ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ವೈದ್ಯರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ವಿವಿಧ ಸಂಘಟನೆಗಳ ಪ್ರತಿಭಟನೆ

ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರಿ ವೈದ್ಯರ ಸೇವೆ ಆರೋಪ
Last Updated 4 ಸೆಪ್ಟೆಂಬರ್ 2020, 15:29 IST
ಅಕ್ಷರ ಗಾತ್ರ

ಬೀದರ್: ಸೇವೆಗೆ ಹಾಜರಿ ಹಾಕಿ ಖಾಸಗಿ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳದ ಡಿಎಚ್‍ಒ, ಜಿಲ್ಲಾ ಶಸ್ತ್ರಚಿಕಿತ್ಸಕ, ಜಿಲ್ಲಾ ವೈದ್ಯಕೀಯ ಅಧೀಕ್ಷಕ ಹಾಗೂ ಬ್ರಿಮ್ಸ್ ನಿರ್ದೇಶಕರನ್ನು ಬೇರೆ ಜಿಲ್ಲೆಗೆ ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿ ವಿವಿಧ ಸಂಘಟನೆಗಳು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದವು.

ಕರ್ನಾಟಕ ಪ್ರಜಾಶಕ್ತಿ ಸಮಿತಿ, ವೀರ ಕನ್ನಡಿಗರ ಸೇನೆ, ವಿಶ್ವ ಕನ್ನಡಿಗರ ಸಂಸ್ಥೆ ಕರ್ನಾಟಕ, ಕಲ್ಯಾಣ ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಹಾ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ, ಬಹುಜನ ಜಾಗೃತಿ ವೇದಿಕೆ ಪದಾಧಿಕಾರಿಗಳು ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ಜನರಿಗೆ ಸರ್ಕಾರದ ವಿವಿಧ ಆರೋಗ್ಯ ಸೇವೆ ಒದಗಿಸುವಲ್ಲಿ ಹಾಗೂ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ವಿಫಲರಾಗಿದ್ದಾರೆ. ಜನರ ಕರೆಗಳನ್ನು ಸ್ವೀಕರಿಸುತ್ತಿಲ್ಲ ಎಂದು ಆರೋಪಿಸಿದರು.
ಸರ್ಕಾರಿ ವೈದ್ಯರು ಹಾಗೂ ಸಿಬ್ಬಂದಿ ತಮ್ಮ ಸೇವೆಯನ್ನು ಹಾಜರಾತಿಗೆ ಸೀಮಿತಗೊಳಿಸಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಅದಾಗಿಯೂ ಅವರ ವಿರುದ್ಧ ಕ್ರಮ ಜರುಗಿಸುತ್ತಿಲ್ಲ ಎಂದು ಆಪಾದಿಸಿದರು.

ಜಿಲ್ಲಾ ಆಸ್ಪತ್ರೆಯ ತುರ್ತು ಹೆರಿಗೆ ಘಟಕದಲ್ಲಿ ಕಡ್ಡಾಯವಾಗಿ ತಜ್ಞ ವೈದ್ಯರನ್ನು ನಿಯೋಜಿಸಬೇಕು. ರೋಗಿಗಳಿಗೆ ಆಸ್ಪತ್ರೆಗಳಲ್ಲೇ ಅಗತ್ಯ ಔಷಧ ದೊರೆಯುವಂತೆ ಮಾಡಬೇಕು. ಕೊರೊನಾ ಚಿಕಿತ್ಸೆಗೆ ಸಕಲ ಸೌಕರ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ಪ್ರಜಾಶಕ್ತಿ ಸಮಿತಿಯ ವಿಭಾಗೀಯ ಅಧ್ಯಕ್ಷ ಪ್ರೇಮಕುಮಾರ ಕಾಂಬಳೆ, ಜಿಲ್ಲಾ ಘಟಕದ ಅಧ್ಯಕ್ಷ ಸಾಯಿ ಸಿಂಧೆ, ವಿಶ್ವ ಕನ್ನಡಿಗರ ಸಂಸ್ಥೆ ಕರ್ನಾಟಕದ ರಾಜ್ಯ ಅಧ್ಯಕ್ಷ ಸುಬ್ಬಣ್ಣ ಕರಕನಳ್ಳಿ, ಕರ್ನಾಟಕ ಕೂಲಿ ಕಾರ್ಮಿಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಪಾಸ್ವಾನ್, ಬಹುಜನ ಜಾಗೃತಿ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಮೋಳಕೆರೆ, ಕಲ್ಯಾಣ ಕರ್ನಾಟಕ ಕಟ್ಟಡ ಇತರೆ ನಿರ್ಮಾಣ ಮಹಾ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸೂರ್ಯಕಾಂತ ಸಾಧುರೆ, ಅವಿನಾಶರಾಯ್, ಮಹೇಂದ್ರಕುಮಾರ ಹೊಸಮನಿ, ಪುಟ್ಟರಾಜ ದೀನೆ, ಗೌತಮ ಮುತ್ತಂಗಿಕರ್, ನಿತೀಶ್ ಸಕ್ಲಾಲ್, ಪುಟ್ಟರಾಜ ಮೇತ್ರೆ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT