ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಆದ್ಯತೆ ನೀಡಿ

ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸೂಚನೆ
Last Updated 15 ನವೆಂಬರ್ 2018, 20:16 IST
ಅಕ್ಷರ ಗಾತ್ರ

ಬೀದರ್‌: ‘ಜಿಲ್ಲೆಯ ನಾಲ್ಕು ಬರಪೀಡಿತ ತಾಲ್ಲೂಕುಗಳಲ್ಲಿ ನೀರು ಪೂರೈಕೆಗೆ ಮೊದಲ ಆದ್ಯತೆ ಕೊಡಬೇಕು. ಯಾವುದೇ ಹಳ್ಳಿಯ ಜನರು ಕುಡಿಯುವ ನೀರಿಗಾಗಿ ನಮ್ಮ ಬಳಿ ಬರುವಂತಾಗಬಾರದು. ಗ್ರಾಮಸ್ಥರ ಸಮಸ್ಯೆಗಳ ನಿವಾರಣೆಗೆ ಅಧಿಕಾರಿಗಳು ಮುತುವರ್ಜಿ ವಹಿಸಿ ಕೆಲಸ ಮಾಡಬೇಕು’ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

‘ಕುಡಿಯುವ ನೀರು ಪೂರೈಕೆಗೆ ಹಣಕಾಸಿನ ಕೊರತೆ ಇಲ್ಲ. ಪ್ರತಿ ಜಿಲ್ಲೆಗೆ ₹ 50 ಲಕ್ಷ ಮಂಜೂರು ಮಾಡಲಾಗಿದೆ. ಮೊದಲ ಹಂತದಲ್ಲಿ ₹ 25 ಲಕ್ಷ ಬಿಡುಗಡೆ ಮಾಡಲಾಗಿದೆ. ಜಿಲ್ಲಾಧಿಕಾರಿ ಸಮಸ್ಯೆಯ ಗಂಭೀರತೆ ಅರಿತು ಕ್ರಮ ಕೈಗೊಳ್ಳಬೇಕು’ ಎಂದು ಸೂಚನೆ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಕಾಶೆಂಪೂರ ಮಾತನಾಡಿ, ‘ಈಗಾಗಲೇ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಲಾಗಿದೆ. ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಲ್ಲಿ ತಕ್ಷಣ ಸಮಸ್ಯೆ ನಿವಾರಿಸುವಂತೆ ಸೂಚನೆ ನೀಡಲಾಗಿದೆ. ಅಗತ್ಯ ಬಿದ್ದರೆ ಕೊಳವೆಬಾವಿ ಕೊರೆಸುವಂತೆಯೂ ಸೂಚಿಸಲಾಗಿದೆ’ ಎಂದು ಹೇಳಿದರು.

ಗಣಿ ಮತ್ತು ಭೂವಿಜ್ಞಾನ ಸಚಿವ ರಾಜಶೇಖರ ಪಾಟೀಲ ಮಾತನಾಡಿ, ‘ಹುಮನಾಬಾದ್ ತಾಲ್ಲೂಕಿನ ಕೆಲವು ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಉಂಟಾಗಿರುವುದು ಗಮನಕ್ಕೆ ಬಂದಿದೆ. ಗ್ರಾಮಸ್ಥರಿಂದ ದೂರುಗಳು ಬರದಂತೆ ಮುನ್ನೆಚ್ಚರಿಕೆ ವಹಿಸಬೇಕು’ ಎಂದು ಹೇಳಿದರು.

ಶಾಸಕ ರಹೀಂ ಖಾನ್ ಮಾತನಾಡಿ, ‘ಬೀದರ್ ನಗರದಲ್ಲಿ ಹಿಂದಿಗಿಂತಲೂ ಈ ಬಾರಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದೆ. ರಾಜ್ಯ ಸರ್ಕಾರ ವಿಶೇಷ ಅನುದಾನ ಒದಗಿಸಿರುವುದರಿಂದ ಅನುಕೂಲವಾಗಿದೆ’ ಎಂದು ತಿಳಿಸಿದರು.

ಜಿಲಾಧಿಕಾರಿ ಎಚ್.ಆರ್.ಮಹಾದೇವ, ‘ಜಿಲೆಯಲ್ಲಿ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳದಂತೆ ಮುನ್ನಚ್ಚರಿಕೆ ವಹಿಸಲಾಗಿದೆ’ ಎಂದು ತಿಳಿಸಿದರು.

ಭಾಲ್ಕಿ ಶಾಸಕ ಈಶ್ವರ ಖಂಡ್ರೆ ಮಾತನಾಡಿ, ‘ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಒಂದೇ ಹಂತದಲ್ಲಿ ದಾಖಲೆಯ ₹ 45 ಸಾವಿರ ಕೋಟಿ ರೈತರ ಸಾಲ ಮಾಡಿರುವುದು ಅಭಿನಂದನೀಯ’ ಎಂದರು.

‘ಔರಾದ್ ತಾಲ್ಲೂಕು ವಿಭಜನೆ ಮಾಡಿ ಕಮಲನಗರ ಹೊಸ ತಾಲ್ಲೂಕು ರಚನೆ ಮಾಡಲಾಗಿದೆ. ಹೊಸ ಅಧಿಕಾರಿಗಳನ್ನು ನೇಮಕ ಮಾಡಿ ಸಾರ್ವಜನಿಕರಿಗೆ ಉತ್ತಮ ಆಡಳಿತ ಕೊಡಬೇಕಾಗಿದೆ. ಔರಾದ್ ಪಟ್ಟಣದಲ್ಲಿ ಕೃಷಿ ಕಾಲೇಜು ಮತ್ತು ಆಸ್ಪತ್ರೆ ನಿರ್ಮಾಣ ಮಾಡಬೇಕಿದೆ’ ಎಂದು ಔರಾದ್ ಶಾಸಕ ಪ್ರಭು ಚವಾಣ್ ಹೇಳಿದರು.

ಬಸವಕಲ್ಯಾಣ ಕ್ಷೇತ್ರದ ಶಾಸಕ ಬಿ.ನಾರಾಯಣರಾವ್ ಮಾತನಾಡಿ, ‘ಬಸವಕಲ್ಯಾಣ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲ ಕೆರೆಗಳನ್ನು ತುಂಬಿಸಲು, ರಿಂಗ್‌ರೋಡ್ ನಿರ್ಮಾಣ, ರಸ್ತೆ, ಕುಡಿಯುವ ನೀರು ಪೂರೈಕೆಗೆ ₹ 500 ಕೋಟಿ ಮೊತ್ತದ ವಿಶೇಷ ಪ್ಯಾಕೇಜ್ ಪ್ರಕಟಿಸಬೇಕು’ ಎಂದು ಒತ್ತಾಯಿಸಿದರು.

‘ಅನುಭವ ಮಂಟಪಕ್ಕೆ ಈಗಾಗಲೇ ನಿಗದಿಪಡಿಸಿದ ₹ 650 ಕೋಟಿ ಪೈಕಿ ₹ 100 ಕೋಟಿ ನೀಡಿ ಅಡಿಗಲ್ಲು ಹಾಕಬೇಕು’ ಎಂದು ಮನವಿ ಮಾಡಿದರು.

ಪಶು ಸಂಗೋಪನೆ ಸಚಿವ ವೆಂಕಟರಾವ್ ನಾಡಗೌಡ, ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಭಾರತಬಾಯಿ ಶೇರಿಕಾರ, ಸಂಸದ ಭಗವಂತ ಖೂಬಾ, ವಿಧಾನ ಪರಿಷತ್ ಸದಸ್ಯ ಚಂದ್ರಶೇಖರ ಪಾಟೀಲ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಪ್ರಕಾಶ ಪಾಟೀಲ, ಈಶಾನ್ಯ ವಲಯ ಪೊಲೀಸ್ ಮಹಾ ನಿರ್ದೇಶಕ ಮನೀಷ್ ಖರ್ಬಿಕರ್, ಜಿ.ಪಂ. ಸಿಇಒ ಮಹಾಂತೇಶ ಬೀಳಗಿ, ಬೀದರ್‌್ ಹಾಗೂ ಕಲಬುರ್ಗಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ಟಿ.ಶ್ರೀಧರ, ಎನ್.ಶಶಿಕುಮಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT