ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌ನ ಶಾಹೀನ್‌ ಶಾಲೆ ಪ್ರಕರಣ: ಮಾಹಿತಿ ಕೇಳಿದ ಹೈಕೋರ್ಟ್‌

Last Updated 14 ಫೆಬ್ರುವರಿ 2020, 17:46 IST
ಅಕ್ಷರ ಗಾತ್ರ

ಬೆಂಗಳೂರು: ‘ಬೀದರ್‌ ನಗರದ ಶಾಹೀನ್‌ ಶಿಕ್ಷಣ ಸಂಸ್ಥೆಯ ಶಾಲಾ ವಾರ್ಷಿಕೋತ್ಸವದಲ್ಲಿ ವಿವಾದಾತ್ಮಕ ನಾಟಕ ಆಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದ್ರೋಹ ಆರೋಪದಡಿ ದೂರು ದಾಖಲಿಸಿಕೊಂಡು ಅಪ್ರಾಪ್ತ ವಿದ್ಯಾರ್ಥಿಗಳನ್ನು ವಿಚಾರಣೆಗೆ ಒಳಪಡಿಸಿರುವ ಬಗ್ಗೆ ಮಾಹಿತಿ ನೀಡಿ’ ಎಂದು ಹೈಕೋರ್ಟ್‌, ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿಗೆ ನಿರ್ದೇಶಿಸಿದೆ.

ಈ ಕುರಿತಂತೆ ವಕೀಲೆ ನಯನಾ ಜ್ಯೋತಿ ಜವಾಹರ್‌ ಹಾಗೂ ‘ಮಾನವ ಹಕ್ಕುಗಳು ಹಾಗೂ ನಿರ್ವಹಣೆ’ಯ ದಕ್ಷಿಣ ಭಾರತ ಘಟಕದ ಕಾರ್ಯ ನಿರ್ವಾಹಕ ನಿರ್ದೇಶಕರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್‌.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

‘ಶಾಲೆಯ ಮಕ್ಕಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಮಾಹಿತಿ ನೀಡಿ’ ಎಂದು ಸರ್ಕಾರದ ಪರ ವಕೀಲರಿಗೆ ನಿರ್ದೇಶಿಸಿದ ನ್ಯಾಯಪೀಠ, ವಿಚಾರಣೆ ಮುಂದೂಡಿದೆ.

ಆರೋಪ ಏನು?: ‘ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು, ಶಿಕ್ಷಕರು ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಸಮವಸ್ತ್ರ ಹಾಗೂ ಶಸ್ತ್ರಾಸ್ತ್ರಗಳೊಂದಿಗೆ ಶಾಲೆಯ ಒಳಗೆ ಪ್ರವೇಶಿಸಿ ಮಕ್ಕಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಇದು ಕಾನೂನು ಬಾಹಿರ ಮತ್ತು ಮಕ್ಕಳ ಹಕ್ಕುಗಳ ಸ್ಪಷ್ಟ ಉಲ್ಲಂಘನೆ’ ಎಂಬುದು ಅರ್ಜಿದಾರರ ಆರೋಪ.

‘ಸರ್ಕಾರದ ಪಾತ್ರ ಇಲ್ಲ’

ಗಜೇಂದ್ರಗಡ (ಗದಗ): ಬೀದರ್‌ ಜಿಲ್ಲೆಯ ಶಾಹೀನ್‌ ಶಾಲೆ ಪ್ರಕರಣದಲ್ಲಿ ಸರ್ಕಾರದ ಯಾವುದೇ ಪಾತ್ರ ಇಲ್ಲ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟ ಪಡಿಸಿದರು.

ಶುಕ್ರವಾರ ಇಲ್ಲಿ ನಡೆದ ರಾಜ್ಯಮಟ್ಟದ ಯುವಜನ ಮೇಳದ ಕಾರ್ಯಸೂಚಿ ಬಿಡುಗಡೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

‘ಸರ್ಕಾರದ ಕುಮ್ಮಕ್ಕಿನಿಂದ ಪ್ರಕರಣ ದಾಖಲಿಸಿದ್ದಾರೆ’ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ವಿರೋಧ ಪಕ್ಷದವರು ಇರುವುದೇ ಆರೋಪ ಮಾಡಲು, ಈಗಾಗಲೇ ಎಫ್‌ಐಆರ್‌ ದಾಖಲಾಗಿದ್ದು, ಆ ಆಧಾರದಲ್ಲಿ ತನಿಖೆ ನಡೆಯುತ್ತಿದೆ’ ಎಂದರು.

‘ಕಲ್ಲಡ್ಕ ಪ್ರಭಾಕರ್ ಭಟ್‌ ಶಾಲೆಯ ಪ್ರಕರಣವೇ ಬೇರೆ, ಬೀದರ್‌ ಜಿಲ್ಲೆಯ ಪ್ರಕರಣವೇ ಬೇರೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT