ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣಿಗಾರಿಕೆಗೆ ಪರವಾನಗಿ ಕಡ್ಡಾಯ

ಜಿಲ್ಲಾಧಿಕಾರಿ ಡಾ. ಎಚ್‌.ಆರ್. ಮಹಾದೇವ ಹೇಳಿಕೆ
Last Updated 2 ಜುಲೈ 2019, 15:29 IST
ಅಕ್ಷರ ಗಾತ್ರ

ಬೀದರ್‌: ‘ಪಟ್ಟಾ ಜಮೀನಿನಲ್ಲಿ ಹೊಸದಾಗಿ ಗಣಿಗಾರಿಕೆ ನಡೆಸಲು ಸಂಬಂಧಿಸಿದ ಇಲಾಖೆಯಿಂದ ಅನುಮತಿ ಪಡೆಯುವುದು ಕಡ್ಡಾಯ’ ಎಂದು ಜಿಲ್ಲಾಧಿಕಾರಿ ಡಾ.ಎಚ್.ಆರ್ ಮಹಾದೇವ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಕಲ್ಲುಪುಡಿ ಮಾಡುವ ಘಟಕಗಳ ಲೈಸೆನ್ಸ್ ನೀಡಿಕೆ ಮತ್ತು ನಿಯಂತ್ರಣ ಪ್ರಾಧಿಕಾರ ಹಾಗೂ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಗಣಿಗಾರಿಕೆಗೆ ವ್ಯವಸಾಯಕ್ಕೆ ಯೋಗ್ಯವಲ್ಲದ ಜಮೀನನ್ನು ಆಯ್ಕೆ ಮಾಡಿಕೊಳ್ಳಬೇಕು. ಕೃಷಿ ಇಲಾಖೆಯ ಅಧಿಕಾರಿಗಳಿಂದ ಎನ್.ಒ.ಸಿ ಪಡೆಯಬೇಕು’ ಎಂದು ಹೇಳಿದರು.

‘ಗಣಿಗಾರಿಕೆ ನಡೆಸಲು ಅನುಮತಿ ಕೋರಿ ಬರುವ ಅರ್ಜಿಗಳು ಕ್ರಮಬದ್ಧವಾಗಿವೆಯೇ ಎನ್ನುವುದನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಕಾನೂನು ಬದ್ಧ ಗಣಿಗಾರಿಕೆಗೆ ಮಾತ್ರ ಅವಕಾಶ ನೀಡಲಾಗುವುದು’ ಎಂದು ತಿಳಿಸಿದರು.

‘ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಕ್ರಷರ್ ಘಟಕಗಳು ಸಿಎಫ್ಒ ನವೀಕರಣ ಮಾಡಿಕೊಂಡಿವೆಯೇ, ಸುರಕ್ಷತಾ ನಿಯಮಗಳನ್ನು ಪಾಲನೆ ಮಾಡುತ್ತಿವೆಯೇ ಎನ್ನುವ ಬಗ್ಗೆ ಗಮನ ಹರಿಸಬೇಕು’ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸದಸ್ಯ ಕಾರ್ಯದರ್ಶಿಗೆ ಸೂಚನೆ ನೀಡಿದರು.

‘ಕ್ರಷರ್ ಘಟಕಗಳು ಇರುವ ಪ್ರದೇಶಗಳಲ್ಲಿ ವಾಯುಮಾಲಿನ್ಯ ನಿಯಂತ್ರಿಸಲಾಗುತ್ತಿದೆಯೇ, ಕಾನೂನು ಬದ್ಧವಾಗಿ ಗಣಿಗಾರಿಕೆ ನಡೆಸಲಾಗುತ್ತಿದೆಯೇ ಎನ್ನುವ ಬಗ್ಗೆ ಪರಿಶೀಲಿಸಬೇಕು’ ಎಂದರು.

‘ಪರವಾನಗಿ ನೀಡುವ ಮುನ್ನ ಮುಖ್ಯ ದಾಖಲಾತಿಗಳ ಜತೆಗೆ ಬಾಕಿ ಪಾವತಿ, ಕಟ್ಟಡ ಕಲ್ಲು, ಕ್ರಷಿಂಗ್ ಪರವಾನಗಿ ಮತ್ತಿತರ ವಿಷಯಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.

‘ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಅಕ್ರಮ ಮರಳು ಸಾಗಾಣಿಕೆ ಮಾಡುವಂತಿಲ್ಲ. ಒಂದು ವೇಳೆ ಬೇರೆ ರಾಜ್ಯಗಳಿಂದ ಮರಳು ವಾಹನಗಳು ಬರುತ್ತಿದ್ದಲ್ಲಿ ಪರವಾನಗಿ ಹೊಂದಿವೆಯಾ, ನಿಗದಿತ ಮಿತಿಯ ಭಾರವಿದೆಯಾ ಎನ್ನುವುದನ್ನು ಪರಿಶೀಲಿಸಬೇಕು’ ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್ ಮಾತನಾಡಿ, ‘ಮಹಾರಾಷ್ಟ್ರ ಹಾಗೂ ಇತರ ರಾಜ್ಯಗಳಿಂದ ವನಮಾರಪಳ್ಳಿ, ರಂಜೋಳಖೇಣಿ ರಸ್ತೆ ಮಾರ್ಗವಾಗಿ ಜಿಲ್ಲೆಗೆ ಮರಳು ಸಾಗಣೆ ಮಾಡಲಾಗುತ್ತಿದೆ. ಈ ಎರಡೂ ಕಡೆಗಳಲ್ಲಿ ಚೆಕ್ ಪೋಸ್ಟ್ ಆರಂಭಿಸಿ ಮರಳು ಸಾಗಣೆ ವಾಹನಗಳ ತಪಾಸಣೆ ನಡೆಸಬೇಕು. ಇದಕ್ಕೆ ಪೊಲೀಸ್ ಇಲಾಖೆಯಿಂದ ಅಗತ್ಯ ಸಹಕಾರ ನೀಡಲಾಗುವುದು’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಕಲ್ಲುಪುಡಿ ಮಾಡುವ ಘಟಕಗಳ ಲೈಸೆನ್ಸ್ ನೀಡಿಕೆ ಮತ್ತು ನಿಯಂತ್ರಣ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಎಂ.ಲಿಂಗರಾಜ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಮಂಜಪ್ಪ, ಅರಣ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT