ಗುರುವಾರ , ಆಗಸ್ಟ್ 5, 2021
21 °C
ಜಿಲ್ಲೆಯಲ್ಲಿ ಪಿಯುಸಿ ಇಂಗ್ಲಿಷ್ ಪರೀಕ್ಷೆ ಬರೆಯಲಿದ್ದಾರೆ 13,038 ವಿದ್ಯಾರ್ಥಿಗಳು

ಬೀದರ್‌: ಕಂಟೇನ್ಮೆಂಟ್ ಪ್ರದೇಶದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ

ಚಂದ್ರಕಾಂತ ಮಸಾನಿ Updated:

ಅಕ್ಷರ ಗಾತ್ರ : | |

Prajavani

ಬೀದರ್: ಮಾರ್ಚ್ 18 ರಂದು ನಡೆಯಲಿರುವ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ಪದವಿ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿವೆ. ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 300 ದಾಟಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ ತಯಾರಿಯನ್ನೂ ಪೂರ್ಣಗೊಳಿಸಿವೆ.

ಮೊದಲು ಒಂದು ಪರೀಕ್ಷಾ ಕೊಠಡಿಯಲ್ಲಿ ಗರಿಷ್ಠ 30 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗುತ್ತಿತ್ತು. ಕೋವಿಡ್ 19 ಸೋಂಕಿನ ಕಾರಣ ಒಂದು ದೊಡ್ಡ ಕೊಠಡಿಯಲ್ಲಿ 24 ಹಾಗೂ ಸಣ್ಣ ಕೊಠಡಿಯಲ್ಲಿ 12 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಕಂಟೇನ್ಮೆಂಟ್ ಪ್ರದೇಶದಿಂದ ಬರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಹಾಲ್‌ ಟಿಕೆಟ್ ಮೇಲೆ ಮುದ್ರೆ ಹಾಕಿಕೊಂಡು ಬರುವಂತೆ ಸೂಚಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಒಂದು ಪ್ರತ್ಯೇಕ ಕೊಠಡಿ ಹಾಗೂ ಕಂಟೇನ್ಮೆಂಟ್ ಪ್ರದೇಶದಲ್ಲಿ ಎರಡು ಕೊಠಡಿಗಳನ್ನು ಗುರುತಿಸಲಾಗಿದೆ. ಜ್ವರ, ಶೀತ, ಕೆಮ್ಮು, ಕೊರೊನಾ ಸೋಂಕು ಶಂಕೆ ಇರುವ ವಿದ್ಯಾರ್ಥಿಗಳಿಗೆ ಈ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ.

ಜೋರಾಗಿ ಮಳೆ ಅಪ್ಪಳಿಸಿದರೂ ಸಮಸ್ಯೆ ಇಲ್ಲ. ಪರೀಕ್ಷಾ ಕೊಠಡಿಗಳು ಹಾಗೂ ಶೌಚಾಲಯಗಳು ಉತ್ತಮ ಸ್ಥಿತಿಯಲ್ಲಿವೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅನುದಾನದಲ್ಲಿ ಜಿಲ್ಲೆಯ ಎಲ್ಲ ಸರ್ಕಾರಿ ಪದವಿಪೂರ್ವ ಕಾಲೇಜು ಕಟ್ಟಡಗಳನ್ನು ದುರಸ್ತಿಗೊಳಿಸಲಾಗಿದೆ. ಡೆಸ್ಕ್ ಹಾಗೂ ಬೆಂಚ್‌ಗಳನ್ನು ಪೂರೈಸಲಾಗಿದೆ. ಕುಡಿಯುವ ನೀರಿನ ವ್ಯವಸ್ಥೆಯನ್ನೂ ಮಾಡಲಾಗಿದೆ.

‘ಪರೀಕ್ಷೆಗೆ ಬರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮುಖಗವಸು ಧರಿಸಿಕೊಂಡು ಬರುವಂತೆ ಸೂಚಿಸಲಾಗಿದೆ. ಕೊನೆ ಗಳಿಗೆಯಲ್ಲಿ ಮರೆತು ಬಂದರೂ ವಿದ್ಯಾರ್ಥಿಗಳಿಗೆ ಉಚಿತ ಮಾಸ್ಕ್ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಕೆಕೆಆರ್‌ಡಿಬಿ ಅನುದಾನದಲ್ಲಿ ಅಗತ್ಯತೆಯನ್ನು ನೋಡಿಕೊಂಡು ಥರ್ಮಲ್ ಸ್ಕ್ಯಾನಿಂಗ್ ಉಪಕರಣ, ಸ್ಯಾನಿಟೈಸರ್ ಹಾಗೂ ಮಾಸ್ಕ್ ಖರೀದಿಸಲಾಗಿದೆ’ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ರಮೇಶ ಬೇಜಗಂ ತಿಳಿಸಿದರು.

‘ಗ್ರಾಮೀಣ ಪ್ರದೇಶದಿಂದ ತಾಲ್ಲೂಕು ಕೇಂದ್ರಗಳಲ್ಲಿರುವ ಪರೀಕ್ಷಾ ಕೇಂದ್ರಗಳಿಗೆ ಬರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯ ಪ್ರತಿಯೊಂದು ಸಾರಿಗೆ ಘಟಕದ ವ್ಯವಸ್ಥಾಪಕರೊಂದಿಗೆ ಚರ್ಚಿಸಿ ಅವರಿಗೆ ರೂಟ್ ಮ್ಯಾಪ್ ಕೊಡಲಾಗಿದೆ’ ಎಂದು ಹೇಳಿದರು.

ಬೀದರ್ ಜಿಲ್ಲೆಯಲ್ಲಿ ಒಟ್ಟು 13,038 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದಕ್ಕಾಗಿ ಜಿಲ್ಲೆಯಲ್ಲಿ ಒಟ್ಟು 33 ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಬೀದರ್ ನಗರದಲ್ಲಿ ಅತಿ ಹೆಚ್ಚು 13 ಪರೀಕ್ಷೆ ಕೇಂದ್ರಗಳಿವೆ. ಬಸವಕಲ್ಯಾಣ, ಭಾಲ್ಕಿ ಹಾಗೂ ಹುಮನಾಬಾದ್ ತಾಲ್ಲೂಕಿನಲ್ಲಿ ತಲಾ ಐದು, ಔರಾದ್, ಕಮಲನಗರ, ಠಾಣಾಕುಶನೂರ್, ಚಿಟಗುಪ್ಪ ಹಾಗೂ ಮನ್ನಾಎಖ್ಖೆಳ್ಳಿಯಲ್ಲಿ ತಲಾ ಒಂದು ಪರೀಕ್ಷಾ ಕೇಂದ್ರ ಇದೆ.

***
ಕೈಗಡಿಯಾರ ನಿಷೇಧ

ಬೀದರ್: ಜಿಲ್ಲೆಯ 33 ಪರೀಕ್ಷಾ ಕೇಂದ್ರಗಳಲ್ಲಿ ಕೈಗಡಿಯಾರವನ್ನು ನಿಷೇಧಿಸಲಾಗಿದೆ. ವಿದ್ಯಾರ್ಥಿಗಳು, ಪರೀಕ್ಷಾ ಕೇಂದ್ರದ ಸಿಬ್ಬಂದಿ ಮತ್ತು ಮೇಲ್ವಿಚಾರಕರು ಮೊಬೈಲ್ ಫೋನ್‌ಗಳನ್ನು ಬಳಸಬಾರದು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಪರೀಕ್ಷೆ ವೀಕ್ಷಕರು ಹಾಗೂ ಮಾರ್ಗಾಧಿಕಾರಿಗಳು ಮಾತ್ರ ಬೇಸಿಕ್ ಮಾಡಲ್ ಮೊಬೈಲ್ ಫೋನ್ ಬಳಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ರಮೇಶ ಬೇಜಗಂ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು