ಶನಿವಾರ, ಜೂನ್ 19, 2021
27 °C
ಜಾಗೃತಿ ಕಾರ್ಯಾಗಾರದಲ್ಲಿ ಜಿಲ್ಲಾ ಮಲೇರಿಯಾ ಅಧಿಕಾರಿ ಅನಿಲ ಚಿಂತಾಮಣಿ ಮನವಿ

ಡೆಂಗಿಯ ಬಗ್ಗೆ ಮುನ್ನೆಚ್ಚರಿಕೆ ವಹಿಸಿ: ಬೀದರ್‌ ಮಲೇರಿಯಾ ಅಧಿಕಾರಿ ಅನಿಲ ಚಿಂತಾಮಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ‘ವಿಶ್ವವನ್ನೇ ತಲ್ಲಣಗೊಳಿಸಿರುವ ಕೋವಿಡ್‌ ಸೋಂಕಿನಿಂದಾಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಹಾಸಿಗೆಳು ಸಿಗುತ್ತಿಲ್ಲ. ಈ ಅವಧಿಯಲ್ಲಿ ಡೆಂಗಿ ಪ್ರವೇಶ ಮಾಡಿದರೆ ಮತ್ತಷ್ಟು ಸಮಸ್ಯೆ ಉಲ್ಬಣಗೊಳ್ಳಲಿದೆ. ಗಂಭೀರ ಸಮಸ್ಯೆ ಉದ್ಭವಗೊಳ್ಳುವ ಮೊದಲೇ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮ ಅನುಸರಿಸಬೇಕು’ ಎಂದು ಜಿಲ್ಲಾ ಮಲೇರಿಯಾ ಅಧಿಕಾರಿ ಡಾ. ಅನಿಲ ಚಿಂತಾಮಣಿ ಮನವಿ ಮಾಡಿದರು.

ನಗರದಲ್ಲಿ ಮಂಗಳವಾರ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಮಾಧ್ಯಮ ಪ್ರತಿನಿಧಿಗಳಿಗೆ ಆಯೋಜಿಸಿದ್ದ ಡೆಂಗಿ, ಚಿಕುನ್‌ಗುನ್ಯ ಜಾಗೃತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಸೊಳ್ಳೆಗಳ ಉತ್ಪತ್ತಿಯ ಸಾಂದ್ರತೆ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಸೊಳ್ಳೆಗಳು ಉತ್ಪತ್ತಿಯಾಗದಂತೆ ಎಚ್ಚರ ವಹಿಸಬೇಕು’ ಎಂದು ಹೇಳಿದರು.

ನಗರ ಪ್ರದೇಶದಲ್ಲಿ ಆರೋಗ್ಯ ಸಿಬ್ಬಂದಿ ಕೊರತೆ ಇರುವುದರಿಂದ ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸುತ್ತಿರುವ ಆರೋಗ್ಯ ಸಹಾಯಕರಿಂದ ಪ್ರತಿ ತಿಂಗಳು ಮೊದಲ ಹಾಗೂ ಮೂರನೆಯ ಶುಕ್ರವಾರ ತಾಲ್ಲೂಕು ಆರೋಗ್ಯಾಧಿಕಾರಿಗಳ ಮೇಲುಸ್ತುವಾರಿಯಲ್ಲಿ ನಗರ ಪ್ರದೇಶದಲ್ಲಿ ಈಡೀಸ್ ಸೊಳ್ಳೆಯ ಲಾರ್ವಾ ಸಮೀಕ್ಷೆ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.
‘ಸಾಂಕ್ರಾಮಿಕ ರೋಗ ಜಾಗೃತಿ ಹಾಗೂ ನಿಯಂತ್ರಣ ಕಾರ್ಯಕ್ರಮಗಳಿಗೆ ಆರೋಗ್ಯ ಸಹಾಯಕರು ಹಾಗೂ ಆಶಾ ಕಾರ್ಯಕರ್ತೆಯರ ನೆರವು ಪಡೆಯಲಾಗುತ್ತಿದೆ. ಜಿಲ್ಲೆಯಲ್ಲಿ ಜನವರಿಯಿಂದ ಈವರೆಗೆ 5,34,713 ಮನೆಗಳ ಸಮೀಕ್ಷೆ ನಡೆಸಲಾಗಿದೆ. 10,845 ಜನರಿಗೆ ಮಲೇರಿಯಾ ಪಾಸಿಟಿವ್‌ ಬಂದಿದೆ’ ಎಂದು ಹೇಳಿದರು.
‘ವಿಶ್ವದ 11 ದೇಶಗಳಲ್ಲಿ ಡೆಂಗಿ ಇದೆ. ಈವರೆಗೆ ಮರಣದ ಪ್ರಮಾಣ ಶೇಕಡ 1ರಷ್ಟು ದಾಟಿಲ್ಲ. ಯಾವುದೇ ರೀತಿಯ ಜ್ವರ ಇದ್ದರೂ ಸರ್ಕಾರಿ ಆಸ್ಪತ್ರೆಗೆ ಭೇಟಿ ಕೊಟ್ಟು ರಕ್ತ ತಪಾಸಣೆ ಮಾಡಿಸಿಕೊಳ್ಳಬೇಕು. ಅತಿ ಹೆಚ್ಚು ಪ್ರಕರಣಗಳು ಕಂಡು ಬಂದ ಪ್ರದೇಶದಲ್ಲಿ ಸೊಳ್ಳೆ ಪರದೆ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ’ ಎಂದು ತಿಳಿಸಿದರು.

ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಿವಶಂಕರ, ಡಾ.ಶರಣಯ್ಯ ಸ್ವಾಮಿ, ಡಾ.ರಾಜಶೇಖರ ಪಾಟೀಲ, ವಾರ್ತಾ ಮತ್ತು ಪ್ರಸಾರ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ಗವಿಸಿದ್ದಪ್ಪ ಹೊಸಮನಿ ಇದ್ದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸಂಗಪ್ಪ ಕಾಂಬಳೆ ಕಾರ್ಯಕ್ರಮ ನಿರೂಪಿಸಿದರು. ರಾಜು ಕುಲಕರ್ಣಿ
ವಂದಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.