ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಣಮಟ್ಟದ ಆಹಾರ ಧಾನ್ಯ ಪೂರೈಸಿ: ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಚಿದ್ರಿ

ಕೆಡಿಪಿ ಮಾಸಿಕ ಸಭೆಯಲ್ಲಿ ಸೂಚನೆ
Last Updated 13 ಜುಲೈ 2020, 15:39 IST
ಅಕ್ಷರ ಗಾತ್ರ

ಬೀದರ್: ಪಡಿತರ ವ್ಯವಸ್ಥೆ, ಅಂಗನವಾಡಿ, ವಸತಿ ನಿಲಯಗಳಿಗೆ ಗುಣಮಟ್ಟದ ಆಹಾರ ಧಾನ್ಯಗಳ ಪೂರೈಕೆಗೆ ಒತ್ತು ಕೊಡಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಚಿದ್ರಿ ಹೇಳಿದರು.

ಇಲ್ಲಿಯ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದಿಂದ ನೀಡಲಾಗುವ ಆಹಾರಧಾನ್ಯಗಳು ಕಾಳಸಂತೆಯಲ್ಲಿ ಮಾರಾಟವಾಗದಂತೆ ನೋಡಿಕೊಳ್ಳಬೇಕು ಎಂದು ಎಚ್ಚರಿಕೆ ನೀಡಿದರು.

ನ್ಯಾಯಬೆಲೆ ಅಂಗಡಿಗಳಿಗೆ ಆಹಾರ ಧಾನ್ಯಗಳ ಸಮರ್ಪಕ ವಿತರಣೆ ಹಾಗೂ ಗೋದಾಮುಗಳಲ್ಲಿ ಆಹಾರ ಧಾನ್ಯಗಳ ಸಂರಕ್ಷಣೆಗೆ ಕ್ರಮ ಕೈಗೊಳ್ಳಲಾಗಿದೆ. ಪಡಿತರ ಅಕ್ರಮ ಸಾಗಣೆಗೆ ಸಂಬಂಧಿಸಿದಂತೆ ಈಗಾಗಲೇ 35 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಇಲಾಖೆ ಅಧಿಕಾರಿ ಪ್ರತಿಕ್ರಿಯಿಸಿದರು.

ಕೋವಿಡ್ 19 ಸೋಂಕಿನ ಪ್ರಯುಕ್ತ ಕಳೆದ ಮಾರ್ಚ್ 24 ರಿಂದ ವಸತಿ ನಿಲಯಗಳನ್ನು ಬಂದ್ ಮಾಡಲಾಗಿದೆ. ಹಾಸ್ಟೆಲ್‌ಗಳ ದುರಸ್ತಿ ಕಾರ್ಯ ನಡೆಯುತ್ತಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಇನ್ನು ಮುಂದೆ ಹಾಸ್ಟೆಲ್ ದುರಸ್ತಿ ಕಾರ್ಯವನ್ನು ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ ಬದಲಿಗೆ ಕೆಆರ್‌ ಐಡಿಎಲ್‌ಗೆ ವಹಿಸಬೇಕು ಎಂದು ಗೀತಾ ಚಿದ್ರಿ ನಿಲಯದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ರೇಷ್ಮೆ ಬೆಳೆಗಾರರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಅವರಿಗೆ ಸರ್ಕಾರ ಪ್ರೋತ್ಸಾಹ ಧನ ನೀಡುತ್ತಿದೆ. ಇದು ಜಿಲ್ಲೆಯಲ್ಲಿನ ಎಲ್ಲ ಫಲಾನುಭವಿಗಳಿಗೆ ಸರಿಯಾಗಿ ತಲುಪಬೇಕು. ಹುಳು ಸಾಕಾಣಿಕೆ ಮನೆಗೆ ಸಹಾಯಧನ ನೀಡುವುದು ಸೇರಿದಂತೆ ಎಲ್ಲ ಅನುದಾನ ಸರಿಯಾದ ಸಮಯಕ್ಕೆ ಸಿಗುವಂತೆ ನೋಡಿಕೊಳ್ಳಬೇಕು ಎಂದು ರೇಷ್ಮೆ ಇಲಾಖೆ ಅಧಿಕಾರಿಗೆ ನಿರ್ದೇಶನ ನೀಡಿದರು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಲಕ್ಷ್ಮಣರಾವ್ ಬುಳ್ಳಾ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT