ಬೀದರ್: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ–ಜೆಡಿಎಸ್‌ನವರು ಸಂಚು ನಡೆಸುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಹಾಗೂ ಜಿಲ್ಲಾ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಸಮೀಪ ಗುರುವಾರ ಮೌನ ಪ್ರತಿಭಟನೆ ನಡೆಸಿದರು.
ಬಾಯಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಕೆಲಕಾಲ ಪ್ರತಿಭಟನೆ ನಡೆಸಿದರು. ಆನಂತರ ಸಿದ್ದರಾಮಯ್ಯನವರ ಪರ ಘೋಷಣೆಗಳನ್ನು ಕೂಗಿದರು. ಅಹಿಂದ ನಾಯಕ ಸಿದ್ದರಾಮಯ್ಯ ಅವರು ಎರಡನೇ ಸಲ ಈ ರಾಜ್ಯದ ಮುಖ್ಯಮಂತ್ರಿಯಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಇದನ್ನು ಸಹಿಸದ ಬಿಜೆಪಿ–ಜೆಡಿಎಸ್ ಪಕ್ಷಗಳ ಮುಖಂಡರು ಕೇಂದ್ರದ ಕುಮ್ಮಕ್ಕಿನಿಂದ ಅವರ ತೇಜೋವಧೆಗೆ ಮುಂದಾಗಿವೆ. ಮುಡಾ ಪ್ರಕರಣದಲ್ಲಿ ಅವರ ಹೆಸರು ಸಿಲುಕಿಸಿ ಅವರಿಗೆ ಕೆಟ್ಟ ಹೆಸರು ತರಲು ಪ್ರಯತ್ನಿಸಿವೆ ಎಂದು ಆರೋಪಿಸಿದರು.
ಕೇಂದ್ರದ ಒತ್ತಡಕ್ಕೆ ಒಳಗಾಗಿ ರಾಜ್ಯಪಾಲರು ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ. ನ್ಯಾಯಾಲಯ ಸಿ.ಎಂ ಅರ್ಜಿ ತಿರಸ್ಕರಿಸಿದೆ. ಆದರೆ, ಮೇಲ್ಮನವಿ ಸಲ್ಲಿಕೆಗೆ ಅವಕಾಶ ಇದೆ. ಯಾವುದೇ ಕಾರಣಕ್ಕೂ ಸಿದ್ದರಾಮಯ್ಯನವರು ಎದೆಗುಂದಬಾರದು. ಅನೇಕ ದೆಹಲಿ, ಜಾರ್ಖಂಡ್ ಸೇರಿದಂತೆ ಇತರೆ ರಾಜ್ಯಗಳಲ್ಲೂ ಕಾಂಗ್ರೆಸ್ಸೇತರ ಮುಖ್ಯಮಂತ್ರಿಗಳ ವಿರುದ್ಧ ಕೇಂದ್ರದ ಬಿಜೆಪಿ ಸಂಚು ನಡೆಸಿ ಅಧಿಕಾರದಿಂದ ಕೆಳಗಿಳಿಸುವ ಪ್ರಯತ್ನ ನಡೆಸಿದೆ. ಇದು ಹೊಸತೇನೂ ಇಲ್ಲ. ಇಡೀ ಅಹಿಂದ ಸಿದ್ದರಾಮಯ್ಯನವರ ಬೆಂಬಲಕ್ಕಿದೆ ಎಂದರು.
ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಅಮೃತರಾವ್ ಚಿಮಕೋಡೆ, ನಗರಸಭೆ ಅಧ್ಯಕ್ಷ ಮುಹಮ್ಮದ್ ಗೌಸ್, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ ದೊಡ್ಡಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಂಕರ್ ದೊಡ್ಡಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪರವೇಜ್ ಕಮಲ್, ಬೀದರ್ ತಾಲ್ಲೂಕು ಅಧ್ಯಕ್ಷ ಚಂದ್ರಕಾಂತ ಹಿಪ್ಪಳಗಾಂವ್, ಮುಖಂಡರಾದ ಅನೀಲಕುಮಾರ ಬೆಲ್ದಾರ್, ಧನರಾಜ ಹಂಗರಗಿ, ರಮೇಶ ಡಾಕುಳಗಿ, ಕರೀಂ ಸಾಬ್, ಎಂ.ಎ. ಸಮಿ, ಮುಹಮ್ಮದ್ ರಿಯಾಜ್, ರವೀಂದ್ರ, ರಾಕೇಶ್, ಇರ್ಷಾದ್ ಪೈಲವಾನ್, ಅಮರ ಸಾಗರ್, ನರಸಪ್ಪ ಯಾಕತಪೂರ, ತುಕಾರಾಮ, ಪೂಜಾ ಜಾರ್ಜ್, ಸಂಗೀತಾ ಕಾರಬರಿ, ತೇಜಮ್ಮ, ಲಕ್ಷ್ಮಿ ಮತ್ತಿತರರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.