ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಲಸ ಮಾಡದ ಅಧಿಕಾರಿಗಳಿಗೆ ನೋಟಿಸ್

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜಾ ಸೂಚನೆ
Last Updated 15 ಅಕ್ಟೋಬರ್ 2022, 12:38 IST
ಅಕ್ಷರ ಗಾತ್ರ

ಬೀದರ್‌: ‘ಗ್ರಾಮ ಪಂಚಾಯಿತಿಯ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ನೀಡಬೇಕು’ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯೂ ಆದ ರಾಜ್ಯ ಉಗ್ರಾಣ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜಾ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ನಿರ್ದೇಶನ ನೀಡಿದರು.


‘ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಇನ್ನೂ ವಸತಿ ಯೋಜನೆಯ ಮನೆಗಳ ನಿರ್ಮಾಣ ಕಾರ್ಯ ಪ್ರಾರಂಭವಾಗದಿರಲು ಏನು ಕಾರಣ ಎನ್ನುವುದನ್ನು ತಿಳಿದುಕೊಳ್ಳಲು ಅಧಿಕಾರಿಗಳು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ಕಾಮಗಾರಿಗಳು ನಿಗದಿಪಡಿಸಿದ ಕಾಲಮಿತಿಯಲ್ಲಿ ಮುಗಿಸಬೇಕು. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳಿಗೆ ಮುಲಾಜಿಲ್ಲದೇ ಮೇಲಧಿಕಾರಿಗಳು ಶೋಕಾಸ್ ನೋಟಿಸ್ ಕೊಡಬೇಕು’ ಎಂದು ಸೂಚಿಸಿದರು.

‘ಅಂಗನವಾಡಿ, ಶಾಲಾ, ಶೌಚಾಲಯ ಕಟ್ಟಡಗಳು ಮತ್ತು ನರೇಗಾದಲ್ಲಿಯ ಕಾಮಗಾರಿಗಳ ಅನುಷ್ಠಾನಕ್ಕೆ ಅನಗತ್ಯವಾಗಿ ವಿಳಂಬ ಮಾಡಬಾರದು. ಕಾಮಗಾರಿ ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಗುರಿ ನಿಗದಿಪಡಿಸಿ ಆಗಾಗ ಮೇಲ್ವಿಚಾರಣೆ ನಡೆಸಬೇಕು’ ಎಂದರು.

‘ಅಮೃತ ಶಾಲಾ ಸೌಲಭ್ಯದಲ್ಲಿ ಬೀದರ್ ಜಿಲ್ಲೆ ಹಿಂದುಳಿದಿದೆ. ಜಿಲ್ಲಾ ಆರೋಗ್ಯ ಅಧಿಕಾರಿಗಳು ಸರಿಯಾಗಿ ಮಾಹಿತಿ ನೀಡಿಲ್ಲ. ಹೆರಿಗೆ ಸಂದರ್ಭದಲ್ಲಿ ಆಗುತ್ತಿರುವ ಮಹಿಳೆಯರ ಸಾವಿನ ಅಂಕಿ ಸಂಖ್ಯೆಗಳನ್ನು ನಿಖರವಾಗಿ ದಾಖಲಿಸಿಕೊಳ್ಳಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸರಿಯಾಗಿ ಕಾರ್ಯನಿರ್ವಹಿಸುವಂತೆ ಅವರ ಮೇಲೆ ನಿಗಾ ಇಡಬೇಕು. ಆಗಾಗ ಸಭೆಗಳನ್ನು ನಡೆಸಬೇಕು’ ಎಂದು ಹೇಳಿದರು.

‌‘ಜಿಲ್ಲೆಯಲ್ಲಿ ಶಾಲೆಗಳ ಸ್ಮಾರ್ಟ್ ಕ್ಲಾಸ್‌ಗಳ ಕಾಮಗಾರಿ ಪೂರ್ಣಗೊಂಡಿದೆ. ಆದರೆ ಇನ್ನೂ ಶೌಚಾಲಯಗಳ ಕಾಮಗಾರಿ ಪೂರ್ಣಗೊಂಡಿಲ್ಲ. ಇಂತಹ ಸಣ್ಣಪುಟ್ಟ ಕಾಮಗಾರಿಗಳಿಗೆ ಎಷ್ಟು ಸಮಯ ಬೇಕು’ ಎಂದು ಖಾರವಾಗಿ ಪ್ರಶ್ನಿಸಿದರು.

‘ನರೇಗಾದಲ್ಲಿ ಶಾಲಾ ಆವರಣ ಗೋಡೆ, ಮಕ್ಕಳ ಆಟದ ಕ್ರೀಡಾಂಗಣ ಹಾಗೂ ಇತರೆ ಕಾಮಗಾರಿ ಕೈಗೊಳ್ಳಲು

ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು. ಜನರಿಗೆ ಉತ್ತಮ ಸೇವೆ ಕೊಡುವ ದಿಸೆಯಲ್ಲಿ ಅಧಿಕಾರಿಗಳು ಆಸಕ್ತಿಯಿಂದ ಕೆಲಸ ಮಾಡಬೇಕು. ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಸಹಿಸಿಕೊಳ್ಳಲಾಗದು’ ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಂ, ಬೀದರ್‌ ಉಪ ವಿಭಾಗಾಧಿಕಾರಿ ಮಹಮ್ಮದ್ ನಯೀಮ್ ಮೋಮಿನ್, ಬಸವಕಲ್ಯಾಣ ಉಪ ವಿಭಾಗಾಧಿಕಾರಿ ರಮೇಶ ಕೋಲಾರ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ವಿಜಯಕುಮಾರ ಮಡ್ಡೆ, ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕಿ ಸುರೇಖಾ ಮನೋಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT