ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

3ನೇ ಅಲೆ ನಿಯಂತ್ರಣಕ್ಕೆ ಸನ್ನದ್ಧರಾಗಿ: ಅಧಿಕಾರಿಗಳಿಗೆ ಸಚಿವ ಪ್ರಭು ಚವಾಣ್ ಸೂಚನೆ

Last Updated 6 ಜೂನ್ 2021, 5:28 IST
ಅಕ್ಷರ ಗಾತ್ರ

ಬೀದರ್: ‘ಬರುವ ದಿನಗಳಲ್ಲಿ ಕೋವಿಡ್ 3ನೇ ಅಲೆ ಮಕ್ಕಳ ಮೇಲೆ ಹೆಚ್ಚಾಗಿ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ಸೋಂಕು ನಿಯಂತ್ರಣಕ್ಕೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್‌ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಜನಪ್ರತಿನಿಧಿಗಳು, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ಮುಖ್ಯಮಂತ್ರಿ, ಸಚಿವರು ಹಾಗೂ ಸರ್ಕಾರದ ಕಾರ್ಯದರ್ಶಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಕೋವಿಡ್ ನಿಯಂತ್ರಿಸಲು ಜಿಲ್ಲೆಗೆ ಬೇಕಿರುವ ಅವಶ್ಯಕತೆಗಳ ಬಗ್ಗೆ ಮನವರಿಕೆ ಮಾಡಿದ್ದೇನೆ. ಸೋಂಕಿತರಿಗೆ ಚಿಕಿತ್ಸೆ ಕೊಡಲು ಬೇಕಿರುವ ಸಾಮಗ್ರಿಗಳನ್ನು ಪೂರೈಸಿಕೊಳ್ಳಲು ಪ್ರಯತ್ನಿಸಲಾಗುವುದು’ ಎಂದು ಹೇಳಿದರು.

‘ಜಿಲ್ಲೆಯಲ್ಲಿರುವ ಯಾವುದಾದರೂ ಆಸ್ಪತ್ರೆಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಯವುದೇ ರೀತಿಯ ಕೊರತೆಯಿದ್ದಲ್ಲಿ ಮುಂಚಿತವಾಗಿ ಪರಿಹರಿಸಿಕೊಳ್ಳಬೇಕು’ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

‘ಮಕ್ಕಳ ಚಿಕಿತ್ಸೆಗೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸಲಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆಯಾಗುವಂತೆ ನೋಡಿಕೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.

‘ಕೋವಿಡ್ 3ನೇ ಅಲೆಯನ್ನು ಯಶಸ್ವಿಯಾಗಿ ತಡೆಯಲು ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಅವಶ್ಯಕತೆಯಿದೆ. ಮುಂಚಿತವಾಗಿ ಸೋಂಕು ನಿಯಂತ್ರಣ ಕುರಿತು ಜಾಗೃತಿ ಮೂಡಿಸಿ, ಪೋಷಕರಲ್ಲಿರುವ ಭಯವನ್ನು ಹೋಗಲಾಡಿಸಬೇಕು. ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಈ ನಿಟ್ಟಿನಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು’ ಎಂದು ಸೂಚಿಸಿದರು.

‘ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳು ಒಗ್ಗಟ್ಟಾಗಿ ಕೆಲಸ ಮಾಡಿದ್ದರಿಂದ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಬರುತ್ತಿದೆ. ಪ್ರಕರಣಗಳು ಕಡಿಮೆಯಾಗಿವೆ ಎಂದು ನಿರಾಳರಾಗಬೇಕಿಲ್ಲ. ಸೋಂಕು ಸಂಪೂರ್ಣ ಶೂನ್ಯಕ್ಕೆ ಬರುವವರೆಗೆ ಪ್ರಯತ್ನ ಸಾಗಬೇಕು. 3ನೇ ಅಲೆಯ ಪ್ರಭಾವ ಜಿಲ್ಲೆಯ ಮೇಲೆ ಬೀಳದಂತೆ ಎಲ್ಲರೂ ಈ ಹಿಂದಿನಂತೆ ಕೆಲಸ ಮಾಡಬೇಕು’ ಎಂದು ಮನವಿ ಮಾಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವಿ.ಜಿ ರೆಡ್ಡಿ ಹಾಗೂ ಬೀದರ ಬ್ರಿಮ್ಸ್ ನಿರ್ದೇಶಕ ಡಾ.ಶಿವಕುಮಾರ ಅವರು ಆರೋಗ್ಯ ಇಲಾಖೆ ಹಾಗೂ ಬ್ರಿಮ್ಸ್‌ನಿಂದ ಕೈಗೊಂಡಿರುವ ಸಿದ್ಧತೆಗಳನ್ನು ಬಗ್ಗೆ ಸಭೆಗೆ ಮಾಹಿತಿ ನೀಡಿದರು.

ಸಂಸದ ಭಗವಂತ ಖೂಬಾ, ಶಾಸಕರಾದ ರಾಜಶೇಖರ ಪಾಟೀಲ, ಬಂಡೆಪ್ಪ ಕಾಶೆಂಪೂರ್, ರಹೀಂ ಖಾನ್, ಶರಣು ಸಲಗರ, ಕೆಎಸ್‍ಎಸ್‍ಐಡಿಸಿ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬು ವಾಲಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಎಲ್ ನಾಗೇಶ, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ವೈದ್ಯಾಧಿಕಾರಿಗಳಾದ ಡಾ.ಶಿವಕುಮಾರ ಶೆಟಕಾರ್, ಡಾ.ರಾಜೇಶ ಪಾರಾ, ಡಾ.ಚಂದ್ರಕಾಂತ ಮೇದಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT