ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆ: ಶಿಕ್ಷಣ ಇಲಾಖೆ ಅಣಿ

ಜಿಲ್ಲೆಯ 27,996 ವಿದ್ಯಾರ್ಥಿಗಳು ಬರೆಯಲಿದ್ದಾರೆ ಪರೀಕ್ಷೆ
Last Updated 17 ಜುಲೈ 2021, 13:13 IST
ಅಕ್ಷರ ಗಾತ್ರ


ಬೀದರ್‌: ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಜುಲೈ 19 ಹಾಗೂ 22ರಂದು ನಡೆಸಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ
ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲೆಯಲ್ಲಿ ಸಕಲ ಸಿದ್ಧತೆ ಮಾಡಿಕೊಂಡಿದೆ.

ಪರೀಕ್ಷಾ ಕೊಠಡಿ ಹಾಗೂ ಪೀಠೋಪಕರಣಗಳನ್ನು ಸ್ಯಾನಿಟೈಸ್ ಮಾಡಲಾಗಿದೆ. ‍ಪರೀಕ್ಷಾ ಸಿಬ್ಬಂದಿಗೆ ಕೋವಿಡ್‌ ಲಸಿಕೆ ಕೊಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಗುಂಪು ಗೂಡುವಿಕೆ ತಡೆಗಟ್ಟಲು ದೈಹಿಕ ಶಿಕ್ಷಣ ಶಿಕ್ಷಕರು, ಸ್ಕೌಟ್‌ ಮತ್ತು ಗೈಡ್ಸ್ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲಾಗುತ್ತಿದೆ.

ಪರೀಕ್ಷಾ ಕೇಂದ್ರಗಳ ಪ್ರವೇಶ ದ್ವಾರದಲ್ಲೇ ಥರ್ಮಲ್ ಸ್ಕ್ರೀನಿಂಗ್ ಮೂಲಕ ವಿದ್ಯಾರ್ಥಿಗಳ ದೈಹಿಕ ಉಷ್ಣಾಂಶ ಪರೀಕ್ಷಿಸಲು ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ. ಜ್ವರ ಕಂಡು ಬಂದರೆ ತಕ್ಷಣ ಪಕ್ಕದ ಕೊಠಡಿಯಲ್ಲಿ ಕೂರಿಸಿ ಪರೀಕ್ಷೆ ಬರೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ನೋಂದಣಿ ಮಾಡಿಕೊಂಡಿರುವ ಪ್ರತಿಯೊಬ್ಬ ವಿದ್ಯಾರ್ಥಿಗೂ ಪರೀಕ್ಷೆಗೆ ಹಾಜರಾಗಲು ಸೂಚಿಸಲಾಗಿದೆ. ಕೋವಿಡ್‌ ಹಾಗೂ ಸುರಕ್ಷತಾ ಕ್ರಮಗಳ ಬಗ್ಗೆ ಮುಂಚಿತವಾಗಿ ಅರಿವು ಮೂಡಿಸಲಾಗಿದೆ. ಈವರೆಗೆ ಯಾವುದೇ ಪರೀಕ್ಷೆಗೆ ನೋಂದಣಿ ಮಾಡಿಕೊಂಡ ಯಾವದೇ ವಿದ್ಯಾರ್ಥಿಗೆ ಕೋವಿಡ್‌ ಇರುವುದು ದೃಢಪಟ್ಟಿಲ್ಲ.

ಪರೀಕ್ಷಾ ಕೇಂದ್ರಗಳ ಸುತ್ತ ಜನಜಂಗುಳಿ ಆಗದಂತೆ ನೋಡಿಕೊಳ್ಳಲು ಪೊಲೀಸರ ಸಹಕಾರ ಪಡೆಯಲಾಗುತ್ತಿದೆ. ಜಿಲ್ಲಾಧಿಕಾರಿ ನಿರ್ದೇಶನದಂತೆ ಯಾವುದೇ ರೀತಿಯ ಸಮಸ್ಯೆಗಳು ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗಂಗಣ್ಣ ಸ್ವಾಮಿ ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್‌ ಅವರು ಮುತುವರ್ಜಿ ವಹಿಸಿ ಪರೀಕ್ಷೆ ಬರೆಯುವ ಎಲ್ಲ ವಿದ್ಯಾರ್ಥಿಗಳಿಗೆ ಅಲ್ಪ ಉಪಾಹಾರ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದಾರೆ.


ಮೊದಲ ಬಾರಿ ಪರೀಕ್ಷೆ ಬರೆಯಲಿರುವ 23,896 ವಿದ್ಯಾರ್ಥಿಗಳು


ಬೀದರ್‌: 12,289 ಬಾಲಕರು ಹಾಗೂ 11,634 ಬಾಲಕಿಯರು ಸೇರಿ ಒಟ್ಟು 27,999 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇವರಲ್ಲಿ 23,896 ವಿದ್ಯಾರ್ಥಿಗಳು ಮೊದಲ ಬಾರಿಗೆ ಪರೀಕ್ಷೆ ಬರೆಯಲಿದ್ದಾರೆ. 1,352 ಖಾಸಗಿ ಅಭ್ಯರ್ಥಿಯಾಗಿ ಹಾಗೂ 2,751 ಪುನರಾವರ್ತಿತ ವಿದ್ಯಾರ್ಥಿಗಳು ‍ಪರೀಕ್ಷೆಗೆ ಹಾಜರಾಗಲಿದ್ದಾರೆ.

ಜಿಲ್ಲೆಯಲ್ಲಿ 164 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. 153 ಸಾಮಾನ್ಯ ಹಾಗೂ 11 ಸೂಕ್ಷ್ಮ ಪರೀಕ್ಷಾ ಕೇಂದ್ರಗಳಿವೆ. ಒಂದು ಕೊಠಡಿಯಲ್ಲಿ 12 ವಿದ್ಯಾರ್ಥಿಗಳಿಗೆ ಮಾತ್ರ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.

ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಕೋವಿಡ್‌ ಲಕ್ಷಣ ಕಂಡು ಬಂದರೆ ಪ್ರತ್ಯೇಕವಾಗಿ ಪರೀಕ್ಷೆ ನಡೆಸಲು ಒಂದು ಕೊಠಡಿ ಕಾಯ್ದಿರಿಸಲಾಗಿದೆ ಎಂದು ಶಿಕ್ಷಣಾಧಿಕಾರಿ ಟಿ.ಆರ್‌.ದೊಡ್ಡೆ ತಿಳಿಸಿದ್ದಾರೆ.


ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್


ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ವ್ಯವಸ್ಥೆ ಮಾಡಲಾಗಿದೆ. ರಸ್ತೆ ಸಾರಿಗೆ ಸಂಸ್ಥೆಯ ಎಲ್ಲ ಬಸ್‌ಗಳಲ್ಲಿ ವಿದ್ಯಾರ್ಥಿಗಳು ಹಾಲ್‌ ಟಿಕೆಟ್ ತೋರಿಸಿ ಪರೀಕ್ಷಾ ಕೇಂದ್ರದ ವರೆಗೆ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೀದರ್‌ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಕಾಂತ ಫುಲೇಕರ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT