ಬೀದರ್: ಜಿಲ್ಲೆಯ ಬರಿದಾಬಾದ್ ಹಾಗೂ ಬೆಳಕೇರಾ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 40 ಜನ ಅಸ್ವಸ್ಥಗೊಂಡಿರುವ ವಿಷಯ ಗಂಭೀರವಾಗಿ ಪರಿಗಣಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಮಾತನಾಡಿ, ಜನರ ಜೀವ ಅತ್ಯಮೂಲ್ಯವಾಗಿದ್ದು, ಇದಕ್ಕೆ ಯಾರೇ ಕಾರಣಿ ಭೂತರಾದರೂ ಅವರಿಗೆ ಕ್ಷಮೆ ಇಲ್ಲ. ಗ್ರಾಮ ಪಂಚಾಯತಿ, ಪುರಸಭೆ, ನಗರಸಭೆ, ಗ್ರಾಮಿಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಸಂಬಂಧಿಸಿದ ಅಧಿಕಾರಿಗಳು ಜನರಿಗೆ ಶುದ್ಧವಾದ ಕುಡಿಯುವ ನೀರು ಪೂರೈಸಬೇಕು ಎಂದರು.
‘ಜಿಲ್ಲೆಯ 185 ಗ್ರಾಮ ಪಂಚಾಯತಿಗಳಿದ್ದು, ಇಲ್ಲಿಯೂ ಪ್ರಕರಣ ಪುನರಾವರ್ತನೆಯಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಗ್ರಾಮ ಪಂಚಾಯಿತಿಗಳಿಗೆ 15ನೇ ಹಣಕಾಸು ಯೋಜನೆಯಡಿ ನೀಡಿರುವ ಅನುದಾನ ಕುಡಿಯುವ ನೀರಿಗೆ ಬಳಸಬೇಕು’ ಎಂದರು.
ಶಿಥಿಲಾವಸ್ಥೆ ಮತ್ತು ಸೋರುತ್ತಿರುವ ಶಾಲೆಗಳ ಮಾಹಿತಿಯನ್ನು ಮೂರು ದಿನಗಳೊಳಗೆ ಒದಗಿಸುವಂತೆ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಸ್ಮಶಾನ ಭೂಮಿಯ ಸಮಸ್ಯೆಯಿದ್ದು, ವಿಶೇಷವಾಗಿ ದಲಿತರು ಶವವನ್ನು ತೆಗೆದುಕೊಂಡು ಅಲೆದಾಡುವ ಪರಿಸ್ಥಿತಿ ಇದೆ. ನನ್ನ ಕಾಲಾವಧಿಯಲ್ಲಿ ಈ ಸಮಸ್ಯೆಯಾಗಬಾರದು. ಜಾಗವಿದ್ದರೆ ಒಂದು ವಾರದಲ್ಲಿ ಅವರಿಗೆ ಭೂಮಿ ಮಂಜೂರು ಮಾಡಿ ಇಲ್ಲದಿದ್ದರೆ ಖಾಸಗಿ ಜಮೀನನ್ನು ಖರೀದಿ ಮಾಡಿ ಅವರಿಗೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆಗಸ್ಟ 15ರಂದು ನಡೆಯಲಿರುವ ಈ ವರ್ಷದ ಸ್ವಾತಂತ್ರೋತ್ಸವ ಎಲ್ಲರೂ ಸೇರಿ ಅದ್ದೂರಿಯಾಗಿ ಜಿಲ್ಲೆಯಾದ್ಯಂತ ಆಚರಣೆ ಮಾಡಬೇಕು. ಈ ಕಾರ್ಯಕ್ರಮದಲ್ಲಿ ಎಲ್ಲಾ ಅಧಿಕಾರಿಗಳು ಭಾಗವಹಿಸಬೇಕು. ಶಾಲಾ-ಕಾಲೇಜುಗಳಲ್ಲಿ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯುವಂತೆ ಸೂಚನೆ ನೀಡಬೇಕು ಎಂದು ನಿರ್ದೇಶನ ನೀಡಿದರು.
ಪೌರಾಡಳಿತ ಮತ್ತು ಹಜ್ ಖಾತೆ ಸಚಿವ ರಹೀಂ ಖಾನ್, ಹುಮನಾಬಾದ್ ಶಾಸಕ ಡಾ. ಸಿದ್ದಲಿಂಗಪ್ಪ ಪಾಟೀಲ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ.ಎಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್. ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ.ಎಂ.ಎ. ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.
ಸಭೆಗೂ ಮುನ್ನ ಸಚಿವರು ಹಾಗೂ ಶಾಸಕ ಶೈಲೇಂದ್ರ ಬೆಲ್ದಾಳೆ ಬರಿದಾಬಾದ್ ಹಾಗೂ ಬೆಳಕೇರಾಗ ಗ್ರಾಮಕ್ಕೆ ಭೇಟಿ ನೀಡಿ ಕುಡಿಯುವ ನೀರಿನ ವ್ಯವಸ್ಥೆ ಪರಿಶೀಲಿಸಿದರು.
ನೀರು ಪೂರೈಕೆ ನಿರ್ಲಕ್ಷ್ಯ: ಪಿಡಿಒ ಅಮಾನತು
ಬೀದರ್: ಕುಡಿಯುವ ನೀರು ಪೂರೈಕೆ ವಿಷಯದಲ್ಲಿ ನಿರ್ಲಕ್ಷ್ಯ ತೋರಿದ ಬೀದರ್ ತಾಲ್ಲೂಕಿನ ಚಟ್ನಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದೇವಪ್ಪ ಅವರನ್ನು ಅಮಾನತು ಮಾಡಲಾಗಿದೆ. ಕಲುಷಿತ ನೀರು ಸೇವಿಸಿ ಬರಿದಾಬಾದ್ ಇಬ್ಬರು ಅಸ್ವಸ್ಥಗೊಂಡ ವಿಷಯ ಗಂಭೀರವಾಗಿ ಪರಿಗಣಿಸಿ ಪಿಡಿಒ ದೇವಪ್ಪರನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಎಂ. ಆದೇಶ ಹೊರಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.