ಭಾನುವಾರ, ಜುಲೈ 3, 2022
25 °C
ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ

ನಿಷ್ಪಕ್ಷಪಾತ ತನಿಖೆಗೆ ವೇದಿಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಚಿಕ್ಕಮಗಳೂರು ಜಿಲ್ಲೆಯ ಮೂಡಗೆರೆ ತಾಲ್ಲೂಕಿನ ಕಿರಗುಂದ ಗ್ರಾಮದಲ್ಲಿ ದಲಿತ ಯುವಕ ಪುನೀತ್‍ಗೆ ಮೂತ್ರ ಕುಡಿಸಿದ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ದಲಿತ ಸಂಘರ್ಷ ಸಮಿತಿ ಸಂಘಟನೆಗಳ ಜಂಟಿ ವೇದಿಕೆ ಆಗ್ರಹಿಸಿದೆ.

ವೇದಿಕೆ ಪದಾಧಿಕಾರಿಗಳು ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬರೆದ ಮನವಿ ಪತ್ರವನ್ನು ನಗರದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ಘಟನೆಗೆ ಕಾರಣರಾದ ಗೋಣಿಬೀಡಿನ ಪಿಎಸ್‍ಐ ಅರ್ಜುನ ಅವರನ್ನು ಕೂಡಲೇ ಸೇವೆಯಿಂದ ವಜಾಗೊಳಿಸಬೇಕು. ವಿಜಯಪುರ ಜಿಲ್ಲೆಯ ಬಸವನಬಾಗೆವಾಡಿಯಲ್ಲಿ ನಡೆದ ಇಬ್ಬರು ದಲಿತ ಬಾಲಕಿಯರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳ ಆರೋಪಿಗಳನ್ನು ಬಂಧಿಸಬೇಕು. ಚಾಮರಾಜನಗರ ಆಸ್ಪತ್ರೆಯಲ್ಲಿ 37 ಜನರ ಸಾವಿಗೆ ಆಮ್ಲಜನಕ ಕೊರತೆಯೇ ಕಾರಣ ಎಂದು ಹೈಕೋರ್ಟ್ ನೇಮಿಸಿದ್ದ ತನಿಖಾ ಸಮಿತಿ ವರದಿ ನೀಡಿದ ಕಾರಣ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಆಸ್ಪತ್ರೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ. 10 ಲಕ್ಷ ಪರಿಹಾರ ಕಲ್ಪಿಸಬೇಕು. ಲಾಕ್‍ಡೌನ್‍ನಿಂದ ಸಂಕಷ್ಟಕ್ಕೆ ಒಳಗಾಗಿರುವ ಪರಿಶಿಷ್ಟ ಜಾತಿ, ವರ್ಗಗಳ ಬಡವರಿಗೆ ಎಸ್‍ಸಿಪಿ, ಟಿಎಪ್‍ಪಿ ಅನುದಾನದ ಅಡಿ ಹಾಗೂ ಎಲ್ಲ ಸಮುದಾಯಗಳ ಬಡ ಕುಟುಂಬಗಳಿಗೆ ಮಾಸಿಕ ಕನಿಷ್ಠ ರೂ. 15 ಸಾವಿರ ಆರ್ಥಿಕ ನೆರವು ನೀಡಬೇಕು. ಎಸ್‍ಸಿಪಿ, ಟಿಎಸ್‍ಪಿ ಅನುದಾನದ ದುರ್ಬಳಕೆ ಹಾಗೂ ಅವ್ಯವಹಾರದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಬಾಬು ಪಾಸ್ವಾನ್ ನಿಯೋಗದ ನೇತೃತ್ವದ ವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು