ಸೋಮವಾರ, ನವೆಂಬರ್ 18, 2019
28 °C

17ರಂದು ರಾಜ್ಯಮಟ್ಟದ ಸಾಹಿತ್ಯ, ಸಂಗೀತ, ನೃತ್ಯೋತ್ಸವ

Published:
Updated:

ಬೀದರ್:  ಪಂಡಿತ ಪುಟ್ಟರಾಜ ಗವಾಯಿ ಅವರ 9ನೇ ಪುಣ್ಯಸ್ಮರಣೆ ಪ್ರಯುಕ್ತ ನಗರದ ಜಿಲ್ಲಾ ರಂಗಮಂದಿರದಲ್ಲಿ ಸೆಪ್ಟೆಂಬರ್ 17 ರಂದು ಸಂಜೆ 4ಕ್ಕೆ ರಾಜ್ಯಮಟ್ಟದ ಸಾಹಿತ್ಯ, ಸಂಗೀತ ನೃತ್ಯೋತ್ಸವ ಹಾಗೂ ಪುಟ್ಟರಾಜ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿದೆ.

ಪಶು ಸಂಗೋಪನಾ ಸಚಿವ ಪ್ರಭು ಚವಾಣ್ ಉದ್ಘಾಟಿಸುವರು. ಬಸವಮುಕ್ತಿ ಮಂದಿರದ ಶಿವಯೋಗೀಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಚಿದ್ರಿ, ಸಂಸದ ಭಗವಂತ ಖೂಬಾ, ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪೂರೆ, ಶಾಸಕ ರಹೀಂಖಾನ್, ಜಿಲ್ಲಾಧಿಕಾರಿ ಡಾ.ಎಚ್.ಆರ್. ಮಹಾದೇವ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಉದ್ಯಮಿ ಗುರುನಾಥ ಕೊಳ್ಳೂರ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು.

ಗಾನಯೋಗಿ ಪಂಚಾಕ್ಷರ ಗವಾಯಿ ಸೇವಾ ಸಂಘದ ಗೌರವಾಧ್ಯಕ್ಷ ಪ್ರೊ.ದೇವೇಂದ್ರ ಕಮಲ್ ಅಧ್ಯಕ್ಷತೆ ವಹಿಸುವರು. ಅಧ್ಯಕ್ಷ ಪ್ರೊ.ಎಸ್.ವಿ.ಕಲ್ಮಠ ಪ್ರಾಸ್ತಾವಿಕವಾಗಿ ಮಾತನಾಡುವರು. ಕರ್ನಾಟಕ ಜಾನಪದ ಅಕಾಡೆಮಿ ಮಾಜಿ ಸದಸ್ಯ ಪ್ರಕಾಶ ಅಂಗಡಿ ಅವರು ಪುಟ್ಟರಾಜ ಗವಾಯಿ ಅವರ ಕುರಿತು ಉಪನ್ಯಾಸ ನೀಡುವರು.

ಹಿರಿಯ ಅಂಧ ಕಲಾವಿದ ಬಸವರಾಜ ಚಿಂಚೋಳೆ ಅವರಿಗೆ ಪುಟ್ಟರಾಜ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಗಾನಯೋಗಿ ಪಂಚಾಕ್ಷರ ಗವಾಯಿ ಸೇವಾ ಸಂಘ ಹಾಗೂ ಟ್ರಸ್ಟ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಕಾರ್ಯಕ್ರಮ ಸಂಘಟಿಸಲಾಗಿದೆ.

ಪ್ರತಿಕ್ರಿಯಿಸಿ (+)