ಶುಕ್ರವಾರ, ಅಕ್ಟೋಬರ್ 23, 2020
21 °C
ರೈತ ಸಂಘರ್ಷ ಸಮನ್ವಯ ಸಮಿತಿಯಿಂದ ಪ್ರಧಾನಿ, ಮುಖ್ಯಮಂತ್ರಿಗೆ ಮನವಿ ಪತ್ರ

ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಗ್ರಾಹಕರ ಹಿತರಕ್ಷಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿತು.

ಸಮಿತಿಯ ಕಾರ್ಯಕರ್ತರು ಅಂಬೇಡ್ಕರ್ ವೃತ್ತದಿಂದ ಘೋಷಣೆಗಳನ್ನು ಕೂಗುತ್ತ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ನಡೆಸಿ ಪ್ರಧಾನಿ ಹಾಗೂ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ಕೋವಿಡ್ 19 ಅವಧಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮನಬಂದಂತೆ ಸುಗ್ರಿವಾಜ್ಞೆಗಳನ್ನು ಹೊರಡಿಸಿವೆ. ಬಿಜೆಪಿಯ ಕೆಲ ಮುಖಂಡರು ಕಾಯ್ದೆಗಳ ವಿರುದ್ಧ ಹೋರಾಟ ನಡೆಸಿದವರನ್ನೇ ಅವಿವೇಕಿಗಳು ಎಂದು ಟೀಕಿಸಿ ಅಯೋಗ್ಯತನ ಪ್ರದರ್ಶಿಸಿದ್ದಾರೆ ಎಂದು ಹೇಳಿದರು.

ಲೋಕಸಭೆ, ರಾಜ್ಯಸಭೆಗಳಲ್ಲಿ ವಿರೋಧ ಪಕ್ಷಗಳು ಹಾಗೂ ರೈತರ ವಿರೋಧ ಲೆಕ್ಕಿಸದೆ ಗ್ರಾಹಕರ ಹಿತರಕ್ಷಣಾ ಕಾಯ್ದೆ ತಿದ್ದುಪಡಿ, ಬೆಳೆ ಭರವಸೆ ಮತ್ತು ಕೃಷಿ ಸೇವೆಗಳ ರೈತರ (ಸಶಕ್ತೀಕರಣ ಹಾಗೂ ರಕ್ಷಣೆ ಒಪ್ಪಂದ)- 2020 ಸುಗ್ರಿವಾಜ್ಞೆ ಹಾಗೂ ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) -2020 ಸುಗ್ರಿವಾಜ್ಞೆಗಳನ್ನು ಅಂಗೀಕರಿಸಲಾಗಿದೆ ಎಂದು ದೂರಿದರು.

ರಾಜ್ಯ ಸರ್ಕಾರವೂ ಕೇಂದ್ರದ ಹಾದಿಯಲ್ಲೇ ಸಾಗಿದೆ. ಸುಗ್ರಿವಾಜ್ಞೆ ಬದ್ಧಗೊಳಿಸಲು ವಿಧಾನಸಭೆಯಲ್ಲಿ ಮಸೂದೆ ಮಂಡಿಸಿದೆ. ರೈತ ವಿರೋಧಿಯಾಗಿ ನಡೆದುಕೊಂಡಿದೆ ಎಂದು ಆಪಾದಿಸಿದರು.

ಗ್ರಾಹಕರ ಹಿತರಕ್ಷಣಾ ಕಾಯ್ದೆ ತಿದ್ದುಪಡಿ, ಬೆಳೆ ಭರವಸೆ ಮತ್ತು ಕೃಷಿ ಸೇವೆಗಳ ರೈತರ (ಸಶಕ್ತೀಕರಣ ಹಾಗೂ ರಕ್ಷಣೆ ಒಪ್ಪಂದ)- 2020 ಸುಗ್ರಿವಾಜ್ಞೆ ಹಾಗೂ ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) -2020 ಸುಗ್ರಿವಾಜ್ಞೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಅಖಿಲ ಭಾರತ ಕಿಸಾನ್ ಸಭಾ ರಾಜ್ಯ ಘಟಕದ ಉಪಾಧ್ಯಕ್ಷ ಬಾಬುರಾವ್ ಹೊನ್ನಾ, ಜಿಲ್ಲಾ ಸಂಚಾಲಕ ನಜೀರ್ ಅಹಮ್ಮದ್, ಕರ್ನಾಟಕ ರಾಜ್ಯ ರೈತ ಸಂಘ(ಪುಟ್ಟಣಯ್ಯ ಬಣ)ದ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ, ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಮಾರುತಿ ಬೌದ್ಧೆ, ಪ್ರಕಾಶ ಸುಕಾಳೆ, ಮಾಣಿಕ ಖಾನಾಪುರಕರ್, ಎಂ.ಡಿ. ಶಫಾಯತ್ ಅಲಿ, ಖಮರ್ ಪಟೇಲ್, ಬಾಬು ಪಾಸ್ವಾನ್, ವಿನೋದ ರತ್ನಾಕರ್, ಶಿವರಾಜ ಕಟಗಿ, ಸಾಯಿ ಸಿಂಧೆ, ಸುಬ್ಬಣ್ಣ ಕರಕನಳ್ಳಿ, ಪ್ರಭು ತಗಣಿಕರ್, ಅಲಿ ಅಹಮ್ಮದ್ ಖಾನ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.