ಬೀದರ್: ಮೊಹಮ್ಮದ್ ಪೈಗಂಬರ್ ವಿರುದ್ಧ ಅವಹೇಳನಕಾರಿ ಮಾತುಗಳನ್ನು ಆಡಿದ್ದಾರೆ ಎನ್ನಲಾದ ಮಹಾರಾಷ್ಟ್ರದ ಸಿತ್ರಾರ ಜಿಲ್ಲೆಯ ಪಂಚಲದ ರಾಮಗಿರಿ ಗುರು ನಾರಾಯಣಗಿರಿ ಮಹಾರಾಜ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಯುನೈಟೆಡ್ ಮುಸ್ಲಿಂ ಫೋರಂನಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಓಲ್ಡ್ ಸಿಟಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರ್‍ಯಾಲಿ ನಡೆಸಿದರು. ರ್‍ಯಾಲಿಯುದ್ದಕ್ಕೂ ನಾರಾಯಣಗಿರಿ ಮಹಾರಾಜ್ ವಿರುದ್ಧ ಘೋಷಣೆ ಕೂಗಿದರು. ರಾಷ್ಟ್ರಪತಿಯವರ ಹೆಸರಿಗೆ ಬರೆದ ಮನವಿ ಪತ್ರವನ್ನು ಸಲ್ಲಿಸಿದರು.
ಮಹಾರಾಷ್ಟ್ರದಲ್ಲಿ ಕೆಲ ದಿನಗಳ ಹಿಂದೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ನಾರಾಯಣಗಿರಿ ಮಹಾರಾಜ್ ಅವರು ಮೊಹಮ್ಮದ್ ಪೈಗಂಬರ್ ವಿರುದ್ಧ ಅವಹೇಳನಕಾರಿ ಮಾತುಗಳನ್ನು ಆಡಿದ್ದಾರೆ. ಅವರ ವಿರುದ್ಧ ಈಗಾಗಲೇ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಕೂಡಲೇ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಈ ರೀತಿಯ ಹೇಳಿಕೆಗಳಿಂದ ಕೋಮು ಸೌಹಾರ್ದತೆಗೆ ಧಕ್ಕೆ ಉಂಟಾಗುತ್ತದೆ. ಈ ರೀತಿಯ ವರ್ತನೆಗೆ ಅವಕಾಶ ಕಲ್ಪಿಸಬಾರದು ಎಂದು ಒತ್ತಾಯಿಸಿದರು.