ಭಾನುವಾರ, ಜನವರಿ 23, 2022
24 °C
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜಾ ಸೂಚನೆ

ಬೀದರ್: ಖಾಸಗಿ ಆಸ್ಪತ್ರೆಗಳಲ್ಲಿ ಶೇ50 ರಷ್ಟು ಹಾಸಿಗೆ ಕಾಯ್ದಿರಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ‘ವಿವಿಧೆಡೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೀದರ್‌ ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತೆ ಕ್ರಮ ವಹಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜಾ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್ ಮೂರನೇ ಅಲೆ ತಡೆಗೆ ಕೈಗೊಳ್ಳಲಾದ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.‌

‘ಜಿಲ್ಲೆಯಲ್ಲಿನ ನೋಂದಾಯಿತ ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿನ ಒಟ್ಟು ಹಾಸಿಗೆಯ ಶೇ 50ರಷ್ಟನ್ನು ಕೋವಿಡ್‌ ಸೋಂಕಿತರ ಚಿಕಿತ್ಸೆಗಾಗಿ ಮೀಸಲಿಡಬೇಕು. ಕಾಲಕಾಲಕ್ಕೆ ಸರ್ಕಾರ ಹೊರಡಿಸುವ ಮಾರ್ಗಸೂಚಿ ಅನುಸಾರ ಸರ್ಕಾರ ನಿಗದಿ ಪಡಿಸಿದ ದರದಲ್ಲಿ ಕೋವಿಡ್ ಚಿಕಿತ್ಸೆ ನೀಡಬೇಕು’ ಎಂದರು.

‘ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ, ಕೆಪಿಎಂಇ ಹಾಗೂ ಆರೋಗ್ಯ ಸುರಕ್ಷಾ ಟ್ರಸ್ಟ್ ಅಡಿಯಲ್ಲಿ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಸರ್ಕಾರದಿಂದ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳು ತಮ್ಮ ಆಸ್ಪತ್ರೆಗಳಲ್ಲಿನ ಬೆಡ್‌ಗಳ ಸಂಖ್ಯೆ, ಆಕ್ಸಿಜನ್, ವೆಂಟಿಲೇಟರ್ ಸೇರಿದಂತೆ ಮತ್ತಿತರ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ನೀಡಬೇಕು’ ಎಂದು ಸೂಚಿಸಿದರು.

‘ಜಿಲ್ಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಸೇರಿ ಒಟ್ಟು 1,114 ಬೆಡ್‌ಗಳನ್ನು ಕೋವಿಡ್‌ಗಾಗಿಯೇ ಕಾಯ್ದಿರಿಸಲಾಗಿದೆ. ಆಕ್ಸಿಜನ್ ಮತ್ತು ವೆಂಟಿಲೇಟರ್ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು. ಎಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲೂ ತಲಾ 50 ಮತ್ತು 100 ಹಾಸಿಗೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ 80 ಆಕ್ಸಿಜನ್ ಬೆಡ್ ವ್ಯವಸ್ಥೆ ಕೂಡ ಮಾಡಲಾಗಿದೆ’ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಸಭೆಗೆ ಮಾಹಿತಿ ನೀಡಿದರು.

‘ಜಿಲ್ಲೆಯಲ್ಲಿ ಜನವರಿ 6ರವರೆಗೆ 12,82,465 ಮೊದಲನೇ ಡೋಸ್ ಹಾಗೂ 9,55,643 ಎರಡನೇ ಡೋಸ್ ಸೇರಿ 22,38,108 ಕೋವಿಡ್ ಡೋಸ್ ನೀಡಲಾಗಿದೆ. ರಾಜ್ಯದ ಟಾಪ್ 5 ಜಿಲ್ಲೆಗಳ ಪಟ್ಟಿಯಲ್ಲಿ ಬೀದರ್ ಗುರುತಿಸಿಕೊಂಡಿದೆ’ ಎಂದು ತಿಳಿಸಿದರು.

‘ಜಿಲ್ಲೆಯಲ್ಲಿ 15-18 ವರ್ಷದೊಳಗಿನ 1,05,083 ಮಕ್ಕಳ ಪೈಕಿ ಜನವರಿ 3ರಂದು 27,885ರಷ್ಟು ಮಕ್ಕಳಿಗೆ ಜನವರಿ 4ರಂದು 22,840ರಷ್ಟು ಮಕ್ಕಳಿಗೆ ಕೋವಿಡ್ ಡೋಸ್ ನೀಡಲಾಗಿದೆ. ಪ್ರತಿ ಎರಡು ಗಂಟೆಗೊಮ್ಮೆ ಲಸಿಕಾಕರಣದ ಪ್ರಗತಿ ದಾಖಲಿಸಿ ಮಕ್ಕಳಿಗೂ ಲಸಿಕೆ ನೀಡುವ ಪ್ರಕ್ರಿಯೆಯನ್ನು ಚುರುಕುಗೊಳಿಸಲಾಗುತ್ತಿದೆ’ ಎಂದು ಹೇಳಿದರು.

ಆಕ್ಸಿಜನ್ ಪ್ಲಾಂಟ್ ಕಾರ್ಯಕ್ಷಮತೆ: ರೋಗಿಗಳ ಅಗತ್ಯಕ್ಕೆ ತಕ್ಕಂತೆ ಆಕ್ಸಿಜನ್ ಪೂರೈಕೆ ಇರಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಕಡೆಗಳಲ್ಲಿನ ಆಕ್ಸಿಜನ್ ಪ್ಲಾಂಟ್‌ಗಳ ಕಾರ್ಯಕ್ಷಮತೆಯ ಬಗ್ಗೆ ಗಮನ ಹರಿಸಬೇಕು’ ಎಂದು ಕಾರ್ಯದರ್ಶಿ ತಹಶೀಲ್ದಾರ್‌ಗಳಿಗೆ ಸೂಚಿಸಿದರು.

‘ಕೋವಿಡ್-19 ನಿಗದಿತ ಆಸ್ಪತ್ರೆಗಳಲ್ಲಿ ಔಷಧದ ದಾಸ್ತಾನು ಸಮರ್ಪಕವಾಗಿರಬೇಕು. ವೈದ್ಯರು ಮತ್ತು ಸಿಬ್ಬಂದಿಯ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಆಂಬುಲೆನ್ಸ್ ಸೌಕರ್ಯಕ್ಕೂ ಗಮನ ಹರಿಸಬೇಕು’ ಎಂದು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಜಹೀರಾ ನಸೀಮ್, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಬಸವಕಲ್ಯಾಣ ಉಪ ವಿಭಾಗಾಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರತಿಕಾಂತ ಸ್ವಾಮಿ, ಡಿಎಸ್‌ಒ ಡಾ.ಕೃಷ್ಣಾ ರೆಡ್ಡಿ, ವಾರ್‌ರೂಮ್‌ ಜಿಲ್ಲಾ ನೋಡೆಲ್‌ ಅಧಿಕಾರಿ ಡಾ.ಗೌತಮ ಅರಳಿ, ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಿವಶಂಕರ, ಡಾ.ರಾಜಶೇಖರ ಪಾಟೀಲ, ಡಾ.ದೀಪಾ ಕೊಂಡಾ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.