ಶನಿವಾರ, ಸೆಪ್ಟೆಂಬರ್ 26, 2020
26 °C
ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಸಲಹೆ

ಬೀದರ್: ರಸ್ತೆ ಅಪಘಾತ ಪ್ರಕರಣ ತಗ್ಗಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಜಿಲ್ಲೆಯಲ್ಲಿ ರಸ್ತೆ ಅಪಘಾತ ಪ್ರಕರಣಗಳನ್ನು ತಗ್ಗಿಸಲು ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತಪಡುತ್ತಿರುವವರಿಗಿಂತ ಅಪಘಾತಗಳಲ್ಲಿ ಸಾವಿಗೀಡಾಗುತ್ತಿರುವವರ ಸಂಖ್ಯೆ ಹೆಚ್ಚಿದೆ. ಹೀಗಾಗಿ ಸಾರಿಗೆ, ಪೊಲೀಸ್ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಅಪಘಾತ ಸಂಭವಿಸಿದ ಸ್ಥಳಗಳನ್ನು ಗುರುತಿಸಿ, ಅವುಗಳ ಕುರಿತು ಜಂಟಿ ಅಧ್ಯಯನ ನಡೆಸಬೇಕು ಎಂದು ತಿಳಿಸಿದರು.

ತಾಲ್ಲೂಕು ಆಸ್ಪತ್ರೆ, ಜಿಲ್ಲಾ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜಿನಿಂದ ರಸ್ತೆ ಅಪಘಾತ ಪ್ರಕರಣಗಳ ಮಾಹಿತಿ ಪಡೆಯಬೇಕು. ಅಪಘಾತಗಳನ್ನು ಕಡಿಮೆ ಮಾಡುವ ದಿಸೆಯಲ್ಲಿ ಸರಿಯಾದ ದತ್ತಾಂಶ ಸಂಗ್ರಹಿಸಿ, ವಿಶ್ಲೇಷಿಸಿ ಸಮಿತಿಗೆ ವರದಿ ಸಲ್ಲಿಸಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ತಾಲ್ಲೂಕುವಾರು ರಸ್ತೆ, ಹೆದ್ದಾರಿ, ಶಾಲಾ ವಲಯಗಳಲ್ಲಿ ಅಸುರಕ್ಷಿತ ಸ್ಥಳ, ಅಪಘಾತ ವಲಯಗಳನ್ನು ಗುರುತಿಸಿ ಅವುಗಳನ್ನು ಸರಿಪಡಿಸಲು ಕ್ರಮ ಕೈಗೊಳ್ಳಬೇಕು. ಅಗತ್ಯ ಇರುವ ಕಡೆಗಳಲ್ಲಿ ರಸ್ತೆ ಉಬ್ಬುಗಳನ್ನು ನಿರ್ಮಿಸಬೇಕು. ಅವುಗಳಿಗೆ ಕಡ್ಡಾಯವಾಗಿ ಬಣ್ಣ ಬಳಿಯಬೇಕು. ಎಚ್ಚರಿಕೆಯ ಫಲಕ ಅಳವಡಿಸಬೇಕು ಎಂದು ತಿಳಿಸಿದರು.

ಹೆಲ್ಮೇಟ್, ಸೀಟ್ ಬೆಲ್ಟ್ ಧರಿಸುವುದು ಸೇರಿದಂತೆ ರಸ್ತೆ ಸುರಕ್ಷತಾ ನಿಯಮಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಮೇಲಿಂದ ಮೇಲೆ ನಡೆಸಬೇಕು ಎಂದು ಹೇಳಿದರು.

ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆಗೆ ಅಗತ್ಯ ಸೌಕರ್ಯಗಳ ವ್ಯವಸ್ಥೆ ಮಾಡಿಕೊಳ್ಳಲು ಒತ್ತು ಕೊಡಬೇಕು ಎಂದು ತಿಳಿಸಿದರು.

ಆಟೊ ರಿಕ್ಷಾ ಹಾಗೂ ಶಾಲಾ ವಾಹನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ಅಪಾಯಕಾರಿ ರೀತಿಯಲ್ಲಿ ಸಾಗಿಸುವುದನ್ನು ನಿಲ್ಲಿಸಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಕನಿಷ್ಠ ಎರಡು ತಿಂಗಳಿಗೊಮ್ಮೆ ಸಮಿತಿಯ ಸಭೆ ಆಯೋಜಿಸಬೇಕು. ಅಪಘಾತಗಳು, ಅವುಗಳಿಗೆ ಕಾರಣ ಹಾಗೂ ಪರಿಹಾರೋಪಾಯಗಳ ಕುರಿತು ಚರ್ಚೆ ನಡೆಸಬೇಕು ಎಂದು ಹೇಳಿದರು.

ಪ್ರಸಕ್ತ ವರ್ಷ 13 ರಸ್ತೆ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಜಿ.ಎಸ್. ಕೆರೂರ್ ಮಾಹಿತಿ ನೀಡಿದರು.

ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ್, ಜಿಲ್ಲಾಮಟ್ಟದ ರಸ್ತೆ ಸುರಕ್ಷತಾ ಸಮಿತಿಯ ಸದಸ್ಯರಾದ ಅಬ್ದುಲ್ ಖದೀರ್, ಅಶೋಕಕುಮಾರ ಕರಂಜಿ, ಬೀದರ್ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಶರಣಬಸಪ್ಪ ಕೋಟಪ್ಪಗೋಳ, ನಗರಸಭೆ ಆಯುಕ್ತ ಬಸಪ್ಪ ಬಿ.ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು