ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾತರಿ ಕಾರ್ಮಿಕರಿಗೆ ಬೇಗ ಕೂಲಿ ಪಾವತಿಸಿ

ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ. ಅತಿಕ್ ಸೂಚನೆ
Last Updated 17 ಆಗಸ್ಟ್ 2019, 15:22 IST
ಅಕ್ಷರ ಗಾತ್ರ

ಬೀದರ್: ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡುವ ಕಾರ್ಮಿಕರಿಗೆ ಆದಷ್ಟು ಬೇಗ ಕೂಲಿ ಪಾವತಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ. ಅತಿಕ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಖಾತರಿ ಯೋಜನೆ ಫಲಾನುಭವಿಗಳ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಸಂಖ್ಯೆ ಜೋಡಣೆ ಕಾರ್ಯ ತ್ವರಿತವಾಗಿ ಮಾಡಬೇಕು’ ಎಂದು ತಿಳಿಸಿದರು.

ಕಾರ್ಮಿಕರ ಕೂಲಿ ಪಾವತಿ ಪ್ರಗತಿ ಸಾಧಾರಣ ಆಗಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು. ‘ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 2.62 ಲಕ್ಷ ರೈತರು ಬೆಳೆ ವಿಮೆ ಮಾಡಿಸಿದ್ದಾರೆ. ಬೆಳೆ ವಿಮೆ ಯೋಜನೆಯಡಿ 2018-19ನೇ ಸಾಲಿನಲ್ಲಿ ಜಿಲ್ಲೆಗೆ ₹ 125.30 ಕೋಟಿ ಪರಿಹಾರ ದೊರೆತಿದೆ’ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ವಿದ್ಯಾನಂದ ಸಿ. ಸಭೆಗೆ ಮಾಹಿತಿ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಉಸ್ತುವಾರಿ ಕಾರ್ಯದರ್ಶಿ ‘ಬೆಳೆ ವಿಮೆ ಮಾಡಿಸುವುದನ್ನು ರೈತರು ರೂಢಿಸಿಕೊಳ್ಳಬೇಕು’ ಎಂದು ಹೇಳಿದರು.

‘ಜಿಲ್ಲೆಯಲ್ಲಿ ವಾಡಿಕೆಯಷ್ಟು ಮಳೆಯಾಗದಿರುವ ಕಾರಣ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ 15 ಮೇವು ಕೇಂದ್ರ ಹಾಗೂ ಐದು ಗೋಶಾಲೆಗಳನ್ನು ಆರಂಭಿಸಲಾಗಿದೆ ಎಂದು ಪಶು ವೈದ್ಯ ಮತ್ತು ಪಶು ಸೇವಾ ಇಲಾಖೆಯ ಉಪ ನಿರ್ದೇಶಕ ತಿಳಿಸಿದರು.

‘ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ನಿಲಯಗಳ ಕಟ್ಟಡ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು’ ಎಂದು ಅತಿಕ್ ಲೋಕೋಪಯೋಗಿ ಇಲಾಖೆಯ ಅಧಿಕಾರಿಗೆ ಸೂಚಿಸಿದರು.

‘ಗ್ರಾಮ ಪಂಚಾಯಿತಿಗಳಿಂದ ಜೆಸ್ಕಾಂಗೆ ಬಾಕಿ ಇರುವ ವಿದ್ಯುತ್ ಬಿಲ್ ಪಾವತಿಸಬೇಕು. ವಿದ್ಯುತ್ ಪೋಲಾಗದಂತೆ ತಡೆಯಲು ಬೀದಿ ದೀಪಗಳಿಗೂ ಮೀಟರ್ ಅಳವಡಿಸಬೇಕು’ ಎಂದು ತಿಳಿಸಿದರು.

‘ಜಿಲ್ಲೆಯಲ್ಲಿ ಹೊಸದಾಗಿ ರಚನೆಯಾಗಿರುವ ತಾಲ್ಲೂಕುಗಳಲ್ಲಿ ಹೊಸ ಕಚೇರಿಗಳಿಗೆ ಮೂಲಸೌಕರ್ಯ ಒದಗಿಸಬೇಕು’ ಎಂದು ಹೇಳಿದರು.

ಆರೋಗ್ಯ ಇಲಾಖೆ, ಅರಣ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಲೋಕೋಪಯೋಗಿ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿದರು.

ಜಿಲ್ಲಾಧಿಕಾರಿ ಡಾ. ಎಚ್.ಆರ್. ಮಹಾದೇವ, ಜಿಲ್ಲಾ ಪಂಚಾಯಿತಿ ಮುಖ್ಯ ನಿರ್ವಹಣಾಧಿಕಾರಿ ಮಹಾಂತೇಶ ಬೀಳಗಿ, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಉಪ ವಿಭಾಗಾಧಿಕಾರಿಗಳಾದ ಶಂಕರ ವಣಕ್ಯಾಳ ಜ್ಞಾನೇಂದ್ರಕುಮಾರ ಗಂಗವಾರ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT