ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೀದರ್‌ | ಜನನಿಬಿಡ ಸ್ಥಳಗಳಲ್ಲಿ ಕುಡಿವ ನೀರಿಡಿ: ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ

ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಸೂಚನೆ
Published 6 ಏಪ್ರಿಲ್ 2024, 16:29 IST
Last Updated 6 ಏಪ್ರಿಲ್ 2024, 16:29 IST
ಅಕ್ಷರ ಗಾತ್ರ

ಬೀದರ್‌: ‘ದಿನೇ ದಿನೇ ಬಿಸಿಲು ಹೆಚ್ಚಾಗುತ್ತಿದ್ದು, ಜನನಿಬಿಡ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ತಿಳಿಸಿದರು.

ಬಿಸಿಲಿಗೆ ಸಂಬಂಧಿಸಿದಂತೆ ನಗರದಲ್ಲಿ ನಡೆದ ಅಧಿಕಾರಿಗಳ ವಿಡಿಯೊ ಕಾನ್ಫರೆನ್ಸ್‌ ಸಭೆಯಲ್ಲಿ ಮಾತನಾಡಿದ ಅವರು, ಮಾರುಕಟ್ಟೆ, ಬಸ್ ನಿಲ್ದಾಣ, ರೈಲು ನಿಲ್ದಾಣದಂತಹ ಸಾರ್ವಜನಿಕ ಸ್ಥಳಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳು ಕುಡಿಯುವ ನೀರು ಹಾಗೂ ನೆರಳಿನ ವ್ಯವಸ್ಥೆ ಮಾಡಬೇಕು. ಧಾರ್ಮಿಕ ಸ್ಥಳಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಸಂಬಂಧಿಸಿದ ಆಯಾ ದೇವಾಲಯಗಳ ಮುಖ್ಯಸ್ಥರಿಗೆ ತಿಳಿಸಬೇಕು ಎಂದು ಸೂಚಿಸಿದರು.

ಕಟ್ಟಡ ಕಾರ್ಮಿಕರು ಬಿಸಿಲಿನಲ್ಲಿ ಕೆಲಸ ಮಾಡಬಾರದು. ಬೆಳಿಗ್ಗೆ 11 ರಿಂದ ಸಂಜೆ 4ರ ವರೆಗೆ ಹೊರಗೆ ಕೆಲಸ ಮಾಡುವಂತಿಲ್ಲ. ಈ ಕುರಿತು ಕಾರ್ಮಿಕ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಬೇಕೆಂದು ನಿರ್ದೇಶನ ನೀಡಿದರು.

ಕಳೆದ ವರ್ಷ 38ರಿಂದ 39 ಡಿಗ್ರಿ ಸೆಲ್ಸಿಯಸ್‌ ವರೆಗೆ ತಾಪಮಾನ ದಾಖಲಾಗಿತ್ತು. ಈ ವರ್ಷ  ಸೆಪ್ಟೆಂಬರ್‌ನಲ್ಲಿ ಮಳೆಯಾಗದ ಕಾರಣ ತಾಪಮಾನ ಹೆಚ್ಚಾಗಿದೆ. ಟೀ, ಕಾಫಿ ಹಾಗೂ ಮದ್ಯಪಾನದಿಂದ ಜನ ದೂರ ಇರಬೇಕು. ಸಾಕು ಪ್ರಾಣಿಗಳಿಗೆ ಸಾಕಷ್ಟು ನೀರು ಕೊಡಬೇಕು. ಸುಸ್ತು, ವಾಂತಿ, ಬೆವರು ಇತರೆ ಯಾವುದೇ ಲಕ್ಷಣ ಕಂಡು ಬಂದರೆ ವೈದ್ಯರನ್ನು ಸಂಪರ್ಕಿಸಬೇಕು ಎಂದು ಹೇಳಿದರು.

ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಒ.ಆರ್.ಎಸ್ ಪ್ಯಾಕೆಟ್‌ಗಳನ್ನು ಹೆಚ್ಚಾಗಿ ಇಡಬೇಕು. ವೈದ್ಯರು ತಮ್ಮ ಕೆಲಸದ ಸಮಯದಲ್ಲಿ ಆಸ್ಪತ್ರೆಯಲ್ಲಿರಬೇಕು. ಜನರಿಗೆ ಯಾವುದೇ ತೊಂದರೆಯಾಗದಂತೆ ಸೇವೆ ನೀಡಬೇಕು. ಬಿಸಿಲಿನಲ್ಲಿ ಅಗ್ನಿ ಅವಘಡಗಳು ಸಂಭವಿಸುವ ಸಾಧ್ಯತೆ ಇರುತ್ತದೆ. ಅಗ್ನಿಶಾಮಕ ವಾಹನಗಳನ್ನು ಸಿದ್ಧವಾಗಿ ಇಟ್ಟುಕೊಳ್ಳಬೇಕು ಎಂದು ಅಗ್ನಿಶಾಮಕ ದಳದ ಅಧಿಕಾರಿಗಳಿಗೆ ಸೂಚಿಸಿದರು. 

ಜಿಲ್ಲೆಯಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಜಿಲ್ಲೆಯ ಜನರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಜಿಲ್ಲೆಯಲ್ಲಿ ಶುಕ್ರವಾರ 42 ಡಿಗ್ರಿ ಸೆಲ್ಸಿಯಸ್ ಅತಿ ಹೆಚ್ಚು ತಾಪಮಾನ ದಾಖಲಾಗಿದೆ. ಇದು ಹೀಗೆ ಇನ್ನೂ ಮುಂದುವರೆಯಲಿದ್ದು, ಜನರು ಬೆಳಿಗ್ಗೆ 11 ರಿಂದ ಸಂಜೆ 4ರ ವರೆಗೆ ಹೊರಗೆ ತಿರುಗಾಡಬಾರದು. ಹೊರಗೆ ಹೋದರೆ ತೆಳುವಾದ ಬಟ್ಟೆ ಹಾಗೂ ಚಪ್ಪಲಿಗಳನ್ನು ಹಾಕಿಕೊಂಡು ಹೋಗಬೇಕು. ತಂಪಾದ ಹಣ್ಣಿನ ರಸ, ಮಜ್ಜಿಗೆ ಹಾಗೂ ಎಳನೀರು ಹೆಚ್ಚಾಗಿ ಸೇವಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ ಮಾತನಾಡಿ, ಮೇ- ಜೂನ್ ವರೆಗೆ ಬಿಸಿಲು ಹೆಚ್ಚಾಗಿ ಇರುವುದರಿಂದ ಜನರು ಅನಗತ್ಯವಾಗಿ ಹೊರಗೆ ಓಡಾಡಬಾರದು. ಜನರು ಹೊಲಗಳಿಗೆ ಹೋಗುವಾಗ ನೀರನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗಬೇಕು. ಉತ್ತಮ ಗಾಳಿ, ಬೆಳಕು ಇರುವ ಮನೆಗಳಲ್ಲಿ ಇರಬೇಕು. ಆರೋಗ್ಯ ಇಲಾಖೆಯ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿ ಕಡ್ಡಾಯವಾಗಿ ತಮ್ಮ- ತಮ್ಮ ಆಸ್ಪತ್ರೆಗಳಲ್ಲಿ ಇದ್ದು, ಎಲ್ಲಾ ಔಷಧಿ ಇರುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಧ್ಯಾನೇಶ್ವರ ನೀರಗುಡಿ ಮಾತನಾಡಿ, ಎಲ್ಲಾ ಆಸ್ಪತ್ರೆಗಳಲ್ಲಿ ಒ.ಆರ್.ಎಸ್. ದಾಸ್ತಾನಿದೆ. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಇದಕ್ಕಾಗಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಡಿಹೈಡ್ರೇಶನ್‌ನಿಂದ ಬಳಲುತ್ತಿರುವ ಯಾವುದೇ ಒಂದು ಕೇಸ್ ದಾಖಲಾದರೂ ಆ ಮಾಹಿತಿಯನ್ನು ನಮ್ಮ ಗಮನಕ್ಕೆ ತರಬೇಕೆಂದು ತಾಲ್ಲೂಕು ಆರೋಗ್ಯ ಅಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ ಎಂದು ತಿಳಿಸಿದರು.

ಉಪವಿಭಾಗಾಧಿಕಾರಿ ಲವೀಶ್ ಒರ್ಡಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪ್ರಭಾಕರ್, ನಗರಸಭೆ ಪೌರಾಯುಕ್ತ ಶಿವರಾಜ ರಾಥೋಡ್‌, ಅಗ್ನಿಶಾಮಕ ದಳದ ಅಧಿಕಾರಿ ರವೀಂದ್ರ ಘಾಟಗೆ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕಿನ ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ನಗರಸಭೆ, ಪುರಸಭೆ ಅಧಿಕಾರಿಗಳು ಪಾಲ್ಗೊಂಡಿದ್ದರು.

ಮಧ್ಯಾಹ್ನ ಹೊರಗೆ ತಿರುಗಾಡದಿರಿ ಕಾರ್ಮಿಕರಿಂದ ಮಧ್ಯಾಹ್ನ ಕೆಲಸಬೇಡ ತೆಳುವಾದ ಬಟ್ಟೆ, ದ್ರವ ಪದಾರ್ಥ ಸೇವಿಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT