ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಿ

ಜಿಲ್ಲಾಧಿಕಾರಿ ಎಚ್‌.ಆರ್.ಮಹಾದೇವ ಸೂಚನೆ
Last Updated 19 ಜನವರಿ 2019, 13:02 IST
ಅಕ್ಷರ ಗಾತ್ರ

ಬೀದರ್‌: ‘ಫೆಬ್ರುವರಿ 3ರಿಂದ ಜಿಲ್ಲೆಯಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನ ನಡೆಯಲಿದೆ.
ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ಪೋಲಿಯೊ ಲಸಿಕೆ ಹಾಕಿಸಲು ಕ್ರಮಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಡಾ.ಎಚ್.ಆರ್. ಮಹಾದೇವ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ನಗರದಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನ, ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನದ ಪೂರ್ವಭಾವಿ ಸಭೆ ಹಾಗೂ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಅಭಿಯಾನದ ಮೊದಲ ದಿನವೇ ನಿಗದಿತ ಗುರಿ ಪೂರ್ಣಗೊಳಿಸಲು ಯತ್ನಿಸಬೇಕು. ಮುಂಚಿತವಾಗಿ ಸಿಬ್ಬಂದಿ ನಿಯೋಜನೆ ಸೇರಿದಂತೆ ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು. ಜಿಲ್ಲೆಯ ಯಾವೊಂದು ಮಗುವೂ ಲಸಿಕೆಯಿಂದ ವಂಚಿತಗೊಳ್ಳಬಾರದು’ ಎಂದು ಹೇಳಿದರು.

‘ನಗರ ಪ್ರದೇಶದ 69,470, ಗ್ರಾಮೀಣ ಭಾಗದ 2,54,822 ಸೇರಿದಂತೆ ಒಟ್ಟು 3,24,292 ಮಕ್ಕಳಿಗೆ ಪೋಲಿಯೊ ಲಸಿಕೆ ನೀಡುವ ಗುರಿಯಿದೆ. ಜಿಲ್ಲೆಯಾದ್ಯಂತ ಒಟ್ಟು 1003 ಬೂತ್‌ಗಳನ್ನು ಹಾಗೂ 1,478 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ’ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಜಂತು ಹುಳು ರೋಗ ನಿವಾರಣೆಗೆ ಯತ್ನಿಸಿ: ‘ರಾಷ್ಟ್ರೀಯ ಜಂತು ಹುಳು ನಿವಾರಣೆಯ ಅಂಗವಾಗಿ ಜಿಲ್ಲೆಯಲ್ಲಿರುವ 1ರಿಂದ 19 ವರ್ಷದ ಎಲ್ಲ ಮಕ್ಕಳಿಗೆ ಜಂತು ಹುಳು ನಿವಾರಣೆ ಮಾತ್ರೆಗಳನ್ನು ನೀಡಬೇಕು. ಇದಕ್ಕಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೆರವು ಪಡೆದು ನಿಗದಿತ ಗುರಿಯನ್ನು ಸಾಧಿಸಬೇಕು’ ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಎ.ಜಬ್ಬಾರ್, ಲಸಿಕಾ ಕಾರ್ಯಕ್ರಮದ ಕಲಬುರಗಿ ವಲಯ ಅಧಿಕಾರಿ ಡಾ.ಅನಿಲ ತಾಳಿಕೋಟಿ, ಆರ್‌ಎಸ್ ಹೆಚ್ ಅಧಿಕಾರಿ ಡಾ.ರವಿ ಸಿರ್ಸೆ, ಜಿಲ್ಲಾ ಕುಷ್ಠರೋಗ ನಿಯಂತ್ರಣ ಅಧಿಕಾರಿ ಡಾ.ರಾಜಶೇಖರ ಪಾಟೀಲ, ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ.ಅನಿಲ ಚಿಂತಾಮಣಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಇಂದುಮತಿ ಪಾಟೀಲ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕೃಷ್ಣಾ ರೆಡ್ಡಿ, ಸುಭಾಷ ಮುಧಾಳೆ ಹಾಗೂ ತಾಲ್ಲೂಕು ಆರೋಗ್ಯ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT