ಭಾನುವಾರ, ಮೇ 9, 2021
33 °C
ಸಾರ್ವಜನಿಕರ ಅನುಕೂಲಕ್ಕೆ ಸಹಾಯವಾಣಿ ಆರಂಭಿಸಿದ ಜಿಲ್ಲಾಡಳಿತ

ಏಳು ಕೋವಿಡ್‌ ಆರೈಕೆ ಕೇಂದ್ರ ತೆರೆಯಲು ಆದೇಶ

ಚಂದ್ರಕಾಂತ ಮಸಾನಿ Updated:

ಅಕ್ಷರ ಗಾತ್ರ : | |

Prajavani

ಬೀದರ್: ಸಾಮಾಜಿಕ ಜಾಲತಾಣಗಳ ಮೂಲಕ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ ನಂತರ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ ಜಿಲ್ಲೆಯ ಮೂರು ಹೊಸ ತಾಲ್ಲೂಕುಗಳನ್ನು ಹೊರತುಪಡಿಸಿ ಐದು ತಾಲ್ಲೂಕು ಕೇಂದ್ರಗಳಲ್ಲಿ ಒಟ್ಟು ಏಳು ಕೋವಿಡ್‌ ಆರೈಕೆ ಕೇಂದ್ರಗಳನ್ನು ತೆರೆಯಲು ಮುಂದಾಗಿದೆ.

ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ಒಟ್ಟು 905 ಹಾಸಿಗೆಗಳ ವ್ಯವಸ್ಥೆ ಮಾಡಲು ಜಿಲ್ಲಾಧಿಕಾರಿ ರಾಮಚಂದ್ರನ್‌ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.

ಬೀದರ್‌ನ ನಾವದಗೇರಿಯ ಝೀರಾ ಕನ್ವೆನ್ಶನ್‌ ಹಾಲ್‌ನಲ್ಲಿ 200 ಹಾಸಿಗೆ, ಶಹಾಪುರ ಗೇಟ್ ಬಳಿಯ ಶಾಹಿನ್ ಪಿ.ಯು. ಕಾಲೇಜು ಕಟ್ಟಡದಲ್ಲಿ 115, ಗೋಲೇಖಾನಾದ ಶಾಹೀನ್‌ ಪಿ.ಯು. ಕಾಲೇಜು ಕಟ್ಟಡದಲ್ಲಿ 100, ಬಸವಕಲ್ಯಾಣ ತಾಲ್ಲೂಕಿನ ಖಾನಾಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 250, ಹುಮನಾಬಾದ್‌ನ ರಾಜರಾಜೇಶ್ವರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ 50, ಔರಾದ್‌ನ ಕಿತ್ತೂರ ರಾಣಿ ಚನ್ನಮ್ಮ ಶಾಲೆಯಲ್ಲಿ 90 ಹಾಗೂ ಭಾಲ್ಕಿಯ ಡಾ.ಅಂಬೇಡ್ಕರ್ ವಸತಿ ಶಾಲೆಯಲ್ಲಿ 100 ಹಾಸಿಗೆಗಳ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ.

ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಲಕ್ಷಣ ರಹಿತರಿಗೆ, ಡೆಡಿಕೇಟಿವ್ ಕೋವಿಡ್‌ ಹೆಲ್ತ್ ಸೆಂಟರ್‌ನಲ್ಲಿ ಸೌಮ್ಯದಿಂದ ಮಧ್ಯಮ ರೋಗ ಲಕ್ಷಣ ಹೊಂದಿರುವವರಿಗೆ ಹಾಗೂ ಡೆಡಿಕೇಟೆಡ್ ಕೋವಿಡ್‌ ಆಸ್ಪತ್ರೆಯಲ್ಲಿ ತೀವ್ರ ಅಸ್ವಸ್ಥಗೊಂಡ ರೋಗಿಗಳಿಗೆ ಚಿಕಿತ್ಸೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ತಾಲ್ಲೂಕು ಆಸ್ಪತ್ರೆ ಹಾಗೂ ಸಮುದಾಯ ಆಸ್ಪತ್ರೆಗಳಲ್ಲಿ ತುರ್ತು ಸಂದರ್ಭದಲ್ಲಿ ಕೋವಿಡ್‌ ಸೋಂಕಿತರಿಗೆ ಚಿಕಿತ್ಸೆ ನೀಡಲು ಅನುಕೂಲ ಆಗುವಂತೆ ಸಿದ್ಧತೆ ಮಾಡಿಕೊಳ್ಳುವಂತೆಯೂ ಸೂಚನೆ ನೀಡಲಾಗಿದೆ. ಈ ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆ, ಔಷಧ, ವೆಂಟಿಲೇಟರ್‌ ಗಳ ಬಗ್ಗೆಯೂ ವಿವರ ವಾದ ಮಾಹಿತಿ ಒದಗಿಸುವಂತೆ ವೈದ್ಯಾಧಿ ಕಾರಿಗಳಿಗೆ ಸೂಚನೆ ನೀಡಲಾಗಿದೆ.

‘ಬೀದರ್ ನಗರದ ಹಳೆಯ ಆಸ್ಪತ್ರೆಯಲ್ಲಿ 450 ಹಾಸಿಗೆಗಳು, ಹೊಸ ಆಸ್ಪತ್ರೆಯಲ್ಲಿ 100, ಔರಾದ್‌ ತಾಲ್ಲೂಕು ಆಸ್ಪತ್ರೆಯಲ್ಲಿ 50 ಹಾಗೂ ಹುಮನಾಬಾದ್‌ ತಾಲ್ಲೂಕು ಆಸ್ಪತ್ರೆಯಲ್ಲಿ 28 ಹಾಸಿಗೆಗಳು ಇವೆ. ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್‌ ಸೋಂಕಿತರ ಚಿಕಿತ್ಸೆಗೆ ಸಕಲ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಆತಂಕ ಪಡುವ ಅಗತ್ಯ ಇಲ್ಲ’ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್‌ ಸ್ಪಷ್ಟಪಡಿಸಿದ್ದಾರೆ.

‘ಜಿಲ್ಲಾಧಿಕಾರಿ ನಿರ್ದೇಶನದಂತೆ ತಾಲ್ಲೂಕು ಕೇಂದ್ರಗಳಲ್ಲೂ ಕೋವಿಡ್‌ ಕೇರ್‌ ಸೆಂಟರ್‌ ಮಾಡುತ್ತಿದ್ದೇವೆ. ಸಾರ್ವಜನಿಕರಿಗೆ ಅನುಕೂಲ ಆಗುವಂತೆ ಸಹಾಯವಾಣಿ 18004254316 ಆರಂಭಿಸಲಾಗಿದೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವಿ.ಜಿ.ರೆಡ್ಡಿ ತಿಳಿಸಿದ್ದಾರೆ.

‘ತಾಲ್ಲೂಕು ಕೇಂದ್ರಗಳಲ್ಲಿ ಸಹಾಯವಾಣಿಗಳನ್ನು ಆರಂಭಿಸಬೇಕು. ಜನರ ಸಮಸ್ಯೆಗಳನ್ನು ಅರಿತು ತ್ವರಿತವಾಗಿ ಪರಿಹರಿಸುವ ದಿಸೆಯಲ್ಲಿ ಕ್ರಮ ಕೈಗೊಳ್ಳಬೇಕು’ ಎಂದು ಸಾಮಾಜಿಕ ಕಾರ್ಯಕರ್ತ ಮಲ್ಲಿಕಾರ್ಜುನ ಚಿಟ್ಟಾ ಮನವಿ ಮಾಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು