ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳ ಮೇಲಿನ ದೌರ್ಜನ್ಯ ತಡೆಯಿರಿ

ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಸೂಚನೆ
Last Updated 22 ನವೆಂಬರ್ 2020, 5:28 IST
ಅಕ್ಷರ ಗಾತ್ರ

ಬೀದರ್: ಜಿಲ್ಲೆಯಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ವಿವಿಧ ಕಾರ್ಯಕ್ರಮಗಳು ಮತ್ತು ಕಾರ್ಯ ಚಟುವಟಿಕೆಗಳ ಪ್ರಗತಿ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ವಿಳಂಬ ಮಾಡದೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಬಾಲಕಾರ್ಮಿಕರು ಕಂಡು ಬರುವ ಕಡೆಗಳಲ್ಲಿ ದಿಢೀರ್ ದಾಳಿ ನಡೆಸಿ ಪ್ರಕರಣ ದಾಖಲಿಸಿ, ದಂಡ ವಿಧಿಸಿ ಎಚ್ಚರಿಕೆ ನೀಡಬೇಕು ಎಂದು ನಿರ್ದೇಶನ ನೀಡಿದರು.

ಹೆಣ್ಣು ಭ್ರೂಣ ಹತ್ಯೆ ಅಪರಾಧವಾಗಿದೆ. ಯಾರಾದರೂ ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಲಿಂಗ ಪತ್ತೆ ಹಚ್ಚುವುದು ಕಂಡು ಬಂದಲ್ಲಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಸ್ವಯಂ ಸೇವಾ ಸಂಘಗಳ ಪದಾಧಿಕಾರಿಗಳು ಮಾತನಾಡಿ, ಕೆಲ ತಾಲ್ಲೂಕುಗಳಲ್ಲಿ ಚಿಂದಿ ಆಯುವ ಹಾಗೂ ಭಿಕ್ಷೆ ಬೇಡುವ ಮಕ್ಕಳು ಹೆಚ್ಚಿನ ರೀತಿಯಲ್ಲಿ ಕಂಡು ಬರುತ್ತಿದ್ದಾರೆ ಎಂದು ಸಭೆಯ ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಲಾಕ್‍ಡೌನ್ ಅವಧಿಯಲ್ಲಿ ಬೀದರ್ ನಗರದ ವಿವಿಧೆಡೆ ದಾಳಿ ನಡೆಸಿ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದರು.

ಸ್ಥಳೀಯ ಸಂಸ್ಥೆಗಳ ಮೂಲಕ ವ್ಯಾಪಕ ಪ್ರಚಾರ ನಡೆಸಿ, ಜನರಲ್ಲಿ ಅರಿವು ಮೂಡಿಸಿ ಮಕ್ಕಳ ಮೇಲೆ ಯಾವುದೇ ರೀತಿಯ ದೌರ್ಜನ್ಯಗಳು ನಡೆಯದಂತೆ ನೋಡಿಕೊಳ್ಳಲಾಗುವುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಗೌರಿಶಂಕರ ಪ್ರತಾಪುರೆ ಹೇಳಿದರು.

ತಹಶೀಲ್ದಾರ್ ಗಂಗಾದೇವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ತಿಪ್ಪಣ್ಣ ಪಿ.ಸಿರಸಗಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT