ಶುಕ್ರವಾರ, ಮೇ 27, 2022
31 °C
ಕೆಕೆಆರ್‌ಡಿಬಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ

ಕೆಲಸ ಮಾಡದ ಅಧಿಕಾರಿಗಳ ವಿರುದ್ಧ ಅಧ್ಯಕ್ಷರ ಅಸಮಾಧಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಲಾಕ್‌ಡೌನ್‌ ತೆರವುಗೊಳಿಸಿ ಮೂರು ತಿಂಗಳಾದರೂ ಪಿಆರ್‌ಇಡಿ, ಕೆಆರ್‌ಡಿಎಲ್ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡದ್ದಕ್ಕೆ ಶನಿವಾರ ಇಲ್ಲಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಚುನಾಯಿತ ಪ್ರತಿನಿಧಿಗಳಿಂದ ತೀವ್ರ ಅಸಮಾಧಾನ ವ್ಯಕ್ತವಾಯಿತು.

ಸರಿಯಾಗಿ ಸಿದ್ಧತೆ ಮಾಡಿಕೊಳ್ಳದೆ ಸಭೆಗೆ ಹಾಜರಾಗಿ ಅಸಮರ್ಪಕ ಮಾಹಿತಿ ನೀಡುತ್ತಿದ್ದ ಮೂರೂ ಇಲಾಖೆಗಳ ಅಧಿಕಾರಿಗಳನ್ನು ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ್, ಪ್ರಾದೇಶಿಕ ಆಯುಕ್ತ ಎನ್‌.ವಿ.ಪ್ರಸಾದ ಹಾಗೂ ಜಿಲ್ಲಾಧಿಕಾರಿ ರಾಮಚಂದ್ರನ್‌ ಸಭೆಯಲ್ಲೇ ತರಾಟೆಗೆ ತೆಗೆದುಕೊಂಡರು.

ಅನೇಕ ಕಾಮಗಾರಿಗಳನ್ನು ಬಾಕಿ ಉಳಿಸಿಕೊಂಡಿರುವ ಪಂಚಾಯತ್ ರಾಜ್ಯ ಎಂಜಿನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರಿಗೆ ‘ನಿಮಗೆ ನಿಮ್ಮ ಇಲಾಖೆಯ ಮೇಲೆಯೇ ಹಿಡಿತವಿಲ್ಲ. ಮೊದಲು ಕೆಳ ಹಂತದ ಅಧಿಕಾರಿಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಿ’ ಎಂದು ಎಚ್ಚರಿಕೆ ನೀಡಿದರು.

ಪಿಆರ್‌ಇಡಿ ಎಂಜಿನಿಯರ್‌ಗೆ ನೋಟಿಸ್ 

ಸಕಾಲದಲ್ಲಿ ಕಾಮಗಾರಿಗಳನ್ನು ಕೈಗೊಳ್ಳದ, ಸಭೆಗೆ ಸರಿಯಾದ ಮಾಹಿತಿಯನ್ನೂ ಪೂರೈಸದ ಪಿಆರ್‌ಇಡಿ ಎಂಜಿನಿಯರ್‌ಗೆ ನೋಟಿಸ್‌ ನೀಡುವಂತೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾರ್ಯದರ್ಶಿಯೂ ಆದ ಎನ್.ವಿ.ಪ್ರಸಾದ ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.

2016-17ನೇ ಸಾಲಿನ ಕಾಮಗಾರಿಗಳನ್ನು ಬಾಕಿ ಉಳಿಸಿಕೊಂಡಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ದತ್ತಾತ್ರೇಯ ಪಾಟೀಲ, ‘ತಕ್ಷಣ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.

ಕೊವಿಡ್ ವೇಳೆಯಲ್ಲಿ ಕೆಲವು ಸಂಕಷ್ಟದ ಮಧ್ಯೆಯೂ ಮಂಡಳಿಯಿಂದ ಆಸ್ಪತ್ರೆಗಳಿಗೆ ನೀಡಿದ ಅನುದಾನ ಬಳಸಿಲ್ಲ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳ ವಿರುದ್ಧವೂ ಬೇಸರ ವ್ಯಕ್ತಪಡಿಸಿದರು.

* * *

ರಿಂಗ್ ರೋಡ್ ಕಾಮಗಾರಿ ಪೂರ್ಣಗೊಳಿಸಿ

‘ಹಿಂದೆ ಇಬ್ಬರು ಜಿಲ್ಲಾ ಉಸ್ತುವಾರಿ ಸಚಿವರು ಬಹುತೇಕ ಅನುದಾನವನ್ನು ತಮ್ಮ ಕ್ಷೇತ್ರಕ್ಕೆ ಬಳಸಿಕೊಂಡಿದ್ದಾರೆ. ಸ್ವಲ್ಪ ಮಾತ್ರ ಉಳಿದಿರುವ ರಿಂಗ್‌ ರೋಡ್ ಕಾಮಗಾರಿಯನ್ನು ಏನಾದರೂ ಮಾಡಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು’ ಎಂದು ಸಂಸದ ಭಗವಂತ ಖೂಬಾ ಒತ್ತಾಯಿಸಿದರು.

ಶಾಸಕ ರಹೀಂ ಖಾನ್ ಮಾತನಾಡಿ, ‘ಬೀದರ್‌ ಜಿಲ್ಲೆಯಲ್ಲಿ ಅಧಿಕಾರಿಗಳದ್ದೇ ದರ್ಬಾರು ನಡೆದಿದೆ. ರಿಂಗ್‌ ರೋಡ್‌ ಅಪೂರ್ಣಗೊಂಡಿದೆ. ಚುನಾಯಿತ ಪ್ರತಿನಿಧಿಗಳಿಗೆ ಸರಿಯಾದ ಮಾಹಿತಿಯನ್ನೂ ಕೊಡುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

ಹುಮನಾಬಾದ್‌ ಶಾಸಕ ರಾಜಶೇಖರ ಪಾಟೀಲ ಮಾತನಾಡಿ, ‘ಮಂಡಳಿಯ ಅನುದಾನ ಜಿಲ್ಲೆಯ ಎಲ್ಲ ಕ್ಷೇತ್ರಗಳಿಗೆ
ಸಮರ್ಪಕ ಹಂಚಿಕೆಯಾಗಬೇಕು. ಹೆಸರು ಬದಲಾವಣೆ ಮಾಡಿದರೆ ಕಲ್ಯಾಣ ಆಗುವುದಿಲ್ಲ. ಜನ ಕಲ್ಯಾಣಕ್ಕೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

‘ಕೆಕೆಆರ್‌ಡಿಬಿ ಕಾಮಗಾರಿಗಳ ಅನುಷ್ಠಾನದಲ್ಲಿ ಪಿಆರ್‌ಇಡಿ ಇಲಾಖೆ ವಿಫಲವಾಗಿದೆ. ಸತತ ವಿಡಿಯೊ ಕಾನ್ಫರೆನ್ಸ್ ನಡೆಸಿ ಪ್ರಗತಿ ಪರಿಶೀಲಿಸಿ ಸೂಚನೆ ನೀಡಿದರೂ ಕಾಮಗಾರಿ ಅನುಷ್ಠಾನಕ್ಕೆ ಒತ್ತು ಕೊಡದಿದ್ದರೆ ಹೇಗೆ? 2017-18ರಲ್ಲಿನ ಬಾಕಿ ಇರುವ 6 ಕಾಮಗಾರಿಗಳನ್ನು ಮಾರ್ಚ್‌ ಒಳಗೆ ಪೂರ್ಣಗೊಳಿಸಬೇಕು’ ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಕೆಕೆಆರ್‌ಡಿಬಿಗೆ ₹ 1,031 ಕೋಟಿ ಅನುದಾನ

ಬೀದರ್‌: ‘ರಾಜ್ಯ ಸರ್ಕಾರ ಹಿಂದಿನ ಅವಧಿಗಿಂತಲೂ ಈ ಅವಧಿಯಲ್ಲಿ ಹೆಚ್ಚಿನ ಅನುದಾನವನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ನೀಡಿದೆ. ಸರ್ಕಾರ ನೀಡಿದ ₹ 1,031 ಕೋಟಿ ಅನುದಾನದ ಸಮರ್ಪಕ ಬಳಕೆಗೆ ಗಮನ ಹರಿಸಬೇಕು’ ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ(ಕೆಕೆಆರ್‌ಡಿಬಿ) ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ್ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿಯ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಶನಿವಾರ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಬೀದರ್‌ ಜಿಲ್ಲೆಯಲ್ಲಿ ಕೈಗೊಳ್ಳಲಾದ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿಶೇಷ ಆಸಕ್ತಿ ವಹಿಸಿ ಈ ಭಾಗಕ್ಕೆ ಕಲ್ಯಾಣ ಕರ್ನಾಟಕ ಎಂದು ಮರು ನಾಮಕರಣ ಮಾಡಿದ್ದಾರೆ. ಮಂಡಳಿಗೆ ಹಣಕಾಸಿನ ಕೊರತೆ ಇಲ್ಲ. ಬಾಕಿ ಉಳಿದಿರುವ ಎಲ್ಲ ಕಾಮಗಾರಿಗಳನ್ನು ಮಾರ್ಚ್‌ ಒಳಗೆ ಪೂರ್ಣಗೊಳಿಸಬೇಕು’ ಎಂದು ನಿರ್ದೇಶನ ನೀಡಿದರು.

‘ಜಿಲ್ಲೆಗಳಿಂದ ಬರುವ ಪ್ರಸ್ತಾವಗಳಿಗೆ ಎರಡು ದಿನಗಳಲ್ಲೇ ಒಪ್ಪಿಗೆ ನೀಡಲಾಗುತ್ತಿದೆ. ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದ ಕಡತಗಳು ಕೆಕೆಆರ್‌ಡಿಬಿ ಕಚೇರಿಯಲ್ಲಿ ಬಾಕಿ ಉಳಿದಿಲ್ಲ’ ಎಂದರು.

‘2018-19ನೆ ಸಾಲಿನ ಕಾಮಗಾರಿಗಳನ್ನು ಮೊದಲು ಪೂರ್ಣಗೊಳಿಸಬೇಕು. 2019-20ನೇ ಸಾಲಿನಲ್ಲಿ ತೆಗೆದುಕೊಂಡ ಮಂಡಳಿಯ ಕಾಮಗಾರಿಗಳನ್ನು ತಕ್ಷಣ ಆರಂಭಿಸಬೇಕು’ ಎಂದು ಸೂಚನೆ ನೀಡಿದರು.

ಅಧಿಕಾರಿಗಳ ವಿರುದ್ಧ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗರಂ

ಬೀದರ್‌: ‘ಕೆಲ ಇಲಾಖೆಗಳ ಅಧಿಕಾರಿಗಳು ಮೊಬೈಲ್‌ ಕರೆಗಳನ್ನೇ ಸ್ವೀಕರಿಸುವುದಿಲ್ಲ. ಇಂತಹ ಅಧಿಕಾರಿಗಳಿಂದ ಅಭಿವೃದ್ಧಿ ನಿರೀಕ್ಷಿಸಲು ಸಾಧ್ಯವಿಲ್ಲ’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ನಿರ್ಮಲಾ ಮಾನೆಗೋಪಾಳೆ ಅಧಿಕಾರಿಗಳ ವಿರುದ್ಧ ಗರಂ ಆದರು.

‘ಬಸವಕಲ್ಯಾಣದಲ್ಲಿ ಕೆಕೆಆರ್‌ಡಿಬಿ ಅನುದಾನದಲ್ಲಿ ನಿರ್ಮಿಸಿದ ರಸ್ತೆ ಒಂದು ವರ್ಷದಲ್ಲೇ ಕಿತ್ತು ಹೋಗಿದೆ. ಚಿತ್ರಸಹಿತ ದಾಖಲೆ ಒದಗಿಸಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ’ ಎಂದು ದೂರಿದರು.

‘ಚುನಾಯಿತ ಪ್ರತಿನಿಧಿಗಳ ಕರೆಯನ್ನು ಸ್ವೀಕರಿಸದ ಮನಸ್ಥಿತಿ ಮುಂದುವರಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ. ಬೆಂಗಳೂರಿನಲ್ಲಿ ಕುಳಿತು ಕೆಲಸ ಮಾಡಿಸುವ ವೈಖರಿ ನಿಲ್ಲಬೇಕು. ಕೇಂದ್ರ ಸ್ಥಾನದಲ್ಲಿದ್ದು ಕೆಲಸ ಮಾಡುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು’ ಎಂದು ದತ್ತಾತ್ರೇಯ ಪಾಟೀಲ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಿಇಒ ಗ್ಯಾನೇಂದ್ರಕುಮಾರ ಗಂಗ್ವಾರ್, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಬೀದರ್‌ ಉಪ ವಿಭಾಗಾಧಿಕಾರಿ ಗರಿಮಾ ಪನ್ವಾರ್, ಬಸವಕಲ್ಯಾಣ ಉಪ ವಿಭಾಗಾಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸೂರ್ಯಕಾಂತ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.