ಬರ: ಯುದ್ಧೋಪಾದಿಯಲ್ಲಿ ನೀರಿನ ಸಮಸ್ಯೆ ಬಗೆಹರಿಸಿ– ಬಂಡೆಪ್ಪ ಕಾಶೆಂಪೂರ ಸೂಚನೆ

7

ಬರ: ಯುದ್ಧೋಪಾದಿಯಲ್ಲಿ ನೀರಿನ ಸಮಸ್ಯೆ ಬಗೆಹರಿಸಿ– ಬಂಡೆಪ್ಪ ಕಾಶೆಂಪೂರ ಸೂಚನೆ

Published:
Updated:

ಬೀದರ್: ‘ಜಿಲ್ಲೆಯಲ್ಲಿ ಬರ ಇರುವ ಕಾರಣ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳುವ ಸಾಧ್ಯತೆ ಇದೆ. ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಅಧಿಕಾರಿಗಳು ಯುದ್ಧೋಪಾದಿಯಲ್ಲಿ ಕಾರ್ಯನಿರ್ವಹಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಕಾಶೆಂಪೂರ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ, ಗ್ರಾಮೀಣಾಭಿವೃದ್ಧಿ ಇಲಾಖೆಯ ಕಿರಿಯ ಎಂಜಿನಿಯರ್, ಪಿಡಿಒ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಗ್ರಾಮಗಳಲ್ಲಿನ ಸಮಸ್ಯೆಗಳನ್ನು ಅರಿತುಕೊಳ್ಳಬೇಕು. ಸರ್ಕಾರ ಎಲ್ಲ ರೀತಿಯ ನೆರವು ಒದಗಿಸಲಿದೆ ಎಂದು ಗ್ರಾಮಸ್ಥರಿಗೆ ಮನವರಿಕೆ ಮಾಡಿಕೊಡಬೇಕು. ನಿರ್ಲಕ್ಷ್ಯ ತೋರಿದರೆ ಸ್ಥಳದಲ್ಲೇ ಅಮಾನತು ಮಾಡಲಾಗುವುದು’ ಎಂದು ಎಚ್ಚರಿಸಿದರು.

‘ಅಧಿಕಾರಿಗಳು ಪ್ರತಿ ತಾಲ್ಲೂಕಿಗೂ ಭೇಟಿ ನೀಡಿ ಪರಿಶೀಲಿಸಬೇಕು. ಪ್ರತಿಯೊಂದು ತಾಲ್ಲೂಕಿನಲ್ಲಿ ಐದು ಟ್ಯಾಂಕರ್‌ಗಳನ್ನು ಗುರುತಿಸಬೇಕು. ಕುಡಿಯುವ ನೀರಿನ ಸಮಸ್ಯೆ ಎದುರಾದರೆ ತಕ್ಷಣ ಪೂರೈಕೆ ಮಾಡಬೇಕು’ ಎಂದು ಸೂಚಿಸಿದರು.

‘ರಾಜ್ಯ ಸರ್ಕಾರ ಈಗಾಗಲೇ ಪ್ರತಿ ತಾಲ್ಲೂಕಿಗೆ ₹ 50 ಲಕ್ಷ ಅನುದಾನ ಬಿಡುಗಡೆ ಮಾಡಿದೆ. ಶಾಸಕರೇ ಕಾರ್ಯಪಡೆಯ ಅಧ್ಯಕ್ಷರಾಗಿರುವ ಕಾರಣ ಅವರು ಮೊಬೈಲ್‌ನಿಂದ ಕರೆ ಮಾಡಿ ಸೂಚಿಸಿದರೂ ಆದೇಶ ಪಾಲನೆ ಮಾಡಬೇಕು. ಕುಡಿಯುವ ನೀರು ಪೂರೈಕೆಗೆ ಹಣಕಾಸಿನ ಕೊರತೆ ಇಲ್ಲ’ ಎಂದು ಸ್ಪಷ್ಟಪಡಿಸಿದರು.

‘ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡದ ಕಾರಣ ಜನರು ಸಮಸ್ಯೆ ಎದುರಿಸುತ್ತಿದ್ದಾರೆ. ಬಟ್ಟಲಲ್ಲಿ ನೀರು ಹಿಡಿದು ಸ್ನಾನ ಮಾಡುವಂತಹ ಸ್ಥಿತಿ ಇದೆ’ ಎಂದು ರಘುನಾಥ ಮಲ್ಕಾಪುರೆ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !