ಶನಿವಾರ, ಅಕ್ಟೋಬರ್ 8, 2022
23 °C
ಉಪನ್ಯಾಸಕರ ಜಿಲ್ಲಾ ಮಟ್ಟದ ಸಮಾವೇಶದಲ್ಲಿ ಶಶಿಲ್ ನಮೋಶಿ ಭರವಸೆ

ಬೇಡಿಕೆ ಈಡೇರಿಕೆಗೆ ಸರ್ಕಾರದ ಮೇಲೆ ಒತ್ತಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ‌ ‘ಹಲವು ವರ್ಷಗಳಿಂದ ಸಂಕಷ್ಟ ಎದುರಿಸುತ್ತಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗುವುದು’ ಎಂದು ವಿಧಾನ ಪರಿಷತ್ ಸದಸ್ಯ ಶಶಿಲ್ ನಮೋಶಿ ಭರವಸೆ ನೀಡಿದರು.

ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಒಕ್ಕೂಟದ ಜಿಲ್ಲಾ ಘಟಕದ ವತಿಯಿಂದ ಇಲ್ಲಿಯ ಪ್ರತಾಪನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಉಪನ್ಯಾಸಕರ ಪ್ರಥಮ ಜಿಲ್ಲಾ ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

‘ಶರ್ಮಾ ಸಮಿತಿ ಪ್ರಕಾರ ಅತಿಥಿ ಉಪನ್ಯಾಸಕರಿಗೆ ಕ್ರಮಬದ್ಧ ಬೋಧನೆಗೆ ಅವಕಾಶ ನೀಡಲಾಗಿದೆ. ಬೆಲೆ ಏರಿಕೆಯಂಥ ಇಂದಿನ ಸ್ಥಿತಿಯಲ್ಲಿ ಅತಿಥಿ ಉಪನ್ಯಾಸಕರು ತೀವ್ರ ಸಂಕಷ್ಟದಲ್ಲಿರುವುದು ನನ್ನ ಗಮನಕ್ಕೆ ಬಂದಿದೆ. ಸಮಸ್ಯೆಗೆ ಪರಿಹಾರ ಕಲ್ಪಿಸುವ ದಿಸೆಯಲ್ಲಿ ಶಿಕ್ಷಣ ತಜ್ಞರೊಂದಿಗೆ ಇನ್ನಷ್ಟು ವಿಷಯಗಳ ಕುರಿತು ಚರ್ಚಿಸಲಾಗುವುದು. ಅತಿಥಿ ಉಪನ್ಯಾಸಕರ ಸಮಸ್ಯೆ ಬಗೆ ಹರಿಸಲು ಪ್ರಯತ್ನಿಸಲಾಗುವುದು’ ಎಂದು ತಿಳಿಸಿದರು.

ಶಾಸಕ ರಹೀಂ ಖಾನ್ ಮಾತನಾಡಿ, ‘ಅತಿಥಿ ಉಪನ್ಯಾಸಕರಿಗೆ ಸಂಬಳ ಕಡಿಮೆ ಇದೆ. ಇದರಿಂದ ಬೋಧನೆ ಮೇಲೆ ದುಷ್ಟರಿಣಾಮ ಬೀರುತ್ತದೆ. ಅಧಿವೇಶನದಲ್ಲಿ ಶೂನ್ಯವೇಳೆಯಲ್ಲಿ ಉಪನ್ಯಾಸಕರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಲು ಪ್ರಯತ್ನಿಸಲಾಗುವುದು’ ಎಂದರು.

ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರ ಒಕ್ಕೂಟದ ಅಧ್ಯಕ್ಷ ಹಣಮಂತ ಕಲ್ಮನಿ ಮಾತನಾಡಿ, ‘ಸರ್ಕಾರ ಅತಿಥಿ ಎನ್ನುವ ಪದ ಕಿತ್ತೆಸೆದು ಉಪನ್ಯಾಸಕರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಪ್ರತಿ ವರ್ಷ ಕೌನ್ಸೆಲಿಂಗ್ ನಡೆಸದೆ ಈಗಾಗಲೇ ಸೇವೆಯಲ್ಲಿರುವವರನ್ನು ಕಾಯಂಗೊಳಿಸಬೇಕು. ಸೇವಾ ಭದ್ರತೆ ನೀಡುವುದರ ಜತೆಗೆ ವಯೋಮಿತಿ ಮೀರಿದ ಹಾಗೂ ಸಾವಿಗೀಡಾದ ಅತಿಥಿ ಉಪನ್ಯಾಸಕರಿಗೆ ಪರಿಹಾರ ಧನ ನೀಡಬೇಕು. ಅತಿಥಿ ಉಪನ್ಯಾಸಕರಿಗೆ ರಜೆ, ಪಿಎಫ್, ಇಪಿಎಫ್ ಸೌಲಭ್ಯ ಕಲ್ಪಿಸಬೇಕು. ಉಪನ್ಯಾಸಕಿಯರಿಗೆ ಪ್ರಸೂತಿ ಸಂದರ್ಭದಲ್ಲಿ ವೇತನ ಸಹಿತ ರಜೆ ನೀಡಬೇಕು’ ಎಂದು ಮನವಿ ಮಾಡಿದರು.

‘ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲು ಶೀಘ್ರ ರಾಜ್ಯ ಯಮಟ್ಟದ ಸಮಾವೇಶ ಏರ್ಪಡಿಸಲಾಗುವುದು. ಅದಕ್ಕಾಗಿ ಸಿದ್ಧತೆಯನ್ನೂ ಆರಂಭಿಸಲಾಗಿದೆ’ ಎಂದು ತಿಳಿಸಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರ ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಅನಿಲಕುಮಾರ ಶಿಂಧೆ ಮಾತನಾಡಿ, ‘ರಾಜ್ಯದಲ್ಲಿ ಸುಮಾರು 430 ಪದವಿ ಕಾಲೇಜುಗಳಿವೆ. ಶೇಕಡ 75ರಷ್ಟು ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರೇ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದಾರೆ’ ಎಂದು ಹೇಳಿದರು.

‘ಕನಿಷ್ಠ ವೇತನದಲ್ಲಿ ಎರಡು ದಶಕಗಳಿಂದ ದುಡಿಯುತ್ತಿರುವ ಉಪನ್ಯಾಸಕರ ವಯೋಮಾನ ಮೀರುತ್ತಿದೆ. ಅತ್ತ ಸರ್ಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲಾಗದೆ, ಇತ್ತ ಕಡಿಮೆ ಸಂಬಳದಲ್ಲಿ ಬದುಕು ನಡೆಸಲು ಸಾಧ್ಯವಾಗದೆ ಕಷ್ಟ ಎದುರಿಸುತ್ತಿದ್ದಾರೆ. ಸರ್ಕಾರ ಅತಿಥಿ ಉಪನ್ಯಾಸಕರನ್ನು ಜೀತದಾಳುಗಳಂತೆ ಕೆಲಸ ಮಾಡಿಸಿಕೊಳ್ಳುವುದನ್ನು ಕೈಬಿಡಬೇಕು’ ಎಂದು ಒತ್ತಾಯಿಸಿದರು.

ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಚಂದ್ರಕಾಂತ ಸಿಂಗೆ, ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಪೀಟರ್, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ, ಹಿರಿಯ ಅತಿಥಿ ಉಪನ್ಯಾಸಕ ಅಶೋಕ ಭಂಡಾರಿ ಇದ್ದರು.

ಒಕ್ಕೂಟದ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶಿವಲೀಲಾ ಮಠಪತಿ ಸ್ವಾಗತಿಸಿದರು. ಬಸವರಾಜ ಶೇರಿ ನಿರೂಪಿಸಿದರು. ಧನರಾಜ ತುಡಮೆ ವಂದಿಸಿದರು. ತಾಲ್ಲೂಕಿನ ವಿವಿಧ ಕಾಲೇಜುಗಳ ಅತಿಥಿ ಉಪನ್ಯಾಸಕರು ಪಾಲ್ಗೊಂಡಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.