ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಗಾರು ಹಂಗಾಮಿಗೆ ಸಿದ್ಧತೆ ಮಾಡಿಕೊಳ್ಳಿ

ಕೃಷಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಸೂಚನೆ
Last Updated 19 ಮೇ 2022, 11:06 IST
ಅಕ್ಷರ ಗಾತ್ರ

ಬೀದರ್: ಮುಂಗಾರು ಹಂಗಾಮಿಗೆ ರಸಗೊಬ್ಬರ ಮತ್ತು ಬಿತ್ತನೆ ಬೀಜದ ಸಮಸ್ಯೆ ಆಗದಂತೆ ಕೃಷಿ ಇಲಾಖೆಯ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಸೂಚನೆ ನೀಡಿದರು.


ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮುಂಗಾರು ಹಂಗಾಮಿನ ಪೂರ್ವಸಿದ್ಧತಾ ಸಭೆ ನಡೆಸಿ ಅವರು ಮಾತನಾಡಿದರು.


ಬಿತ್ತನೆ ಸಮಯದಲ್ಲಿ ರೈತರಿಗೆ ಯಾವುದೇ ರೀತಿಯ ಸಮಸ್ಯೆ ಎದುರಾಗಬಾರದು. ಹೀಗಾಗಿ ಕೃಷಿ ಅಧಿಕಾರಿಗಳು, ತಹಶೀಲ್ದಾರರು ಮತ್ತು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ತಿಳಿಸಿದರು.


ಜಿಲ್ಲೆಯ ತಾಲ್ಲೂಕು ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ರಚಿಸಬೇಕು. ಆಯಾ ತಾಲ್ಲೂಕಿನ ರೈತ ಸಂಘಗಳೊಂದಿಗೂ ಸಭೆ ನಡೆಸಬೇಕು. ರಸಗೊಬ್ಬರ ಮಾರಾಟ ಮಾಡುವವರ ಹೆಸರು, ಮೊಬೈಲ್ ಸಂಖ್ಯೆ ಮತ್ತು ಮಾರಾಟಗಾರರ ನೋಂದಣಿ ಪುಸ್ತಕವನ್ನು ಅಧಿಕಾರಿಗಳು ಪರಿಶೀಲನೆ ಮಾಡಬೇಕು ಎಂದರು.


ಬೀಜ ವಿತರಣೆ ಹಾಗೂ ಮಾರಾಟ ಕೇಂದ್ರಗಳನ್ನು ಎಲ್ಲೆಡೆ ತೆರೆಯಬೇಕು. ಅಗತ್ಯವಿದ್ದರೆ ಗ್ರಾಮ ಸಹಾಯಕರ ಸಹಾಯ ಪಡೆಯಬೇಕು. ಜೂನ್‌ 1ರ ವೇಳೆಗೆ ಬೀಜ ವಿತರಣೆ ಶುರು ಮಾಡಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೇಳಿದರು.


ರಸಗೊಬ್ಬರ ಹಾಗೂ ಬಿತ್ತನೆ ಬೀಜ ಹೊರ ಜಿಲ್ಲೆಗೆ ಸಾಗಣೆಯಾಗದಂತೆ ಬೀದರ್‌ ಜಿಲ್ಲೆಯ ಗಡಿಯಲ್ಲಿ 17 ಕಡೆ ಚೆಕ್ಪೋಸ್ಟ್ ಸ್ಥಾಪನೆ ಮಾಡಿ ಪರಿಶೀಲನೆ ಮಾಡಬೇಕು ಎಂದು ಸೂಚಿಸಿದರು.


ಕೃಷಿ ಇಲಾಖೆಯ ಅಧಿಕಾರಿಗಳು ರೈತರಿಗೆ ಕೃಷಿ ಇಲಾಖೆಯ ಯೋಜನೆಗಳ ಮಾಹಿತಿ ನೀಡಬೇಕು. ರೈತರು ಬಿತ್ತನೆ ಬೀಜ ಹಾಗೂ ರಸಗೊಬ್ಬರವನ್ನು ಅಧಿಕೃತ ಮಾರಾಟಗಾರರಿಂದ ಖರೀದಿಸುವಂತೆ ಸಲಹೆ ನೀಡಬೇಕು. ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಎಲ್ಲ ಬಗೆಯ ಮಾಹಿತಿ ಒದಗಿಸಬೇಕು ಎಂದು ಸೂಚನೆ ನೀಡಿದರು.


ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಹೀರಾ ನಸೀಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ. ಕಿಶೋರ್ ಬಾಬು, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ತಾರಾಮಣಿ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಬೀದರ್‌ ಉಪ ವಿಭಾಗಾಧಿಕಾರಿ ನಯೀಮ್‌ ಮೋಮಿನ್, ಬೀದರ್‌ ತಹಶೀಲ್ದಾರ್‌ ಅಣ್ಣಾರಾವ್ ಪಾಟೀಲ, ಭಾಲ್ಕಿ ತಹಶೀಲ್ದಾರ್ ಕೀರ್ತಿ ಚಾಲಕ್ ಸೇರಿದಂತೆ ಎಲ್ಲ ತಾಲ್ಲೂಕುಗಳ ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು. ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಪಶು ಸಂಗೋಪನೆ ಇಲಾಖೆಯ ಮುಖ್ಯ ಪಶು ವೈದ್ಯಾಧಿಕಾರಿ ಡಾ.ಗೌತಮ ಅರಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT