ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಂತುಹುಳು: ನಿರ್ಲಕ್ಷಿಸಿದರೆ ಶಿಸ್ತುಕ್ರಮ

ಸಂಚಾಲನ ಸಮಿತಿ ಸಭೆ: ಜಿಲ್ಲಾ ಪಂಚಾಯಿತಿ ಸಿಇಒ ಗ್ಯಾನೇಂದ್ರಕುಮಾರ ಗಂಗ್ವಾರ್ ಎಚ್ಚರಿಕೆ
Last Updated 19 ಜನವರಿ 2020, 10:49 IST
ಅಕ್ಷರ ಗಾತ್ರ

ಬೀದರ್‌: ‘ಜಂತುಹುಳು ನಿವಾರಣೆ ಕಾರ್ಯಕ್ರಮ ಅನುಷ್ಠಾನದಲ್ಲಿ ನಿರ್ಲಕ್ಷ್ಯ ವಹಿಸುವ ಹಾಗೂ ಅಸಡ್ಡೆ ತೋರುವಂತಹ ಶಾಲೆಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ-2020ರ ಜಿಲ್ಲಾ ಸಂಚಾಲನ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

‘ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳು ಹಾಗೂ ಕಾಲೇಜುಗಳಲ್ಲಿ ಈ ಕಾರ್ಯಕ್ರಮವನ್ನು ಕಡ್ಡಾಯವಾಗಿ ಹಮ್ಮಿಕೊಳ್ಳಬೇಕು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನೀಡಲಾಗುವ ತರಬೇತಿಯಲ್ಲಿ ಎಲ್ಲ ಶಾಲೆಗಳ ಶಿಕ್ಷಕರು ಪಾಲ್ಗೊಳ್ಳುವಂತೆ ಎಲ್ಲ ಶಾಲೆಗಳಿಗೂ ಸುತ್ತೋಲೆ ಹೊರಡಿಸಬೇಕು’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚನೆ ನೀಡಿದರು.

‘ರಾಷ್ಟ್ರೀಯ ಜಂತುಹುಳು ನಿವಾರಣೆ ಕಾರ್ಯಕ್ರಮ ಶೇಕಡ 100ರಷ್ಟು ಪ್ರಗತಿಯಾಗಬೇಕು. ಸಾಮಾಜಿಕ ಜಾಲತಾಣಗಳು, ಪತ್ರಿಕಾ ಮಾಧ್ಯಮ, ಮೈಕ್ ಹಾಗೂ ಗುಂಪು ಸಭೆಗಳ ಮೂಲಕ ವ್ಯಾಪಕ ಪ್ರಚಾರ ನೀಡಬೇಕು’ ಎಂದು ಹೇಳಿದರು.

ಜಿಲ್ಲಾ ಸರ್ವೇಕ್ಷಣಾ ವೈದ್ಯಾಧಿಕಾರಿ ಡಾ.ಅನಿಲಕುಮಾರ ತಾಳಿಕೋಟೆ ಮಾತನಾಡಿ, ‘ಮಕ್ಕಳಲ್ಲಿ ಕೊಕ್ಕೆಹುಳು, ಲಾಡೆಹುಳು ಹಾಗೂ ಚಾವಟೆಹುಳು ಬಾಧೆಯಿಂದ ಮಕ್ಕಳ ಮೇಲೆ ಶಾರೀರಿಕ ಹಾಗೂ ಮಾನಸಿಕ ತೊಂದರೆಗಳು ಕಂಡುಬರುತ್ತಿವೆ’ ಎಂದು ತಿಳಿಸಿದರು.

‘ಮಕ್ಕಳಲ್ಲಿನ ಅಪೌಷ್ಟಿಕತೆಯನ್ನು ತಡೆಯಲು ಹಾಗೂ ಅವರ ಬುದ್ಧಿಶಕ್ತಿಯನ್ನು ಹೆಚ್ಚಿಲು ವರ್ಷಕ್ಕೆ ಎರಡು ಬಾರಿ ಫೆಬ್ರುವರಿ 10 ಹಾಗೂ ಸೆಪ್ಟೆಂಬರ್ 10ರಂದು 1ರಿಂದ 19 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಜಂತು ನಿವಾರಕ ಮಾತ್ರೆಯನ್ನು ಸಾರ್ವತ್ರಿಕವಾಗಿ ನೀಡಲಾಗುತ್ತದೆ’ ಎಂದು ತಿಳಿಸಿದರು.

‘ಆಶಾ ಕಾರ್ಯಕರ್ತೆಯರು ಮನೆ-ಮನೆ ಭೇಟಿ ಮಾಡಿ 1ರಿಂದ 3 ವರ್ಷದ ಮಕ್ಕಳಿಗೆ ಹಾಗೂ ಶಾಲೆಗಳಿಂದ ಹೊರಗುಳಿದ ಮಕ್ಕಳಿಗೆ, ಅಂಗನವಾಡಿ ಕೇಂದ್ರಗಳಲ್ಲಿ 3 ರಿಂದ 5 ವರ್ಷದೊಳಗಿನ ಮಕ್ಕಳಿಗೆ ಹಾಗೂ ಶಾಲೆಗಳಲ್ಲಿ 6 ರಿಂದ 19 ವರ್ಷದೊಳಗಿನ ಮಕ್ಕಳಿಗೆ ಮಾತ್ರೆಗಳು ನೀಡಲಾಗುತ್ತದೆ’ ಎಂದು ವಿವರಿಸಿದರು.

‘ಜಿಲ್ಲೆಯಲ್ಲಿ ಒಟ್ಟು 6,68,866 ಮಕ್ಕಳಿಗೆ ಜಂತು ನಿವಾರಕ ಅಲ್ಬೆಂಡೋಜಲ್ ಮಾತ್ರೆಯನ್ನು ವಿತರಿಸುವ ಗುರಿ ಹೊಂದಲಾಗಿದೆ. 1796 ಶಾಲೆಗಳಲ್ಲಿ, 1983 ಅಂಗನವಾಡಿ ಕೇಂದ್ರಗಳಲ್ಲಿ ಶಿಕ್ಷಕರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳಿಗೆ ಮಾತ್ರೆ ವಿತರಿಸುವರು’ ಎಂದು ಮಾಹಿತಿ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವಿ.ಜಿ.ರೆಡ್ಡಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರತಿಕಾಂತ ಸ್ವಾಮಿ, ಜಿಲ್ಲಾ ಆರ್.ಸಿ.ಎಚ್.ಅಧಿಕಾರಿ ಡಾ.ರವೀಂದ್ರ ಸಿರ್ಸಗಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕೃಷ್ಣಾ ರೆಡ್ಡಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಇಂದುಮತಿ ಪಾಟೀಲ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ದೀಪಾ ಖಂಡ್ರೆ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ರಾಜಶೇಖರ ಪಾಟೀಲ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸಂಗಪ್ಪ ಕಾಂಬಳೆ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶ್ರಾವಣ ಜಾಧವ, ಎನ್‍ಡಿಡಿ ಜಿಲ್ಲಾ ಮಟ್ಟದ ಸಂಯೋಜಕರಾದ ಸ್ತುತಿ, ಆರೋಗ್ಯ ಅಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸರ್ಕಾರೇತರ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT