ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರಿಗಳ ಕಾರ್ಯವೈಖರಿಗೆ ಸುಬೋಧ್‌ ಅಸಮಾಧಾನ

ಎಚ್‌ಕೆಆರ್‌ಡಿಬಿ ಕಾಮಗಾರಿಗಳ ಪ್ರಗತಿ ಪರಿಶೀಲನೆ
Last Updated 20 ಆಗಸ್ಟ್ 2019, 15:46 IST
ಅಕ್ಷರ ಗಾತ್ರ

ಬೀದರ್: ‘ಜಿಲ್ಲೆಯ ಅಧಿಕಾರಿಗಳು ಸರ್ಕಾರದ ಸುತ್ತೋಲೆಯನ್ನು ಸರಿಯಾಗಿ ಓದಿಕೊಂಡು ಕಾಮಗಾರಿಗಳನ್ನು ಕೈಗೊಳ್ಳುತ್ತಿಲ್ಲ. ಇದೇ ಕಾರಣಕ್ಕೆ ಅನೇಕ ಅಭಿವೃದ್ಧಿ ಕಾಮಗಾರಿಗಳು ವಿಳಂಬವಾಗುತ್ತಿವೆ’ ಎಂದು ಹೈದರಾಬಾದ್‌ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಸುಬೋಧ್‌ ಯಾದವ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹೈದರಾಬಾದ್‌ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮೈಕ್ರೊ ಹಾಗೂ ಮ್ಯಾಕ್ರೊ ಯೋಜನೆಯಡಿಯಲ್ಲಿ ನಿಗದಿಪಡಿಸಿದ ಅನುದಾನ ಅಡಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು

‘ನಿವೇಶನ ಲಭ್ಯವಿರುವ ಕಡೆ ಮೊದಲು ಕಟ್ಟಡ ಕಾಮಗಾರಿ ಆರಂಭಿಸುವಂತೆ ಸೂಚಿಸಲಾಗಿದೆ. ಆದರೆ, ಕೆಲವರು ನಿವೇಶನ ಸಿಕ್ಕಿಲ್ಲ, ಏಜೆನ್ಸಿ ಬದಲಾವಣೆಯಾಗಬೇಕಿದೆ, ಟೆಂಡರ್ ಕರೆಯಬೇಕಿದೆ ಎನ್ನುವ ನೆಪಗಳನ್ನೇ ನೀಡುತ್ತಿದ್ದಾರೆ. ಅಧಿಕಾರಿಗಳ ಕಾರ್ಯವೈಖರಿಯಿಂದ ಕಾಮಗಾರಿಗಳು ವಿಳಂಬವಾಗುತ್ತಿವೆ’ ಎಂದು ಹೇಳಿದರು.

‘ಹೈದರಾಬಾದ್ ಕರ್ನಾಟಕ ಪ್ರದೇಶವು ಸಾಕಷ್ಟು ಹಿಂದುಳಿದಿದೆ. ಈ ಭಾಗದ ಅಭಿವೃದ್ಧಿಗೆ ಕಾಳಜಿ ವಹಿಸಬೇಕು. ಕ್ಷುಲ್ಲಕ ಕಾರಣಗಳಿಗೆ ಕಾಮಗಾರಿಗಳು ವಿಳಂಬವಾಗಬಾರದು’ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

‘₹ 491 ಲಕ್ಷ ವೆಚ್ಚದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಕಟ್ಟಡ ಕಾಮಗಾರಿಗೆ 2018ರ ಆಗಸ್ಟ್‌ನಲ್ಲಿ ಆದೇಶ ನೀಡಲಾಗಿದೆ. ಭಾಲ್ಕಿಯ ವಾಚನಾಲಯ, ಔರಾದ್ ಸರ್ಕಾರಿ ಐಟಿಐ ಕಟ್ಟಡ ಪೂರ್ಣಗೊಂಡಿಲ್ಲ. ಜನವಾಡದಿಂದ ಅಲಿಯಂಬರ್ ವರೆಗಿನ ರಸ್ತೆ ಕಾಮಗಾರಿ ಅಪೂರ್ಣವಾಗಿದೆ. ಇದು ಸರಿಯಲ್ಲ’ ಎಂದು ಹೇಳಿದರು.

‘ಗುತ್ತಿಗೆದಾರರು ವಿಳಂಬ ಮಾಡಿದರೆ ತಕ್ಷಣ ವರದಿ ಸಲ್ಲಿಸಬೇಕು. ಮಂಡಳಿ ಕ್ರಮ ಕೈಗೊಳ್ಳಲು ಅನುಕೂಲವಾಗಲಿದೆ’ ಎಂದು ತಿಳಿಸಿದರು.

ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ಯ ಎಂಜಿನಿಯರಿಂಗ್ ವಿಭಾಗ, ಕೆಆರ್‍ಐಡಿಎಲ್, ನಿರ್ಮಿತಿ ಕೇಂದ್ರ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಗ್ರಂಥಾಲಯ, ಜಿಲ್ಲಾಧಿಕಾರಿ ಕಚೇರಿ, ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಿಂದ ನಡೆಯುತ್ತಿರುವ ಮಂಡಳಿಯ ಅನುದಾನದ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.

ಜಿಲ್ಲಾಧಿಕಾರಿ ಎಚ್.ಆರ್.ಮಹಾದೇವ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT