ಶುಕ್ರವಾರ, 13 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಯಂಗೆ ಆಗ್ರಹಿಸಿ ಎನ್‌ಎಚ್‌ಎಂ ನೌಕರರ ಪ್ರತಿಭಟನೆ

Published : 23 ಆಗಸ್ಟ್ 2024, 15:49 IST
Last Updated : 23 ಆಗಸ್ಟ್ 2024, 15:49 IST
ಫಾಲೋ ಮಾಡಿ
Comments

ಬೀದರ್‌: ಸೇವೆ ಕಾಯಂಗೊಳಿಸಬೇಕು ಎಂದು ಆಗ್ರಹಿಸಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ಆರೋಗ್ಯ ಮಿಷನ್‌ (ಎನ್‌ಎಚ್‌ಎಂ) ಒಳಗುತ್ತಿಗೆ ನೌಕರರು ಶುಕ್ರವಾರ ಕಪ್ಪುಪಟ್ಟಿ ಧರಿಸಿಕೊಂಡು ಕೆಲಸ ನಿರ್ವಹಿಸುವುದರ ಮೂಲಕ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದರು.

ಸುಮಾರು 20 ವರ್ಷಗಳಿಂದ ವೈದ್ಯರು, ಫಾರ್ಮಾಸಿಸ್ಟ್‌, ಪ್ರಯೋಗಾಲಯ ಸಿಬ್ಬಂದಿ, ಆಪ್ತ ಸಮಾಲೋಚಕರು, ಶುಶ್ರೂಷಕರು, ಕ್ಷಯರೋಗ ವಿಭಾಗದಲ್ಲಿ ಸಿಬ್ಬಂದಿ ಕೆಲಸ ನಿರ್ವಹಿಸುತ್ತಿದ್ದಾರೆ. ಕೋವಿಡ್‌ ಸಂದರ್ಭದಲ್ಲಿ ಹಗಲು ರಾತ್ರಿ ಕೆಲಸ ಮಾಡಿದ್ದಾರೆ. ಸರ್ಕಾರದ ವಿವಿಧ ಆರೋಗ್ಯ ಸೇವೆಗಳನ್ನು ಜನರಿಗೆ ತಲುಪಿಸಲಾಗುತ್ತಿದೆ. ಹೀಗಿದ್ದರೂ ಸೇವೆ ಕಾಯಂ ಮಾಡುತ್ತಿಲ್ಲ ಎಂದು ಆರೋಪಿಸಿದರು.

ಕಾಂಗ್ರೆಸ್‌ ಸರ್ಕಾರವು ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಮುನ್ನ ನಡೆದ ಚುನಾವಣೆಯಲ್ಲಿ ಒಳಗುತ್ತಿಗೆ ನೌಕರರ ಸೇವೆ ಕಾಯಂಗೊಳಿಸುವ ಭರವಸೆ ನೀಡಿತ್ತು. ಆದರೆ, ಅಧಿಕಾರಕ್ಕೆ ಬಂದು ಒಂದು ವರ್ಷಕ್ಕೂ ಹೆಚ್ಚು ಸಮಯ ಕಳೆಯುತ್ತಿದ್ದರೂ ಸೇವೆ ಕಾಯಂಗೊಳಿಸಿಲ್ಲ. ಹಿಂದೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದಾಗ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಥಳಕ್ಕೆ ಬಂದು ಭರವಸೆ ಕೊಟ್ಟಿದ್ದರು. ಆದರೆ, ಇದುವರೆಗೂ ಬೇಡಿಕೆ ಈಡೇರಿಸಿಲ್ಲ ಎಂದು ಆರೋಪಿಸಿದರು.

ಸಮುದಾಯ ಆರೋಗ್ಯ ಅಧಿಕಾರಿ ಕೃಪಾ, ಡಾ.ಎಚ್.ನೌಬಾದೆ, ಡಾ.ವೈಶಾಲಿ ಸಾಯಗಾಂವಕರ, ಸಮುದಾಯ ಆರೋಗ್ಯ ಅಧಿಕಾರಿ ರಾಚಣ್ಣ ಹಾಗೂ ವಿವಿಧ ಆರೋಗ್ಯ ಕೇಂದ್ರಗಳ ಸಿಬ್ಬಂದಿ ಅವರ ಕೆಲಸದ ಸ್ಥಳದಲ್ಲಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ದಾಖಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT