ಗುರುವಾರ , ಆಗಸ್ಟ್ 5, 2021
26 °C
ಕೋವಿಡ್‌ 19 ನಿಯಮಾನುಸಾರ ಪರೀಕ್ಷೆ ನಡೆಸಿ: ರಾಮಚಂದ್ರನ್‌ ಆರ್‌

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 27,334 ವಿದ್ಯಾರ್ಥಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ‘ಜಿಲ್ಲೆಯಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ಇಲ್ಲದಂತೆ ಪಾರದರ್ಶಕ ಹಾಗೂ ಜಾಗರೂಕತೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಇತರ ತಾಲ್ಲೂಕುಮಟ್ಟದ ಅಧಿಕಾರಿಗಳೊಂದಿಗೆ ಅವರು ವಿಡಿಯೊ ಸಂವಾದ ನಡೆಸಿದರು.

‘ಕೋವಿಡ್ 19 ಸೋಂಕಿನ ಕಾರಣ ಸರ್ಕಾರದ ಮಾರ್ಗಸೂಚಿ ಅನುಸಾರ ಪರೀಕ್ಷೆ ನಡೆಸಬೇಕು. ಪರೀಕ್ಷಾ ಕೇಂದ್ರದ ಎಲ್ಲ ಕೊಠಡಿ ಹಾಗೂ ಪೀಠೋಪಕರಣಗಳನ್ನು ಸ್ಯಾನಿಟೈಜ್ ಮಾಡಬೇಕು. ಸುರಕ್ಷಿತ ಅಂತರ ಪಾಲಿಸಬೇಕು. ಪೊಲೀಸ್ ವ್ಯವಸ್ಥೆ ಮಾಡಬೇಕು. ಏನೇ ತೊಂದರೆಯಾದರೂ ತಮ್ಮ ಗಮನಕ್ಕೆ ತರಬೇಕು’ ಎಂದು ತಿಳಿಸಿದರು.

‘ಪರೀಕ್ಷೆ ಎಂದ ಕೂಡಲೇ ವಿದ್ಯಾರ್ಥಿಗಳಲ್ಲಿ ಭಯ ಸಹಜ. ನೀವು ಓದಿದ್ದೀರಿ, ಒಳ್ಳೆಯ ರೀತಿ ಪರೀಕ್ಷೆ ಬರೆಯುತ್ತೀರಿ ಎಂದು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಬೇಕು’ ಎಂದು ಸಲಹೆ ಮಾಡಿದರು.

‘ಪರೀಕ್ಷೆಯಲ್ಲಿ ಯಾವುದೇ ತಾರತಮ್ಯಕ್ಕೆ ಅವಕಾಶ ಕೊಡಬಾರದು. ಪರೀಕ್ಷೆಗಳು ಅಚ್ಚುಕಟ್ಟಾಗಿ ನಡೆಯಬೇಕು. ಪರೀಕ್ಷೆ ಬರೆಯಲು ಬರುವ ಪ್ರತಿಯೊಬ್ಬ ವಿದ್ಯಾರ್ಥಿಗೂ ಸಮಾನ ಅವಕಾಶ ದೊರೆಯಬೇಕು. ತಾರತಮ್ಯ ಇಲ್ಲದೇ ಪರೀಕ್ಷೆಗಳು ನಡೆದಲ್ಲಿ ಶ್ರಮಪಟ್ಟು ಓದಿದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಕಷ್ಟಪಟ್ಟು ಓದಿದ ವಿದ್ಯಾರ್ಥಿಗೂ ಮತ್ತು ಓದದೇ ಇರುವ ವಿದ್ಯಾರ್ಥಿಗೂ ಒಂದೇ ರೀತಿಯ ಅಂಕಗಳು ಬಂದರೆ ಪರೀಕ್ಷಾ ವ್ಯವಸ್ಥೆಯ ಬಗ್ಗೆ ನಂಬಿಕೆ ಬರುವುದಿಲ್ಲ’ ಎಂದು ಎಚ್ಚರಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ ಮಾತನಾಡಿ, ‘ಈಗಾಗಲೇ ಎರಡು, ಮೂರು ಸಭೆ ನಡೆಸಿ ಪರೀಕ್ಷಾ ಮಾರ್ಗಸೂಚಿಗಳನ್ನು ಎಲ್ಲರಿಗೂ ತಿಳಿಸಲಾಗಿದೆ. ತಾಲ್ಲೂಕು ಮತ್ತು ಜಿಲ್ಲಾಮಟ್ಟದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಪರೀಕ್ಷಾ ಕಾರ್ಯಕ್ಕೆ ನೇಮಿಸಲಾಗಿದೆ’ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು 99 ಪರೀಕ್ಷಾ ಕೇಂದ್ರಗಳು, 10 ಉಪ ಕೇಂದ್ರಗಳಿವೆ. 3 ಕೇಂದ್ರಗಳನ್ನು ಸೂಕ್ಷ್ಮ ಹಾಗೂ 2 ಕೇಂದ್ರಗಳನ್ನು ಅತಿ ಸೂಕ್ಷ್ಮ ಎಂದು ಗುರುತಿಸಲಾಗಿದೆ. ಒಟ್ಟು 27,334 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳಿಗೆ ಈಗಾಗಲೇ 40,000 ಮಾಸ್ಕ್‌ಗಳನ್ನು ಪೂರೈಸಲಾಗಿದೆ’ ಎಂದು ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್‌ ಮಾತನಾಡಿ, ‘ಪರೀಕ್ಷೆಗೆ ಮೂರು ದಿನಗಳ ಮೊದಲು ಪರೀಕ್ಷಾ ಕೇಂದ್ರಗಳಿಗೆ ಸೋಂಕು ನಿವಾರಕ ದ್ರವ ಸಿಂಪಡಿಸಬೇಕು. ಪರೀಕ್ಷೆ ಆರಂಭಕ್ಕೂ ಮೊದಲು ಮತ್ತು ನಂತರ ಸ್ಯಾನಿಟೈಜೇಶನ್ ಮಾಡಬೇಕು’ ಎಂದು ತಿಳಿಸಿದರು.

‘ಆರೋಗ್ಯ ತಪಾಸಣೆ ವೇಳೆ ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳಲ್ಲಿ ಯಾರಿಗಾದರೂ ಕೋವಿಡ್ 19 ಸೋಂಕಿನ ಲಕ್ಷಣಗಳು ಕಂಡುಬಂದಲ್ಲಿ ಅವರಿಗೆ ಪ್ರತ್ಯೇಕ ಕೋಣೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು. ಪರೀಕ್ಷೆ ಮುಗಿದ ಬಳಿಕ ಅವರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲು ಏರ್ಪಾಡು ಮಾಡಬೇಕು’ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು