ಕಮಠಾಣ (ಜನವಾಡ): ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಅವರು ಭಾನುವಾರ ಬೀದರ್ ತಾಲ್ಲೂಕಿನ ಕಮಠಾಣ ಸಮೀಪದ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕೇಂದ್ರ ಕಚೇರಿಗೆ ಭೇಟಿ ನೀಡಿದರು.
ವಿಶ್ವವಿದ್ಯಾಲಯದ ಅಧಿಕಾರಿಗಳು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ವಿಶ್ವವಿದ್ಯಾಲಯದಲ್ಲಿನ ಶೈಕ್ಷಣಿಕ ವ್ಯವಸ್ಥೆ ಹಾಗೂ ವಿದ್ಯಾರ್ಥಿಗಳ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದರು. ವಿಶ್ವವಿದ್ಯಾಲಯ ಆವರಣದಲ್ಲಿರುವ ವಸತಿ ನಿಲಯವನ್ನು ನವೀಕರಿಸಬೇಕು. ಬೇರೆ ರಾಜ್ಯಗಳ ಮಾದರಿಯಲ್ಲಿ ವಿಶ್ವವಿದ್ಯಾಲಯದಲ್ಲೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಶಿಷ್ಯವೇತನ ವ್ಯವಸ್ಥೆ ಮಾಡಬೇಕು ಎಂದು ವಿದ್ಯಾರ್ಥಿಗಳು ಬೇಡಿಕೆ ಮಂಡಿಸಿದರು.
ಬೇಡಿಕೆಗಳ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಇದಕ್ಕೂ ಮುನ್ನ ಪುಷ್ಪಗುಚ್ಛ ನೀಡಿ ಸಚಿವರನ್ನು ಸ್ವಾಗತಿಸಿ ಬರಮಾಡಿಕೊಂಡ ವಿಶ್ವವಿದ್ಯಾಲಯದ ಕುಲಪತಿ ಕೆ.ಸಿ.ವೀರಣ್ಣ ಅವರು ವಿಶ್ವವಿದ್ಯಾಲಯದ ಚಟುವಟಿಕೆಗಳ ಕುರಿತು ಸಂಕ್ಷಿಪ್ತ ಮಾಹಿತಿ ನೀಡಿದರು. ವಿಶ್ವವಿದ್ಯಾಲಯದ ಚಟುವಟಿಕೆ ಹಾಗೂ ಮೂಲಸೌಕರ್ಯಕ್ಕೆ ಸರ್ಕಾರದಿಂದ ಅಗತ್ಯ ಸಹಕಾರ ಕೋರಿದರು.
ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ ಬಿ.ನಾರಾಯಣರಾವ್ ಹಾಜರಿದ್ದರು.