ಬೀದರ್: ಮಳೆಯಾಗದ ಕಾರಣ ರೈತರು ಆತಂಕದಲ್ಲಿ ಇದ್ದಾರೆ. ಕೃಷಿ ಅಧಿಕಾರಿಗಳು ಬಿತ್ತನೆ ಕುರಿತು ರೈತರಿಗೆ ಸರಿಯಾದ ಮಾಹಿತಿ ನೀಡಬೇಕು ಎಂದು ಬೀದರ್ ದಕ್ಷಿಣ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಸೂಚಿಸಿದರು.
ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರೈತರ ವ್ಯಾಟ್ಸ್ ಆ್ಯಪ್ ಗ್ರೂಪ್ ರಚಿಸಿ, ಯಾವಾಗ ಮಳೆಯಾಗಲಿದೆ, ಎಷ್ಟು ಪ್ರಮಾಣದ ಮಳೆಯಾಗಲಿದೆ ಎನ್ನುವ ಮಾಹಿತಿ ರವಾನಿಸಬೇಕು. ರೈತರಲ್ಲಿ ಧೈರ್ಯ ತುಂಬುವ ಕೆಲಸ ಮಾಡಬೇಕು. ಇನ್ನೂ ಬೀಜ ವಿತರಿಸದ ಗ್ರಾಮಗಳಲ್ಲಿ ಸಮರ್ಪಕ ಬೀಜ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಅರಣ್ಯ ಇಲಾಖೆ ಅಧಿಕಾರಿಗಳು ಪ್ರತಿ ಗ್ರಾಮದ ಶಾಲೆ ಹಾಗೂ ಇತರೆಡೆ ಸಸಿಗಳನ್ನು ನೆಡಬೇಕು. ಇದಕ್ಕೆ ಗ್ರಾಮ ಪಂಚಾಯಿತಿಯವರು ಸಹಕಾರ ನೀಡಬೇಕು ಎಂದು ತಿಳಿಸಿದರು.
ಶಿಕ್ಷಣ ಅಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡಿ, ಅಲ್ಲಿನ ಸ್ಥಿತಿಗತಿ ಪರಿಶೀಲಿಸಬೇಕು. ಹಲವು ಗ್ರಾಮಗಳ ಶಾಲೆಗಳಲ್ಲಿ ಮೂಲಸೌಕರ್ಯ ಬಳಕೆಯಾಗದ ಕಾರಣ ಮಕ್ಕಳು ಪರದಾಡಬೇಕಿದೆ. ಅಂತಹ ಶಾಲೆಗಳ ವ್ಯವಸ್ಥೆ ಸುಧಾರಿಸಬೇಕು. ಮಕ್ಕಳಿಗೆ ಗುಣಮಟ್ಟದ ಬಿಸಿಯೂಟ ಕೊಡಬೇಕು ಎಂದು ನಿರ್ದೇಶನ ನೀಡಿದರು.
ಗ್ರಾಮಗಳಲ್ಲಿ ಅನೇಕ ಶುದ್ಧ ಕುಡಿಯುವ ನೀರಿನ ಘಟಕಗಳು ನಿರುಪಯುಕ್ತವಾಗಿವೆ. ಹೀಗಾಗಿ ಅದರ ಲಾಭ ಜನರಿಗೆ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮ ಜರುಗಿಸಬೇಕು ಎಂದರು.
ಕಂದಾಯ ಇಲಾಖೆ ಅಧಿಕಾರಿಗಳು ಪಹಣಿ, ಹೋಲ್ಡಿಂಗ್, ಮಸಾಶನ ಮೊದಲಾದ ಕಾರ್ಯಗಳಲ್ಲಿ ವಿಳಂಬ ಆಗದಂತೆ ನೋಡಿಕೊಳ್ಳಬೇಕು. ಅಧಿಕಾರಿಗಳಿಗೆ ಸರ್ಕಾರ ಸಂಬಳ ಕೊಡುತ್ತಿರುವುದು ಜನರ ಸೇವೆಗಾಗಿ. ಹೀಗಾಗಿ ಜನ ಸೇವೆ ಪ್ರಾಮಾಣಿಕವಾಗಿ ಮಾಡಬೇಕು. ಅಭಿವೃದ್ಧಿ ವಿಷಯದಲ್ಲಿ ನಿರ್ಲಕ್ಷ್ಯ ತೋರುವುದನ್ನು ಸಹಿಸಲಾಗದು ಎಂದು ಎಚ್ಚರಿಕೆ ನೀಡಿದರು.
ಬೀದರ್ ಉಪ ವಿಭಾಗಾಧಿಕಾರಿ ಲವಿಶ್ ಓರ್ಡಿಯಾ, ತಹಶೀಲ್ದಾರ್ ದಿಲ್‍ಶಾದ್ ಮಹತ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಾಣಿಕರಾವ್ ಪಾಟೀಲ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.