ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆ ಹಾನಿ: ಸಮಗ್ರ ಸಮೀಕ್ಷೆಗೆ ಸೂಚನೆ

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಹೇಳಿಕೆ
Last Updated 17 ಸೆಪ್ಟೆಂಬರ್ 2020, 15:54 IST
ಅಕ್ಷರ ಗಾತ್ರ

ಬೀದರ್: ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಬೆಳೆ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಕುರಿತು ಸಮೀಕ್ಷೆ ನಡೆಸಲು ಎಲ್ಲ ತಹಶೀಲ್ದಾರರಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಹೇಳಿದರು.

ಇಲ್ಲಿಯ ಪೊಲೀಸ್ ಪರೇಡ್‌ ಮೈದಾನದಲ್ಲಿ ಗುರುವಾರ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಹೆಚ್ಚುವರಿ ಮಳೆಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ಒದಗಿಸಲು ಎನ್‍ಡಿಆರ್‍ಎಫ್/ ಎಸ್‍ಡಿಆರ್‍ಎಫ್ ಮಾರ್ಗಸೂಚಿ ಅನ್ವಯ ಜಂಟಿ ಸಮೀಕ್ಷೆ ಕೈಗೊಂಡು ವಾರದೊಳಗೆ ವರದಿ ಸಲ್ಲಿಸುವಂತೆ ಕೃಷಿ, ತೋಟಗಾರಿಕೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

2020-21ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿರುವ ಕಾರಣ ಜಿಲ್ಲೆಯ ಐದು ತಾಲ್ಲೂಕುಗಳನ್ನು ಅತಿವೃಷ್ಟಿ/ಪ್ರವಾಹ ಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದೆ ಎಂದು ತಿಳಿಸಿದರು.

2020ರ ಜನವರಿ 1 ರಿಂದ ಸೆಪ್ಟೆಂಬರ್ 16 ರ ವರೆಗೆ 644 ಮಿ.ಮೀ. ವಾಡಿಕೆ ಮಳೆಯಾಗಬೇಕಿತ್ತು. ಆದರೆ, ಶೇ 19 ರಷ್ಟು ಅಧಿಕ ಅಂದರೆ 765 ಮಿ.ಮೀ. ಮಳೆಯಾಗಿದೆ ಎಂದು ಹೇಳಿದರು.

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ನೋಂದಣಿಯಲ್ಲಿ ಬೀದರ್ ರಾಜ್ಯದಲ್ಲೇ ಅಗ್ರಸ್ಥಾನದಲ್ಲಿದೆ. ಆಗಸ್ಟ್‌ವರೆಗೆ ಜಿಲ್ಲೆಯ 2,12,530 ರೈತರು ಬೆಳೆ ವಿಮೆ ಮಾಡಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಕೋವಿಡ್–19 ಸೋಂಕು ನಿರ್ವಹಣಾ ಕಾರ್ಯ ತೃಪ್ತಿಕರವಾಗಿ ನಡೆದಿದೆ. ಬ್ರಿಮ್ಸ್ ಹಳೆಯ ಬೋಧಕ ಆಸ್ಪತ್ರೆ ಕಟ್ಟಡವನ್ನು ಕೋವಿಡ್ ಆಸ್ಪತ್ರೆಯಾಗಿ ಪರಿವರ್ತಿಸಿ, ಅಗತ್ಯ ವೆಂಟಿಲೇಟರ್, ಹೈಫ್ಲೋ ಆಕ್ಸಿಜೆನ್ ಮಷೀನ್‌ಳನ್ನು ಅಳವಡಿಸಿ, ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲಾ ಆಡಳಿತ ವತಿಯಿಂದ ಖಾಸಗಿ ಶಿಕ್ಷಣ ಸಂಸ್ಥೆಗಳ ಸಹಯೋಗದೊಂದಿಗೆ 665 ವಿದ್ಯಾರ್ಥಿಗಳಿಗೆ ಖಾಸಗಿ ಕಾಲೇಜುಗಳಲ್ಲಿ ಪಿಯುಸಿ ಪ್ರಥಮ ವರ್ಷಕ್ಕೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಜಿಲ್ಲೆಯ ವಿದ್ಯಾರ್ಥಿಗಳನ್ನು ನಾಗರಿಕ ಸೇವಾ ಪರೀಕ್ಷೆಗಳಿಗೆ ಅಣಿಗೊಳಿಸುವ ದಿಸೆಯಲ್ಲಿ ಸೆ.26 ರಂದು ನಾಗರಿಕ ಸೇವಾ ಪರೀಕ್ಷೆ ಅರಿವು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಪಂಡಿತರಾವ್ ಚಿದ್ರಿ, ಶಾಸಕರಾದ ರಹೀಂಖಾನ್‌, ಬಂಡೆಪ್ಪ ಖಾಶೆಂಪೂರ, ವಿಧಾನ ಪರಿಷತ್ ಸದಸ್ಯರಾದ ವಿಜಯಸಿಂಗ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಲಕ್ಷ್ಮಣ ಬುಳ್ಳಾ, ಬೀದರ್‌ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ವಿಜಯಕುಮಾರ ರಾಮಲು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್., ಜಿಲ್ಲಾ ಪಂಚಾಯಿತಿ ಸಿಇಒ ಗ್ಯಾನೇಂದ್ರಕುಮಾರ ಗಂಗವಾರ್, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಬೀದರ್‌ ಉಪ ವಿಭಾಗಾಧಿಕಾರಿ ಇದ್ದರು. ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಚಾರ್ಯ ಚನ್ನಬಸವ ಹೇಡೆ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT