ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಿ: ಶಾಸಕ ಶರಣು ಸಲಗರ ಸೂಚನೆ

ಬಸವಕಲ್ಯಾಣ: ನಗರದ ಸಾರ್ವಜನಿಕ ಆಸ್ಪತ್ರೆ ರಸ್ತೆಯಲ್ಲಿ ಮಂಗಳವಾರ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆಯ ₹3.50 ಕೋಟಿ ವೆಚ್ಚದ ಕಟ್ಟಡ ಕಾಮಗಾರಿಗೆ ಶಾಸಕ ಶರಣು ಸಲಗರ ಮಂಗಳವಾರ ಭೂಮಿಪೂಜೆ ನೆರವೇರಿಸಿದರು.
ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ನಿಗದಿತ ಸಮಯದಲ್ಲಿ ಕೆಲಸ ಪೂರ್ಣಗೊಳ್ಳಬೇಕು ಎಂದು ಸ್ಥಳದಲ್ಲಿದ್ದ ಎಂಜಿನಿಯರ್ ಹಾಗೂ ಗುತ್ತಿಗೆದಾರರಿಗೆ ಸಲಹೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನಬಸಪ್ಪ ಹಳ್ಳದ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಡಾ.ಅಂಬಾದಾಸ ಜಮಾದಾರ, ಮುಖ್ಯ ಶಿಕ್ಷಣ ಮಾಣಿಕರಾವ್ ಮಳಗೆ, ಗುಂಡುಪ್ರಸಾದ, ಅಲ್ತಾಫ್, ಎಇಇ ಶರಣಗೌಡ ಪಾಟೀಲ, ಶಿವರಾಜ ಪಲ್ಲೇರಿ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕ ವಕಾರೆ, ಶಂಕರ ನಾಗದೆ, ಅರವಿಂದ ಮುತ್ತೆ ಪಾಲ್ಗೊಂಡಿದ್ದರು.ನಂತರ ಬೆಟಬಾಲ್ಕುಂದಾ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ₹40 ಲಕ್ಷ ವೆಚ್ಚದಲ್ಲಿ ನಿರ್ಮಿಸುತ್ತಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಾಲ್ಕು ಕೊಠಡಿಗಳ ಕಾಮಗಾರಿಗೆ ಶಾಸಕರು ಶಂಕುಸ್ಥಾಪನೆ ನೆರವೇರಿಸಿದರು.
ಚಂಡಕಾಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಲ್ಲಿನ ಪರಿಶಿಷ್ಟರ ಓಣಿಯಲ್ಲಿ ಎಸ್.ಡಿ.ಪಿ ಯೋಜನೆಯಲ್ಲಿ ₹18 ಲಕ್ಷ ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ ಮಾದರಿ ಅಂಗನವಾಡಿ ಕೇಂದ್ರಕ್ಕೂ ಶಾಸಕರು ಶಂಕುಸ್ಥಾಪನೆ ನೆರವೇರಿಸಿದ್ದಾರೆ. ನಗರದ ಅಮೀರಪೇಟ್ ಓಣಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅನುದಾನದಲ್ಲಿ ₹51 ಲಕ್ಷ ವೆಚ್ಚದಲ್ಲಿ ನಿರ್ಮಿಸುತ್ತಿರುವ ಚರಂಡಿ ಹಾಗೂ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಯಿತು.
ಬಂದವರ ಓಣಿಯಲ್ಲಿನ ಹಿಂದುಳಿದವರ ಪದವಿಪೂರ್ವ ವಿದ್ಯಾರ್ಥಿಗಳ ವಸತಿ ನಿಲಯದಲ್ಲಿ ₹18.30 ಲಕ್ಷ ವೆಚ್ಚದ ಗ್ರಂಥಾಲಯ ಕಟ್ಟಡಕ್ಕೂ ಶಾಸಕರು ಶಂಕುಸ್ಥಾಪನೆ ನೆರವೇರಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.