ಬೀದರ್: ‘ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸೂಚನೆ ಮೇರೆಗೆ ಸೆಪ್ಟೆಂಬರ್ 9ರಂದು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಲೋಕ ಅದಾಲತ್ ಆಯೋಜಿಸಲಾಗಿದೆ. ಕಕ್ಷಿದಾರರು ದ್ವೇಷ ಮರೆತು ಪ್ರಕರಣಗಳನ್ನು ಇತ್ಯರ್ಥಗೊಳಿಸಿಕೊಳ್ಳಬೇಕು’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿದ್ರಾಮಪ್ಪ ಕಲ್ಯಾಣರಾವ ಕನಕಟ್ಟೆ ತಿಳಿಸಿದರು.
ನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಆಸ್ತಿಪಾಲು, ಜೀವನಾಂಶ, ಚೆಕ್ ಬೌನ್ಸ್, ವಿದ್ಯುತ್, ಕಂದಾಯ, ಬ್ಯಾಂಕ್, ವಿವಾಹ ವಿಚ್ಛೇದನಕ್ಕೆ ಸಂಬಂಧಿಸಿದ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು ಎಂದರು.
‘ಸೆ. 9ರ ಲೋಕ ಅದಾಲತ್‌ನಲ್ಲಿ ಬಾಕಿ ಇರುವ ಪ್ರಕರಣಗಳನ್ನು ಹೆಚ್ಚು ಇತ್ಯರ್ಥಪಡಿಸಲು ಯೋಜಿಸಲಾಗಿದೆ. ಆಗಸ್ಟ್ 1ರವರೆಗೆ ಜಿಲ್ಲೆಯಲ್ಲಿ ಒಟ್ಟು 26,322 ಪ್ರಕರಣಗಳು ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳು ಬಾಕಿ ಇವೆ. ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಂಡರೆ ಕಕ್ಷಿದಾರರಿಗೆ ನ್ಯಾಯಾಲಯದ ಶುಲ್ಕ ವಾಪಸ್ ಸಿಗಲಿದೆ. ಲೋಕ ಅದಾಲತ್‌ನಲ್ಲಿ ನಿರ್ಣಯವಾದ ಪ್ರಕರಣಗಳಿಗೆ ಮೇಲ್ಮನವಿ ಸಲ್ಲಿಕೆಗೆ ಅವಕಾಶ ಇರುತ್ತದೆ’ ಎಂದು ಹೇಳಿದರು.
ಜುಲೈ 8ರಂದು ಏರ್ಪಡಿಸಿದ್ದ ಲೋಕ ಅದಾಲತ್‌ನಲ್ಲಿ ಜಿಲ್ಲೆಯಲ್ಲಿ ಒಟ್ಟು 23,340 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಲಾಗಿದೆ. ಒಟ್ಟು ₹10.36 ಕೋಟಿ ಪರಿಹಾರ ಮತ್ತು ವಸೂಲಾತಿ ಮೂಲಕ ಕಕ್ಷಿದಾರರಿಗೆ ಹಣ ಕೊಡಿಸಲಾಗಿದೆ. 23,340 ಪ್ರಕರಣಗಳಲ್ಲಿ 17,521 ಪ್ರಕರಣಗಳು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾಗಿವೆ. ಇವುಗಳನ್ನು ಇತ್ಯರ್ಥಪಡಿಸಿ ಒಟ್ಟು ₹8.77 ಕೋಟಿ ಪರಿಹಾರ ಒದಗಿಸಲಾಗುವುದು. 111 ಬ್ಯಾಂಕ್ ವಸೂಲಾತಿ ಪ್ರಕರಣಗಳನ್ನು ಇತ್ಯರ್ಥಗೊಳಿಸಿ ₹1.05 ಕೋಟಿ ಕಕ್ಷಿದಾರರಿಗೆ ಕೊಡಿಸಲಾಗಿದೆ. ನಗರಸಭೆ, ಪುರಸಭೆ, ಗ್ರಾಮ ಪಂಚಾಯತಿಗಳ ನೀರಿನ ತೆರಿಗೆ, ಬಿ.ಎಸ್.ಎನ್.ಎಲ್, ಜೆಸ್ಕಾಂ ಬಾಕಿ ಬಿಲ್, ಟ್ರಾಫಿಕ್ ಚಾಲನ್ ವಸೂಲಾತಿಯ 5,708 ಪ್ರಕರಣಗಳನ್ನು ಇತ್ಯರ್ಥಗೊಳಿಸಿ ₹53.39 ಲಕ್ಷ ವಸೂಲಾತಿ ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.