ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಯುಸಿ ಪೂರಕ ಪರೀಕ್ಷೆ ಅಚ್ಚುಕಟ್ಟಾಗಿ ನಡೆಸಿ

ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಸೂಚನೆ
Last Updated 4 ಸೆಪ್ಟೆಂಬರ್ 2020, 14:28 IST
ಅಕ್ಷರ ಗಾತ್ರ

ಬೀದರ್: ಜಿಲ್ಲೆಯಾದ್ಯಂತ ಸೆ.7ರಿಂದ 19ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಡಾ.ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಪೂರ್ವ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರೀಕ್ಷಾ ಕೊಠಡಿಗಳಲ್ಲಿ ಆಸನಗಳನ್ನು ವ್ಯವಸ್ಥಿತವಾಗಿ ಜೋಡಿಸಬೇಕು. ಕೋಣೆಗಳಲ್ಲಿ ಸರಿಯಾಗಿ ಬೆಳಕು ಇರುವಂತೆ ನೋಡಿಕೊಳ್ಳಬೇಕು. ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಸುತ್ತೋಲೆಯಲ್ಲಿ ತಿಳಿಸಿರುವಂತೆ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ ಕ್ಯಾಮೆರಾ ಇರುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಪರೀಕ್ಷಾರ್ಥಿಗಳು ಮತ್ತು ಸಿಬ್ಬಂದಿಯನ್ನು ಥರ್ಮಲ್ ಸ್ಕ್ಯಾನಿಂಗ್ ಮೂಲಕ ತಪಾಸಣೆಗೆ ಒಳಪಡಿಸಬೇಕು. ಎಲ್ಲರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಪರೀಕ್ಷಾ ಕೊಠಡಿಗೆ ಹೋಗುವ ಪ್ರತಿಯೊಬ್ಬರಿಗೂ ಸ್ಯಾನಿಟೈಸರ್ ನೀಡುವ ವ್ಯವಸ್ಥೆಯಾಗಬೇಕು. ಕೆಮ್ಮು, ಜ್ವರ ಇಂತಹ ಲಕ್ಷಣಗಳಿರುವ ಮಕ್ಕಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಬೇಕು ಎಂದು ಆರೋಗ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪಿಯುಸಿ ಪೂರಕ ಪರೀಕ್ಷೆಗಳನ್ನು ಅಚ್ಚುಕಟ್ಟಾಗಿ ನಡೆಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಒಟ್ಟು 11 ಕೇಂದ್ರಗಳನ್ನು ಸಜ್ಜುಗೊಳಿಸಲಾಗಿದೆ. ಈ ಪೈಕಿ ಬೀದರ್‌ನಲ್ಲಿ 4, ಭಾಲ್ಕಿ 2, ಔರಾದ್ 1, ಹುಮನಾಬಾದ್ ಹಾಗೂ ಬಸವಕಲ್ಯಾಣದಲ್ಲಿ ತಲಾ 2 ಕೇಂದ್ರಗಳಿವೆ. ಒಟ್ಟು 7,210 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದಕ್ಕೆ ಎಲ್ಲ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಪರೀಕ್ಷೆಗಳು ಸುಸೂತ್ರವಾಗಿ ನಡೆಸುವ ನಿಟ್ಟಿನಲ್ಲಿ ಅಗತ್ಯ ತಂಡಗಳನ್ನು ರಚಿಸಿ, ಸೂಕ್ತ ತರಬೇತಿಯನ್ನು ನೀಡಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ರಮೇಶ ಬೆಜಗಂ ಮಾಹಿತಿ ನೀಡಿದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್ ಬ್ಯಾಕೋಡ್, ಜಿಲ್ಲೆಯ ತಾಲ್ಲೂಕುಗಳ ತಹಶೀಲ್ದಾರರು, ಕೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪರೀಕ್ಷೆಗೆ ಸಂಬಂಧಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT