ಮಂಗಳವಾರ, ಅಕ್ಟೋಬರ್ 27, 2020
26 °C
ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ ಮಾಡಿದ ಸಂಸದ ಖೂಬಾ

2ಎಗೆ ಮರಾಠಾ ಸಮಾಜ ಸೇರ್ಪಡೆಗೆ ಸಂಸದ ಭಗವಂತ ಖೂಬಾ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಮರಾಠಾ ಸಮಾಜವನ್ನು ಪ್ರವರ್ಗ 3 ಬಿ ಯಿಂದ 2ಎಗೆ ಸೇರಿಸಬೇಕು ಎಂದು ಸಂಸದ ಭಗವಂತ ಖೂಬಾ ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಅವರು, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವ ತಮ್ಮನ್ನು ಪ್ರವರ್ಗ 2ಎಗೆ ಸೇರಿಸಬೇಕು ಎನ್ನುವ ಮರಾಠರ ಬಹು ದಿನಗಳ ಬೇಡಿಕೆಗೆ ಸ್ಪಂದಿಸಬೇಕು ಎಂದು ಮನವಿ ಮಾಡಿದರು.

2018 ರ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಬೀದರ್‍ಗೆ ಬಂದಿದ್ದಾಗ ಮರಾಠ ಸಮಾಜವನ್ನು ಪ್ರವರ್ಗ 2ಎಗೆ ಸೇರ್ಪಡೆ ಮಾಡಬೇಕು ಎಂದು ಮನವಿ ಮಾಡಿಕೊಳ್ಳಲಾಗಿತ್ತು ಎಂದು ನೆನಪಿಸಿದರು.

2012 ರಲ್ಲಿ ಎನ್.ಶಂಕ್ರೆಪ್ಪ ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದಾಗ ಮರಾಠ ಸಮಾಜವನ್ನು ಪ್ರವರ್ಗ 2ಎಗೆ ಸೇರಿಸುವಂತೆ ಶಿಫಾರಸು ಮಾಡಿದ್ದರು. ಆದರೆ, ನಂತರ ಬಂದ ಯಾವುದೇ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿಲ್ಲ ಎಂದು ತಿಳಿಸಿದರು.

ಖೂಬಾ ಅವರ ಮನವಿಗೆ ಸ್ಪಂದಿಸಿದ ಯಡಿಯೂರಪ್ಪ ಅವರು ಈ ದಿಸೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲಿದ್ದ ಸಮಾಜ ಕಲ್ಯಾಣ ಸಚಿವರೂ ಆದ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಸೂಚಿಸಿದರು.

ಸರ್ಕಾರ ಮರಾಠಾ ಸಮಾಜದವರ ಬೇಡಿಕೆಗೆ ಸ್ಪಂದಿಸಲಿದೆ. ಆದಷ್ಟು ಬೇಗ ಸಮಾಜದ ಬಹು ದಿನಗಳ ಬೇಡಿಕೆ ಈಡೇರಲಿದೆ ಎಂದು ಖೂಬಾ ತಿಳಿಸಿದ್ದಾರೆ.

ಸತ್ಯಕ್ಕೆ ಸಂದ ಜಯ

ಬೀದರ್: ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ 32 ಆರೋಪಿಗಳನ್ನು ದೋಷ ಮುಕ್ತಗೊಳಿಸಿದ ವಿಶೇಷ ಸಿಬಿಐ ನ್ಯಾಯಾಲಯದ ತೀರ್ಪನ್ನು ಸಂಸದ ಭಗವಂತ ಖೂಬಾ ಸ್ವಾಗತಿಸಿದ್ದಾರೆ.

ಮಾಜಿ ಪ್ರಧಾನಿ ಎಲ್.ಕೆ. ಅಡ್ವಾಣಿ, ಮುಖಂಡ ಮುರಳಿ ಮನೋಹರ ಜೋಶಿ, ಉಮಾಭಾರತಿ ಅವರ ವಿರುದ್ಧ ಇಲ್ಲಸಲ್ಲದ ಆರೋಪ ಹೊರೆಸಿ ಅವರ ತೇಜೋವಧೆಗೆ ಪ್ರಯತ್ನಿಸಲಾಗಿತ್ತು. ತೀರ್ಪಿನಿಂದ ಸತ್ಯಕ್ಕೆ ಜಯ ಸಂದಿದೆ ಎಂದು ಹೇಳಿದ್ದಾರೆ.

ಅಯೋಧ್ಯೆಯಲ್ಲಿ ಈಗಾಗಲೇ ಭೂಮಿ ಪೂಜೆ ನೆರವೇರಿ ರಾಮಮಂದಿರ ನಿರ್ಮಾಣ ಹಂತದಲ್ಲಿ ಇದೆ. ಬರುವ ವರ್ಷಗಳಲ್ಲಿ ರಾಮ ಭಕ್ತರ ಕನಸು ನನಸಾಗಲಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.