ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿವೃದ್ಧಿಗೆ 9 ವರ್ಷಗಳಲ್ಲಿ ₹ 950 ಕೋಟಿ ಖರ್ಚು

ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಹೇಳಿಕೆ
Last Updated 17 ಸೆಪ್ಟೆಂಬರ್ 2022, 12:32 IST
ಅಕ್ಷರ ಗಾತ್ರ

ಬೀದರ್‌: ‘ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಒಂಬತ್ತು ವರ್ಷಗಳ ಅವಧಿಯಲ್ಲಿ ಬೀದರ್ ಜಿಲ್ಲೆಯಲ್ಲಿ ₹ 950 ಕೋಟಿ ವೆಚ್ಚದಲ್ಲಿ ೨,೪೨೨ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಹೇಳಿದರು.

ನಗರದ ನೆಹರೂ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

‘ಕೆಕೆಆರ್‌ಡಿಬಿಯಿಂದ ಜಿಲ್ಲೆಯಲ್ಲಿ ೨೦೧೩-೧೪ ರಿಂದ ೨೦೨೨ ರವರೆಗೆ ₹ ೧,೪೭೨ ಕೋಟಿ ಮೊತ್ತದಲ್ಲಿ ೩,೧೧೫ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ೨,೪೨೨ ಕಾಮಗಾರಿಗಳು ಮುಕ್ತಾಯಗೊಂಡಿವೆ. ₹ ೫೨೨ ಕೋಟಿ ಮೊತ್ತದ ೬೯೩ ಕಾಮಗಾರಿಗಳು ಪ್ರಗತಿಯಲ್ಲಿವೆ’ ಎಂದು ತಿಳಿಸಿದರು.

‘ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿಯೇ ಸಂವಿಧಾನದ ೩೭೧(ಜೆ) ಕಲಂಗೆ ತಿದ್ದುಪಡಿ ಮಾಡಿ ವಿಶೇಷ ಸ್ಥಾನಮಾನ ಕಲ್ಪಿಸಲಾಗಿದೆ. ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ಒದಗಿಸಲಾಗಿದೆ. ಹೆಚ್ಚಿನ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಅನುವು ಮಾಡಿಕೊಡಲಾಗಿದೆ’ ಎಂದು ತಿಳಿಸಿದರು.

‘ದೇಶವನ್ನು ಆಂಗ್ಲರ ಹಿಡಿತದಿಂದ ಬಿಡಿಸಿಕೊಳ್ಳಲು ಸುದೀರ್ಘ ಹೋರಾಟ ಮಾಡಬೇಕಾಯಿತು. ಅಂತಿಮವಾಗಿ ೧೯೪೭ರ ಆಗಸ್ಟ್ ೧೫ ರಂದು ಭಾರತ ಸ್ವತಂತ್ರ ರಾಷ್ಟ್ರವಾದರೂ ಕಲ್ಯಾಣ ಕರ್ನಾಟಕ ಭಾಗಕ್ಕೆ ಸ್ವಾತಂತ್ರ್ಯ ದೊರಕಿರಲಿಲ್ಲ. ಹೈದರಾಬಾದ್‌ ನಿಜಾಮ್ ಮೀರ್ ಉಸ್ಮಾನ್ ಅಲಿಖಾನ್‌ ತಮ್ಮ ರಾಜ್ಯವನ್ನು ಭಾರತದಲ್ಲಿ ವಿಲೀನಗೊಳಿಸಲು ಸಿದ್ಧವಾಗಿರಲಿಲ್ಲ. ಹೀಗಾಗಿ ಭಾರತ ಸರ್ಕಾರ ಅನಿವಾರ್ಯವಾಗಿ ಪೊಲೀಸ್ ಕಾರ್ಯಾಚರಣೆ ನಡೆಸಬೇಕಾಯಿತು’ ಎಂದರು.

‘ಭಾರತದ ಸೇನೆ ಹೈದರಾಬಾದ್‌ಗೆ ತಲುಪುತ್ತಿದ್ದಂತೆಯೇ ನಿಜಾಮ್ ಪರಿಸ್ಥಿತಿಯನ್ನು ಅರಿತು ೧೯೪೮ರ ಸೆಪ್ಟೆಂಬರ್ ೧೭ ರಂದು ರೇಡಿಯೊ ಮೂಲಕ ಭಾರತದ ಒಕ್ಕೂಟಕ್ಕೆ ಸೇರುವುದಾಗಿ ಘೋಷಿಸಿದ. ಹೈದರಾಬಾದ್‌ ಆಡಳಿತದಲ್ಲಿದ್ದ ಪ್ರದೇಶಗಳು ಸ್ವತಂತ್ರ ಭಾರತಲ್ಲಿ ಸೇರಿಕೊಂಡವು’ ಎಂದು ತಿಳಿಸಿದರು.

‘ಇಂದಿನಿಂದ ಒಂದು ವರ್ಷದವರೆಗೆ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಮೃತ ಮಹೋತ್ಸವದ ಕಾರ್ಯಕ್ರಮಗಳನ್ನು ಅದ್ದೂರಿಯಾಗಿ ಆಚರಿಸೋಣ’ ಎಂದು ಹೇಳಿದರು.

ಶಾಸಕ ರಹೀಮ್ ಖಾನ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸಭಾಪತಿ ರಘುನಾಥರಾವ್ ಮಲ್ಕಾಪುರೆ, ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ.ಶೈಲೇಂದ್ರ ಬೆಲ್ದಾಳೆ, ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ, ರಾಜ್ಯ ಹಜ್ ಸಮಿತಿ ಅಧ್ಯಕ್ಷ ರೌಫೋದ್ದಿನ್‌ ಕಚೇರಿವಾಲೆ, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ. ಕಿಶೋರಬಾಬು, ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಎಂ., ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಹೇಶ ಮೇಘಣ್ಣವರ್, ಬೀದರ್‌ ಉಪ ವಿಭಾಗಾಧಿಕಾರಿ ಮೊಹಸಿನ್‌ ಮೋಮಿನ್, ತಹಶೀಲ್ದಾರ್ ಅಣ್ಣಾರಾವ್ ಪಾಟೀಲ ಇದ್ದರು. ಚೆನ್ನಬಸವ ಹೇಡೆ ಕಾರ್ಯಕ್ರಮ ನಿರೂಪಿಸಿದರು.

ಸರ್ದಾರ್‌ ವಲ್ಲಭಭಾಯಿ ಪಟೇಲ್ ಭಾವಚಿತ್ರದ ಮೆರವಣಿಗೆ

ಜಿಲ್ಲಾಡಳಿತದ ವತಿಯಿಂದ ಸರ್ದಾರ್‌ ವಲ್ಲಭಭಾಯಿ ಪಟೇಲ್ ಭಾವಚಿತ್ರದ ಮೆರವಣಿಗೆ ನಡೆಯಿತು. ಬಸವೇಶ್ವರ ವೃತ್ತದಲ್ಲಿ ಪಟೇಲ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಮೆರವಣಿಗೆಗೆ ಚಾಲನೆ ನೀಡಿದರು. ನಂತರ ಮೆರವಣಿಗೆಯು ಭಗತಸಿಂಗ್ ವೃತ್ತ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಜನರಲ್ ಕಾರ್ಯಪ್ಪ ವೃತ್ತದ ಮಾರ್ಗವಾಗಿ ನೆಹರೂ ಕ್ರೀಡಾಂಗಣಕ್ಕೆ ಬಂದಿತು.

ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ

ಬೀದರ್‌ ತಾಲ್ಲೂಕಿನ ಘೋಡಂಪಳ್ಳಿಯ ಅಟಲ್‌ ಬಿಹಾರಿ ವಾಜಪೇಯಿ ವಸತಿ ಶಾಲೆ, ಕಮಠಾಣ, ಮನ್ನಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಹಾಗೂ ಚಿಟ್ಟಾದ ರಾಣಿ ಕಿತ್ತೂರು ಚೆನ್ನಮ್ಮ ವಸತಿ ಶಾಲೆಯ 1,200 ವಿದ್ಯಾರ್ಥಿಗಳು ಬೀದರ್ ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಜಿಲ್ಲೆಗಳನ್ನೊಳಗೊಂಡ ಕಲ್ಯಾಣ ಕರ್ನಾಟಕ ನಕ್ಷೆ ಸೃಷ್ಟಿಸಿ ಪ್ರೇಕ್ಷಕರ ಗಮನ ಸೆಳೆದರು.

ಬೀದರ್‌ನ ಲಕ್ಕಿ ಡಾನ್ಸ್‌ ಸ್ಕೂಲ್‌ನ ಅಜೀತ್‌ ನಿರ್ದೇಶನದಲ್ಲಿ ವಿದ್ಯಾರ್ಥಿಗಳು ವಿವಿಧ ವರ್ಣದ ಸಮವಸ್ತ್ರ ಧರಿಸಿ ಆಕರ್ಷಕ ನೃತ್ಯ ಪ್ರದರ್ಶಿಸಿದರು.

ರವೀಂದ್ರ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಲೇಜಿಂ ಹಿಡಿದು ಕನ್ನಡ ನಾಡಿನ ಜೀವನದಿ... ಹಾಡಿಗೆ ಹೆಜ್ಜೆ ಹಾಕಿದರೆ, ಶರಣಬಸವ ಪಬ್ಲಿಕ್‌ ಸ್ಕೂಲ್‌ನ ವಿದ್ಯಾರ್ಥಿಗಳು ಸಾಂಪ್ರದಾಯಿಕ ಪೋಷಾಕು ಧರಿಸಿ ನಾನು ಕನ್ನಡಿಗ ಹಾಡಿಗೆ ಕುಣಿದು ಗಮನ ಸೆಳೆದರು.

ವಿದ್ಯಾರ್ಥಿಗಳು 1948ರಲ್ಲಿ ಕೇಂದ್ರ ಗೃಹ ಸಚಿವ ವಲ್ಲಭಭಾಯಿ ಪಟೇಲ್‌ರಿಗೆ ಹೈದರಾಬಾದ್‌ ನಿಜಾಮ್ ಮೀರ್ ಉಸ್ಮಾನ್ ಅಲಿಖಾನ್‌ ಶರಣಾದ ಸ್ತದ್ಧ ಚಿತ್ರ ಪ್ರದರ್ಶಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT