ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಎಸ್‍ನಿಂದ ಬೀದರ್ ನಗರಸಭೆ ಮುತ್ತಿಗೆ 21ಕ್ಕೆ

ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ವಿಳಂಬ
Last Updated 14 ನವೆಂಬರ್ 2022, 14:47 IST
ಅಕ್ಷರ ಗಾತ್ರ

ಬೀದರ್: ಬೀದರ್ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ವಿಳಂಬ ನೀತಿ ಅನುಸರಿಸುತ್ತಿರುವುದನ್ನು ವಿರೋಧಿಸಿ ಜಾತ್ಯತೀತ ಜನತಾ ದಳ ನ. 21 ರಂದು ಇಲ್ಲಿಯ ನಗರಸಭೆ ಕಚೇರಿಗೆ ಮುತ್ತಿಗೆ ಹಾಕಲು ತೀರ್ಮಾನಿಸಿದೆ.
ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಪಾಟೀಲ ಸೋಲಪುರ ಅವರ ನೇತೃತ್ವದಲ್ಲಿ ಅಂದು ಬೆಳಿಗ್ಗೆ 11ಕ್ಕೆ ಜಾತ್ಯತೀತ ಜನತಾ ದಳದ ಕಚೇರಿಯಿಂದ ಮೆರವಣಿಗೆಯಲ್ಲಿ ಬಂದು ನಗರಸಭೆ ಕಚೇರಿಗೆ ಮುತ್ತಿಗೆ ಹಾಕಿ, ಬೀಗ ಹಾಕಲಾಗುವುದು ಎಂದು ಜೆಡಿಎಸ್ ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ಪಾಟೀಲ ಹಾರೂರಗೇರಿ ತಿಳಿಸಿದ್ದಾರೆ.
ನಗರಸಭೆ ಚುನಾವಣೆ ನಡೆದು ಒಂದೂವರೆ ವರ್ಷವಾದರೂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಸಿಲ್ಲ. ಹೀಗಾಗಿ ನಗರದ ಅಭಿವೃದ್ಧಿ ಸಂಪೂರ್ಣ ಕುಂಠಿತಗೊಂಡಿದೆ ಎಂದು ಹೇಳಿದ್ದಾರೆ.
ನಗರದ ಪ್ರಮುಖ ರಸ್ತೆಗಳಲ್ಲಿ ಬೃಹತ್ ತಗ್ಗು ಗುಂಡಿಗಳು ನಿರ್ಮಾಣಗೊಂಡು ಸಂಚಾರ ದುಸ್ತರವಾಗಿದೆ. ಕುಡಿಯುವ ನೀರು, ದಾರಿ ದೀಪ ಸೇರಿದಂತೆ ನಾಗರಿಕರು ಹತ್ತು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಕೇಳುವವರೇ ಇಲ್ಲದಾಗಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರಸಭೆ ಕಚೇರಿಯಲ್ಲಿ ನಾಗರಿಕರ ವಿವಿಧ ಕೆಲಸಗಳು ಸಕಾಲಕ್ಕೆ ಆಗುತ್ತಿಲ್ಲ. ಅಧ್ಯಕ್ಷ, ಉಪಾಧ್ಯಕ್ಷರು ಇಲ್ಲದ ಕಾರಣ ಅಧಿಕಾರಿಗಳ ಮೇಲೆ ನಿಯಂತ್ರಣ ಇಲ್ಲದಂತಾಗಿದೆ ಎಂದು ಹೇಳಿದ್ದಾರೆ.
ಸೆಪ್ಟೆಂಬರ್ 17 ರಂದು ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯನ್ನು ಬೇಗ ನಡೆಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆಡಳಿತಕ್ಕೆ ಪತ್ರ ಬರೆದಿದ್ದಾರೆ. ಜಾತ್ಯತೀತ ಜನತಾ ದಳದಿಂದಲೂ ನವೆಂಬರ್ 5 ರಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿತ್ತು. ಆದರೆ, ಯಾವುದೇ ಕ್ರಮ ಕೈಗೊಳ್ಳದ ಕಾರಣ ಮುತ್ತಿಗೆಗೆ ನಿರ್ಣಯಿಸಲಾಗಿದೆ ಎಂದು ಹೇಳಿದ್ದಾರೆ.
ಪ್ರತಿಭಟನೆಯಲ್ಲಿ ಜಾತ್ಯತೀತ ಜನತಾ ದಳದ ನಗರಸಭೆ ಸದಸ್ಯರು, ಪಕ್ಷದ ಎಲ್ಲ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT