹುಷಾರೆ ಮಾತನಾಡಿ, ‘ದೇಶಕ್ಕೆ ಸ್ವಾತಂತ್ರ್ಯ ಲಭಿಸಿ ದಶಕಗಳಾದರೂ ಅನೇಕ ಸಮಸ್ಯೆಗಳು ತಾಂಡವವಾಡುತ್ತಿವೆ. ಅತ್ಯಾಚಾರ, ಕೊಲೆ, ಸುಲಿಗೆಯಂತಹ ಸಮಸ್ಯೆಗಳಿಗೆ ಕೊನೆ ಇಲ್ಲವೇನೋ ಎಂದೆನಿಸುವ ಮಟ್ಟಿಗೆ ಇಂದು ನಮ್ಮ ಸಾಮಾಜಿಕ ವ್ಯವಸ್ಥೆ ಹದಗೆಟ್ಟಿದೆ. ಇದನ್ನು ಗಮನಿಸಿದರೆ ನಾವಿಂದು ಮನುಷ್ಯತ್ವವನ್ನು ಮರೆಯುತ್ತಿದ್ದೇವೆ ಎಂದೆನಿಸುತ್ತದೆ. ಮಾನವ ಹಕ್ಕುಗಳ ಉಲ್ಲಂಘನೆಯು ನಿತ್ಯ ನಿರಂತರ ನಡೆಯುತ್ತಿದೆ. ಇದು ಸರಿಯಲ್ಲ’ ಎಂದು ತಿಳಿಸಿದರು.

ಸಿದ್ಧಿವಿನಾಯಕ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಗಣೇಶ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆರ್.ರಾಘವೇಂದ್ರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಚಂದ್ರಕಾಂತ ನಾಸಿ, ವಿಜಯಕುಮಾರ ಬಿರಾದಾರ ಉಪಸ್ಥಿತರಿದ್ದರು.

ಪ್ರತಿಕ್ರಿಯಿಸಿ (+)