ಭಾನುವಾರ, ಜೂನ್ 20, 2021
23 °C
ವಿಡಿಯೊ ಸಂವಾದದಲ್ಲಿ ಕೆಕೆಆರ್‌ಡಿಬಿ ಅಧ್ಯಕ್ಷ ರೇವೂರ ಸೂಚನೆ

ಆಮ್ಲಜನಕ ಖರೀದಿಗೆ ಪ್ರಸ್ತಾವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಅವರು ಕಲ್ಯಾಣ ಕರ್ನಾಟಕ ಭಾಗದ ಬೀದರ್ ಸೇರಿದಂತೆ ಆರು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಗಳೊಂದಿಗೆ ಬುಧವಾರ ವಿಡಿಯೊ ಸಂವಾದ ನಡೆಸಿ, ವಿವಿಧ ವಿಷಯಗಳ ಪ್ರಗತಿ ಪರಿಶೀಲನೆ ನಡೆಸಿದರು.

ಕೋವಿಡ್ ತಡೆಗೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ವೈದ್ಯಕೀಯ ಸಲಕರಣೆಗಳು, ಆಂಬುಲನ್ಸ್ ಖರೀದಿ ಹಾಗೂ ಅಗತ್ಯ ಪ್ರಸ್ತಾವಗಳನ್ನು ಸಲ್ಲಿಸಬೇಕು ಎಂದು ಸೂಚಿಸಿದರು.

ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಮಾತನಾಡಿ, ‘ಬೀದರ್ ಜಿಲ್ಲೆಯಲ್ಲಿ ಕೋವಿಡ್ ಹರಡುವಿಕೆ ತಡೆಗೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕೋವಿಡ್ ಸೋಂಕು ನಿಯಂತ್ರಿಸಲು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಆಸ್ಪತ್ರೆಗಳಿಗೆ ಆಮ್ಲಜನಕ, ಬೆಡ್, ವೆಂಟಿಲೇಟರ್‌ಗಳು, ಆಮ್ಲಜನಕ ಸಾಂದ್ರಕ, ಸಿಟಿ ಸ್ಕ್ಯಾನ್ ಸೇರಿದಂತೆ ಅಗತ್ಯ ವೈದ್ಯಕೀಯ ಸಲಕರಣೆಗಳು, ಆಂಬುಲನ್ಸ್ ಖರೀದಿಗಾಗಿ ಕೂಡಲೇ ಪ್ರಸ್ತಾವನೆ ಸಿದ್ಧಪಡಿಸಿ ಸಲ್ಲಿಸಲಾಗುವುದು’ ಎಂದು ತಿಳಿಸಿದರು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಡಾ.ಎನ್.ವಿ. ಪ್ರಸಾದ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಮಂಡಳಿ ಅನುಷ್ಠಾನಾಧಿಕಾರಿಗಳು ಇದ್ದರು.

20 ಆಮ್ಲಜನಕ ಸಿಲಿಂಡರ್ ಕಾಯ್ದಿರಿಸಲು ಕ್ರಮ: ಜಿಲ್ಲಾಧಿಕಾರಿ
ಬೀದರ್ ಜಿಲ್ಲೆಯಲ್ಲಿರುವ ಕೊರೊನಾ ಸೋಂಕಿತರಿಗೆ ಆಮ್ಲಜನಕ ಕೊರತೆ ನೀಗಿಸುವ ನಿಟ್ಟಿನಲ್ಲಿ ಲಭ್ಯವಿರುವ ಆಮ್ಲಜನಕ ಸಮರ್ಪಕ ನಿರ್ವಹಣೆಗೆ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಕ್ರಮ ವಹಿಸಿದ್ದಾರೆ.

ತಮ್ಮ ದಾಸ್ತಾನಿನಲ್ಲಿ 20 ಜಂಬೋ ಸಿಲಿಂಡರ್‌ಗಳನ್ನು ಕಾಯ್ದಿರಿಸಬೇಕು. ಕಾಯ್ದಿರಿಸಿದ ಸಿಲಿಂಡರ್‌ಗಳು ಅತ್ಯವಶ್ಯಕವಾದ ಸಂದರ್ಭದಲ್ಲಿ ಜಿಲ್ಲಾಡಳಿತ ಅನುಮತಿಯೊಂದಿಗೆ ಸ್ಥಾಪಿತ ತ್ವರಿತ ಪ್ರತಿಕ್ರಿಯೆ ತಂಡದ ಮುಖಾಂತರ ಹಂಚಿಕೆ ಮಾಡಬೇಕು ಎಂದು ಮೇ ಕರ್ನಾಟಕ ಗ್ಯಾಸೆಸ್ ಅವರಿಗೆ ಸುತ್ತೋಲೆ ಮೂಲಕ ಸೂಚಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು