ಮಂಗಳವಾರ, ನವೆಂಬರ್ 19, 2019
27 °C
ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಮನಗೂಳಿ ಪ್ರೇಮಾವತಿ ಸಲಹೆ

ಅಪೌಷ್ಟಿಕತೆ: ಎಚ್ಚರ ವಹಿಸಿ

Published:
Updated:
Prajavani

ಬೀದರ್‌: ‘ಮಕ್ಕಳು ದೇಶದ ಸಂಪತ್ತಾಗಿದ್ದು, ಅವರು ಅಪೌಷ್ಟಿಕತೆಗೆ ಒಳಗಾಗದಂತೆ ಎಚ್ಚರ ವಹಿಸಬೇಕು’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಮನಗೂಳಿ ಪ್ರೇಮಾವತಿ ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಆಶ್ರಯದಲ್ಲಿ ನಗರದ ಜಿಲ್ಲಾ ಬಾಲಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಪೋಷಣಾ ಅಭಿಯಾನ ಮಾಸಾಚರಣೆ ಕುರಿತ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

‘ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಪೋಷಣಾ ಅಭಿಯಾನವನ್ನು ಆರಂಭಿಸಲಾಗಿದೆ. ಆರು ವರ್ಷದ ಒಳಗಿನ ಮಕ್ಕಳಿಗೆ ತಪ್ಪದೇ ವೈದ್ಯರಿಂದ ತಪಾಸಣೆ ಮಾಡಿಸಬೇಕು. ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಬೇಕು’ ಎಂದು ತಿಳಿಸಿದರು.

‘ಪ್ರತಿ ಜಿಲ್ಲೆಯಲ್ಲಿ 20 ಹಾಸಿಗೆಯ ಪುನರ್ವಸತಿ ಕೇಂದ್ರಗಳನ್ನು ಸ್ಥಾಪಿಸಬೇಕು. ಅಲೆಮಾರಿ ಜನಾಂಗದ ಮಕ್ಕಳ ಹಿತರಕ್ಷಣೆಗೆ ಒಲವು ತೋರಿಸಬೇಕು. ಗರ್ಭಿಣಿ ಮತ್ತು ಬಾಣಂತಿಯರಿಗೆ ಸರ್ಕಾರ ವಿವಿಧ ಸೌಲಭ್ಯಗಳನ್ನು ನೀಡುತ್ತಿದೆ. ಇದರ ಲಾಭ ಪಡೆಯಲು ಮುಂದಾಗಬೇಕು’ ಎಂದು ಸಲಹೆ ಮಾಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿದ್ರಾಮ ಟಿ.ಪಿ ಮಾತನಾಡಿ, ‘ಮಕ್ಕಳು ಮತ್ತು ಬಾಣಂತಿಯರಿಗೆ ಪೌಷ್ಟಿಕ ಆಹಾರ ನೀಡಬೇಕು. ಪೋಷಕರು ಮಕ್ಕಳ ತೂಕದ ಬಗ್ಗೆ ಗಮನ ಹರಿಸಬೇಕು’ ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಮಂಜುನಾಥ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಅಂಬದಾಸ ವಾಗರಾಜ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗೌತಮ ಸಿಂಧೆ, ವೈದ್ಯಾಧಿಕಾರಿ ಡಾ.ಇಂದುಮತಿ ಪಾಟೀಲ, ಮಕ್ಕಳ ತಜ್ಞರಾದ ಡಾ.ಶಾಂತಲಾ, ಕಾನೂನು ಸೇವೆಗಳ ಪ್ರಾಧಿಕಾರದ ಶಂಕ್ರಪ್ಪ ಜನಕಟ್ಟಿ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಪ್ರತಿಕ್ರಿಯಿಸಿ (+)